ಮುಸ್ಲಿಂ ಸಮುದಾಯದ ವಿರುದ್ಧ ಹೇಳಿಕೆ: ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್
ಮುಸ್ಲಿಮರ ಮತದಾನದ ಅಧಿಕಾರ ಕಿತ್ತುಕೊಳ್ಳಬೇಕು ಎಂಬ ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ.;
ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ರದ್ದುಪಡಿಸಲು ಕಾನೂನು ಜಾರಿಗೆ ತರಬೇಕು ಎಂದು ಹೇಳಿಕೆ ನೀಡಿದ್ದ ವಿಶ್ವ ಒಕ್ಕಲಿಗ ಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಕರ್ನಾಟಕ ವಕ್ಫ್ ಮಂಡಳಿ ಹೊರಡಿಸಿರುವ ನೋಟಿಸ್‌ಗಳ ವಿರುದ್ಧ ಭಾರತೀಯ ಕಿಸಾನ್ ಸಂಘ ಮಂಗಳವಾರ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡುವಾಗ ರೈತರು ಮತ್ತು ಅವರ ಭೂಮಿಯನ್ನು ರಕ್ಷಿಸಲು ಎಲ್ಲರೂ ಒಂದಾಗಬೇಕು ಎಂದು ಒತ್ತಾಯಿಸಿದ ಸ್ವಾಮೀಜಿ, ಮುಸ್ಲಿಂ ಸಮುದಾಯಕ್ಕೆ ಮತದಾನದ ಹಕ್ಕು ರದ್ದುಪಡಿಸಲು ಕಾನೂನು ಜಾರಿಗೆ ತರಬೇಕು ಎಂಬ ಹೇಳಿಕೆಯನ್ನು ನೀಡಿದ್ದರು.
ಸ್ವಾಮೀಜಿ ನೀಡಿದ್ದ ವಿವಾದಾತ್ಮಕ ಹೇಳಿಕೆಗೆ ರಾಜ್ಯದಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಇದರ ಬೆನ್ನಲ್ಲೇ ಸ್ವಾಮೀಜಿ 'ಮುಸ್ಲಿಮರು ಕೂಡ ಈ ದೇಶದ ಪ್ರಜೆಗಳು. ಎಲ್ಲರಂತೆ ಅವರಿಗೂ ಮತದಾನದ ಹಕ್ಕಿದೆ. ನನ್ನ ಹೇಳಿಕೆಯಿಂದ ಮುಸ್ಲಿಂ ಬಾಂಧವರಿಗೆ ನೋವಾಗಿದ್ದರೆ, ಅದಕ್ಕಾಗಿ ಪ್ರಾಮಾಣಿಕವಾಗಿ ಕ್ಷಮೆಯಾಚಿಸುತ್ತೇನೆʼ ಎಂದು ಕ್ಷಮೆ ಕೇಳಿದ್ದರು.
ಇದೀಗ ಸಾಮಾಜಿಕ ಕಾರ್ಯಕರ್ತರೊಬ್ಬರು ನೀಡಿದ ದೂರಿನ ಆಧಾರದ ಮೇಲೆ ಬೆಂಗಳೂರಿನ ಉಪ್ಪಾರಪೇಟೆ ಪೊಲೀಸ್ ಠಾಣೆಯಲ್ಲಿ ಬುಧವಾರ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
"ನಾವು ಅವರ ವಿರುದ್ಧ (ಸ್ವಾಮೀಜಿ) ವಿರುದ್ಧ ಭಾರತೀಯ ನ್ಯಾಯ ಸಂಹಿತೆಯ ಸೆಕ್ಷನ್ 299 (ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು, ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳಿಗೆ ಧಕ್ಕೆತರುವ ಉದ್ದೇಶ) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿದ್ದೇವೆ" ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.