ರೌಡಿ ಶೀಟರ್ ಕೊಲೆ ಪ್ರಕರಣ: ಕೆ.ಆರ್. ಪುರಂ ಶಾಸಕ ಬೈರತಿ ಬಸವರಾಜ್ ವಿರುದ್ಧ ಎಫ್‌ಐಆರ್ ದಾಖಲು
ಕೊಲೆಯಾದ ಶಿವಪ್ರಕಾಶ್ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಜಗದೀಶ್, ಕಿರಣ್, ವಿಮಲ್, ಅನಿಲ್ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.;
ಭಾರತಿನಗರ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಮಾಜಿ ಸಚಿವ, ಕೆಆರ್ ಪುರಂನ ಬಿಜೆಪಿ ಶಾಸಕ ಬೈರತಿ ಬಸವರಾಜ್ ಹೆಸರು ಕೇಳಿ ಬಂದಿದೆ.
ಹಲಸೂರು ಕೆರೆಯ ಸಮೀಪದ ಮನೆಯೊಂದರ ಎದುರು ಮಂಗಳವಾರ ರಾತ್ರಿ ನಡೆದ ರೌಡಿಶೀಟರ್ ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆ.ಆರ್. ಪುರ ಕ್ಷೇತ್ರದ ಬಿಜೆಪಿ ಶಾಸಕ ಬೈರತಿ ಬಸವರಾಜ್ ವಿರುದ್ಧ ಭಾರತಿ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಕೊಲೆಯಾದ ಶಿವಪ್ರಕಾಶ್ ಅವರ ತಾಯಿ ನೀಡಿದ ದೂರಿನ ಆಧಾರದ ಮೇಲೆ ಜಗದೀಶ್, ಕಿರಣ್, ವಿಮಲ್, ಅನಿಲ್ ವಿರುದ್ಧವೂ ಎಫ್‌ಐಆರ್ ದಾಖಲಿಸಿಕೊಂಡು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಈ ಕೊಲೆ ನಡೆದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.
ಈ ಆರೋಪಗಳ ಕುರಿತು ಪ್ರತಿಕ್ರಿಯೆ ನೀಡಿರುವ ಶಾಸಕ ಬೈರತಿ ಬಸವರಾಜ್, "ಕೊಲೆ ಪ್ರಕರಣಕ್ಕೂ ನನಗೂ ಯಾವುದೇ ಸಂಬಂಧವಿಲ್ಲ. ಯಾರೇ ಸುಮ್ಮನೆ ದೂರು ನೀಡಿದರೂ ಎಫ್‌ಐಆರ್ ದಾಖಲಿಸಬಹುದೇ? ಎಫ್‌ಐಆರ್ ವಿರುದ್ಧ ಕಾನೂನು ಹೋರಾಟ ಮಾಡುತ್ತೇನೆ" ಎಂದು ಹೇಳಿದ್ದಾರೆ.