ಪ್ರಚೋದನಕಾರಿ ಭಾಷಣ ಆರೋಪ; ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಎಫ್‌ಐಆರ್
ಮಂಗಳೂರಿನ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಡಾ.ಕಲ್ಲಡ್ಕ ಪ್ರಭಾಕರ ಭಟ್ ಭಾಗವಹಿಸಿ, ಮತಿಯ ಗುಂಪುಗಳ ನಡುವೆ ವೈಮನಸ್ಸು ಉಂಟು ಮಾಡುವ ಪ್ರಚೋದನಾಕಾರಿ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.;
ಕಲ್ಲಡ್ಕ ಪ್ರಭಾಕರ್ ಭಟ್
ಮಂಗಳೂರಿನ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ಆರ್ಎಸ್ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ ಭಟ್ ವಿರುದ್ಧ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಮೇ 12ರಂದು ಸುಹಾಸ್ ಶೆಟ್ಟಿ ಶ್ರದ್ಧಾಂಜಲಿ ಸಭೆಯಲ್ಲಿ ಸಮಾಜದ ಸ್ವಾಸ್ಥ್ಯ ಕೆಡುವಂತಹ, ಮತಿಯ ಗುಂಪುಗಳ ನಡುವೆ ವೈಷಮ್ಯ ಮೂಡಿಸುವ ಪ್ರಚೋದನಾಕಾರಿ ಹೇಳಿಕೆ ನೀಡಿದ್ದರು. ಘಟನೆ ನಡೆದ 17 ದಿನಗಳ ಬಳಿಕ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.
ಮಂಗಳೂರು ನಗರ ವ್ಯಾಪ್ತಿಯಲ್ಲಿ ಕೊಲೆಗೀಡಾದ ಸುಹಾಸ್ ಶೆಟ್ಟಿಗೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ಮಾಧ್ವ ಕಲ್ಯಾಣ ಮಂಟಪದಲ್ಲಿ ಶ್ರದ್ಧಾಂಜಲಿ ಸಭೆ ಆಯೋಜಿಸಲಾಗಿತ್ತು. ಸಭೆಯಲ್ಲಿ ಕಲ್ಲಡ್ಕ ಪ್ರಭಾಕರ ಭಟ್ ಕೂಡ ಭಾಗವಹಿಸಿದ್ದರು.
ಕಲ್ಲಡ್ಕ ಪ್ರಭಾಕರ್ ಭಟ್ ಅವರ ಪ್ರಚೋದನಾಕಾರಿ ಹೇಳಿಕೆಯು ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇರುವುದರಿಂದ ಜೂನ್ 2ರಂದು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಬಿಎನ್‌ಎಸ್ ಸೆಕ್ಷನ್ 353(2) ಪ್ರಕಾರ ಪ್ರಕರಣ ದಾಖಲಿಸಿದ್ದು, ಕಾನೂನು ಕ್ರಮ ಜರುಗಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.