Mysore MUDA Case | ಲೋಕಾಯುಕ್ತ ಎಡಿಜಿಪಿಗೆ ಅಂತಿಮ ವರದಿ; ಸಿಎಂಗೆ ಕ್ಲೀನ್‌ಚಿಟ್?
ಮುಡಾ ಪ್ರಕರಣದ ಮೇಲ್ವಿಚಾರಣೆಯನ್ನು ಹೈಕೋರ್ಟ್ ನ್ಯಾಯಪೀಠವು ಲೋಕಾಯುಕ್ತ ಎಡಿಜಿಪಿಗೆ ವಹಿಸಿರುವ ಹಿನ್ನೆಲೆಯಲ್ಲಿ ಗುರುವಾರ ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು 550 ಪುಟಗಳ ಅಂತಿಮ ವರದಿ ಸಲ್ಲಿಸಿದ್ದಾರೆ.;
ಮುಡಾ ನಿವೇಶನ ಹಂಚಿಕೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ಕುರಿತು ತನಿಖೆ ನಡೆಸಿರುವ ಲೋಕಾಯುಕ್ತ ಪೊಲೀಸರು ಗುರುವಾರ ಲೋಕಾಯುಕ್ತ ಎಡಿಜಿಪಿ ಸುಬ್ರಮಣ್ಯೇಶ್ವರ ರಾವ್ ಅವರಿಗೆ ಅಂತಿಮ ವರದಿ ಸಲ್ಲಿಸಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಬಿ.ಎಂ.ಪಾರ್ವತಿ ಅವರಿಗೆ ನಿವೇಶನ ಹಂಚಿಕೆ ಮಾಡುವ ಅವಶ್ಯಕತೆ ಇಲ್ಲದಿದ್ದರೂ ಅಧಿಕಾರಿಗಳು ನಿಯಮ ಉಲ್ಲಂಘಿಸಿ ಹಂಚಿಕೆ ಮಾಡಿದ್ದಾರೆ. ಈ ರೀತಿ ನಿವೇಶನ ಹಂಚಿಕೆ ಮಾಡುವಾಗ ಯಾವುದೇ ರಾಜಕೀಯ ಒತ್ತಡಕ್ಕೆ ಒಳಗಾಗಿರಲಿಲ್ಲ ಎಂದು ಹೇಳುವ ಮೂಲಕ ಸಿಎಂ ಸಿದ್ದರಾಮಯ್ಯ ಅವರಿಗೆ ಲೋಕಾಯುಕ್ತರು ಕ್ಲೀನ್ ಚಿಟ್ ನೀಡಿದ್ದಾರೆ.
ಪ್ರಕರಣದ ಮೇಲ್ವಿಚಾರಣೆಯನ್ನು ಲೋಕಾಯುಕ್ತ ಎಡಿಜಿಪಿ ಅವರಿಗೆ ವಹಿಸಿರುವ ಹಿನ್ನೆಲೆಯಲ್ಲಿ ಇಂದು ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರು 550 ಪುಟಗಳ ಅಂತಿಮ ವರದಿ ಸಲ್ಲಿಸಿದ್ದಾರೆ.
ಲೋಕಾಯುಕ್ತ ಅಧಿಕಾರಿಗಳು ವರದಿಯನ್ನು ಐದು ಭಾಗಗಳಾಗಿ ವಿಂಗಡಣೆ ಮಾಡಿದ್ದು, ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರವನ್ನು ಎಳೆ ಎಳೆಯಾಗಿ ಬಿಡಿಸಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸಿಎಂ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರಿಗೆ 14 ನಿವೇಶನ ನೀಡುವ ಅವಶ್ಯಕತೆಯೇ ಇರಲಿಲ್ಲ. ಅಧಿಕಾರಿಗಳು ಇದಕ್ಕಾಗಿ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಉಲ್ಲೇಖಿಸುವ ಮೂಲಕ ಪ್ರಕರಣದಲ್ಲಿ ಅಧಿಕಾರಿಗಳ ಲೋಪವನ್ನು ಎತ್ತಿ ತೋರಿಸಿದ್ದಾರೆ.
ಇದಲ್ಲದೇ ಕೆಸರೆ ಗ್ರಾಮದ ಜಮೀನು ದೇವರಾಜು ಅವರಿಗೆ ಬಂದಿದ್ದೇಗೆ, ಭೂ ಪರಿವರ್ತನೆ, ಡಿನೋಟಿಫಿಕೇಶನ್ ಆಗಿದ್ದೇಗೆ ಎಂಬ ಬಗ್ಗೆಯೂ ವರದಿಯಲ್ಲಿ ವಿವರವಾಗಿ ಉಲ್ಲೇಖಿಸಲಾಗಿದೆ.
ಈ ನಡುವೆ, ಜಾರಿ ನಿರ್ದೇಶನಾಲಯ ಕೂಡ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿದ್ದು, ಕುತೂಹಲ ಮೂಡಿಸಿದೆ. ಈಚೆಗೆ ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿತ್ತು. ಹೈಕೋರ್ಟ್ ತೀರ್ಪಿನ ಕುರಿತು ದೂರುದಾರ ಸ್ನೇಹಮಯಿ ಕೃಷ್ಣ ಅವರು ಮೇಲ್ಮನವಿ ಸಲ್ಲಿಸದಿರಲು ತೀರ್ಮಾನಿಸಿ, ತಾವೇ ಖುದ್ದು ವಾದ ಮಂಡನೆಗೆ ನಿರ್ಧರಿಸಿದ್ದರು.