2.5 ಲಕ್ಷ ಮೆಟ್ರಿಕ್ ಟನ್ ಮಾವು ಖರೀದಿಗೆ ಅನುಮೋದನೆ; ಕರ್ನಾಟಕದ ಮಾವು ಬೆಳೆಗಾರರಿಗೆ ಕೇಂದ್ರದ ಆಸರೆ

ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ ಈ ನಿರ್ಧಾರವನ್ನು ತಿಳಿಸಿದ್ದಾರೆ.;

Update: 2025-06-24 12:22 GMT

ಕರ್ನಾಟಕದ ಮಾವು ಬೆಳೆಗಾರರ ಬೇಡಿಕೆಗೆ ಕೇಂದ್ರ ಸರ್ಕಾರ ಸ್ಪಂದಿಸಿದ್ದು, ಮಾರುಕಟ್ಟೆ ಹಸ್ತಕ್ಷೇಪ ಯೋಜನೆಯ (Market Intervention Scheme - MIS) ಅಡಿಯಲ್ಲಿ 2025-26ರ ಮಾರುಕಟ್ಟೆ ವರ್ಷದಲ್ಲಿ 2.5 ಲಕ್ಷ ಮೆಟ್ರಿಕ್ ಟನ್‌ಗಳಷ್ಟು ಮಾವು ಖರೀದಿಸಲು ಅನುಮೋದನೆ ಕೊಟ್ಟಿದೆ. ಪ್ರತಿ ಕ್ವಿಂಟಲ್‌ಗೆ 1,616 ರೂಪಾಯಿ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ (Market Intervention Price) ನಿಗದಿಪಡಿಸಲಾಗಿದೆ.

ಬೆಂಬಲ ಬೆಲೆ ನೀಡುವಂತೆ ರೈತರು ರಾಜ್ಯ ಸರ್ಕಾರವನ್ನು ಸತತವಾಗಿ ಒತ್ತಾಯಿಸಿತ್ತು. ಆದರೆ ಸರ್ಕಾರ ಈ ಬಗ್ಗೆ ಯಾವುದೇ ಕ್ರಮ ಕೈಗೊಳ್ಳದೇ ಕೇಂದ್ರ ಸರ್ಕಾರಕ್ಕೆ ಪರಿಹಾರ ನೀಡುವಂತೆ ಕೋರಿತ್ತು. ಆದರೆ, ಕೇಂದ್ರ ಸರ್ಕಾರ ಅದನ್ನು ಪರಿಗಣಿಸಿಯೇ ಇರಲಿಲ್ಲ. ಬಳಿಕವೂ ರೈತರು ಪ್ರತಿಭಟನೆ ಮುಂದುವರಿಸಿದ್ದರು. ಬಳಿಕ ಅವರ ನರೆವಿಗೆ ಬರುವಂತೆ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ ಕೇಂದ್ರ ಕೃಷಿ ಸಚಿವರಿಗೆ ಪತ್ರ ಬರೆದಿದ್ದರು. ಇದಾದ ಬಳಿಕ ಇದೀಗ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆಯನ್ನು ಬಿಡುಗಡೆ ಮಾಡಲಾಗಿದೆ.  ಹೀಗಾಗಿ ರಾಜಕೀಯವಾಗಿ ಇದು ಕರ್ನಾಟಕ ಸರ್ಕಾರಕ್ಕೆ ಹಿನ್ನಡೆಯಾಗಿದೆ.


ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಕೇಂದ್ರ ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಬರೆದ ಪತ್ರದಲ್ಲಿ ಈ ನಿರ್ಧಾರವನ್ನು ತಿಳಿಸಿದ್ದಾರೆ. ಕುಮಾರಸ್ವಾಮಿ ಅವರು ಕರ್ನಾಟಕ ಮತ್ತು ಸುತ್ತಮುತ್ತಲಿನ ರಾಜ್ಯಗಳಲ್ಲಿ ಮಾವು ಬೆಳೆಗಾರರು ಪ್ರಸ್ತುತ ಮಾರುಕಟ್ಟೆ ಪರಿಸ್ಥಿತಿಯಿಂದ ಎದುರಿಸುತ್ತಿರುವ ತೊಂದರೆಗಳ ಬಗ್ಗೆ ಚೌಹಾಣ್ ಅವರ ಗಮನ ಸೆಳೆದು ಮನವಿ ಮಾಡಿದ್ದರು.

ಈ ಕ್ರಮವು ಕರ್ನಾಟಕದ ಮಾವು ಬೆಳೆಗಾರರಿಗೆ ದೊಡ್ಡ ಮಟ್ಟದ ಆರ್ಥಿಕ ನೆರವು ನೀಡಲಿದೆ. ಕುಮಾರಸ್ವಾಮಿ ಅವರ ನಿರಂತರ ಪ್ರಯತ್ನಗಳ ಫಲವಾಗಿ ಈ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಚೌಹಾಣ್ ತಮ್ಮ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಪ್ರಸ್ತುತ ಮಾರುಕಟ್ಟೆಯಲ್ಲಿ ಬೆಲೆ ಕುಸಿತದಿಂದ ಕಂಗೆಟ್ಟಿದ್ದ ಮಾವು ಬೆಳೆಗಾರರಿಗೆ ಈ ಯೋಜನೆಯು ದೊಡ್ಡ ಮಟ್ಟದ ನೆಮ್ಮದಿ ತರಲಿದೆ ಎಂದು ನಿರೀಕ್ಷಿಸಲಾಗಿದೆ. 

ಕುಮಾರಸ್ವಾಮಿ ಧನ್ಯವಾದ

ಮಾವು ಬೆಳೆಗಾರರ ನೆರವಿಗೆ ಬಂದ ಕೇಂದ್ರ ಸರ್ಕಾರಕ್ಕೆ ಕೇಂದ್ರ ಭಾರೀ ಕೈಗಾರಿಕೆ ಸಚಿವ ಎಚ್.ಡಿ. ಕುಮಾರಸ್ವಾಮಿ ಧನ್ಯವಾದ ಸಲ್ಲಿಸಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಹೃದಯಪೂರ್ವಕ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.

"ಬೆಲೆ ಕುಸಿತದಿಂದ ಕಂಗಾಲಾಗಿದ್ದ ರಾಜ್ಯದ ಮಾವು ಬೆಳೆಗಾರರ ಹಿತದೃಷ್ಟಿಯಿಂದ ಮನವಿ ಮಾಡಿದ ತಕ್ಷಣವೇ ಮಾರುಕಟ್ಟೆ ಮಧ್ಯಸ್ಥಿಕೆ ಬೆಲೆ ಯೋಜನೆ ಅಡಿಯಲ್ಲಿ ಬೆಂಬಲ ಬೆಲೆ ಘೋಷಿಸಿದ್ದಕ್ಕಾಗಿ ಕೇಂದ್ರದ ಕೃಷಿ ಸಚಿವರಾದ ಶ್ರೀ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಕರ್ನಾಟಕದ ಮಾವು ಬೆಳೆಗಾರರ ಪರವಾಗಿ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ" ಎಂದು ಅವರು ಹೇಳಿದ್ದಾರೆ.

 

Tags:    

Similar News