Zika Virus | ಬೆಂಗಳೂರಿನಲ್ಲಿ ಡೆಂಗ್ಯೂ ಹಾವಳಿ ನಡುವೆ ಇದೀಗ ಝೀಕಾ ವೈರಸ್ ಆತಂಕ!

ಬೆಂಗಳೂರು ಹೊರವಲಯದ ಆನೇಕಲ್‌ನ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಐದು ಮಂದಿ ರೋಗಿಗಳಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ.;

Update: 2024-08-19 05:56 GMT

ಡೆಂಗ್ಯೂ, ವೈರಲ್‌ ಫೀವರ್‌ನ್‌ ಸೋಂಕಿನ ನಡುವೆ ಇದೀಗ ಬೆಂಗಳೂರಿನಲ್ಲಿ ಝೀಕಾ ವೈರಸ್‌ ಆತಂಕ ಮೂಡಿಸಿದೆ.

ಬೆಂಗಳೂರು ಹೊರವಲಯದ ಆನೇಕಲ್‌ನ ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಯಲ್ಲಿ ಐದು ಮಂದಿ ರೋಗಿಗಳಲ್ಲಿ ಝೀಕಾ ವೈರಸ್ ಸೋಂಕು ಪತ್ತೆಯಾಗಿದೆ. ಝೀಕಾ ವೈರಸ್ ಪತ್ತೆ ಹಿನ್ನೆಲೆಯಲ್ಲಿ ಜಿಗಣಿ ಪ್ರದೇಶವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. ಐವರು ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ಇಟ್ಟಿದೆ. ಝೀಕಾ ವೈರಸ್ ಸೋಂಕಿತರ ಕುಟುಂಬಸ್ಥರ ರಕ್ತದ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆ ನಡೆಸಲಾಗುತ್ತಿದೆ.

ಜಿಗಣಿ ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯಲ್ಲಿ ಐವರಲ್ಲಿ ಚಳಿ, ಜ್ವರ ಮತ್ತು ಮೈಕೈ ನೋವಿನಿಂದ ಡೆಂಗ್ಯೂ ಜ್ವರದ ಲಕ್ಷಣಗಳು ಕಾಣಿಸಿಕೊಂಡಿದ್ದವು. ಡೆಂಗ್ಯೂ ಸೋಂಕು ಪತ್ತೆ ಪರೀಕ್ಷೆ ವೇಳೆ ಝೀಕಾ ವೈರಸ್ ಇರುವುದು ಪತ್ತೆಯಾಗಿದೆ. ಸದ್ಯ ಎಲ್ಲರೂ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾರೆ. ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ ಎಂದು ತಾಲೂಕು ಆರೋಗ್ಯ ಅಧಿಕಾರಿ ಡಾ ರವಿ ಮಾಹಿತಿ ನೀಡಿದ್ದಾರೆ.

ಬೆಂಗಳೂರಿನಲ್ಲಿ ಝೀಕಾ ಸೋಂಕು ಪತ್ತೆಯಾದ ಬಗ್ಗೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ʻʻಎರಡು ವಾರದಲ್ಲಿ ಐದು ಪ್ರಕರಣಗಳು ಪತ್ತೆಯಾಗಿವೆ. ಆತಂಕಪಡುವ ಅಗತ್ಯವಿಲ್ಲ. ಆದರೆ ಗರ್ಭಿಣಿಯರು ಎಚ್ಚರಿಕೆ ವಹಿಸಬೇಕುʼʼ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ 7 ಝೀಕಾ ವೈರಸ್ ಪ್ರಕರಣಗಳು ಪತ್ತೆಯಾಗಿವೆ. ರಾಜ್ಯ ಆರೋಗ್ಯ ಇಲಾಖೆ ಎಚ್ಚೆತ್ತುಕೊಂಡಿದ್ದು ವೈರಸ್‌ ತಗುಲದಂತೆ ಮುನ್ನೆಚ್ಚರಿಕೆ ವಹಿಸಿದೆ. ಝೀಕಾ ವೈರಸ್​ ಪತ್ತೆಯಾದ ಮನೆಯ ಸುತ್ತಮುತ್ತಲಿನ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಜನರನ್ನು ಪರೀಕ್ಷೆಗೊಳಪಡಿಸುತ್ತಿದೆ. ಆ ಪ್ರದೇಶದ ಒಂದು ಕಿಲೋಮೀಟರ್ ವ್ಯಾಪ್ತಿಯನ್ನು ಕಂಟೈನ್ವೆಂಟ್ ಜೋನ್ ಎಂದು ಪರಿಗಣಿಸುತ್ತದೆ. ಝೀಕಾ ವೈರಸ್​ಗೆ ಸಾರ್ವಜನಿಕರು ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ಝೀಕಾ ವೈರಸ್ ತಗುಲದಂತೆ ಮುನ್ನೆಚ್ಚರಿಕೆ ವಹಿಸುವುದು ಅಗತ್ಯ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಾರ್ವಜನಿಕರಿಗೆ ಮನವಿ ಮಾಡಿದೆ.

Tags:    

Similar News