ಇನ್ನೂ ಒಂದು ವಾರ ದರ್ಶನ್‌ಗೆ ಮನೆಯೂಟದ ಭಾಗ್ಯವಿಲ್ಲ
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅವರು ಹೈಕೋರ್ಟ್‌ಗೆ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 29ಕ್ಕೆ ಮುಂದೂಡಲಾಗಿದೆ.;
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಮನೆಯಿಂದ ಊಟ ಹಾಗೂ ಹಾಸಿಗೆ ಸೌಲಭ್ಯ ಪಡೆಯುವುದಕ್ಕೆ ಅವರು ಹೈಕೋರ್ಟ್‌ಗೆ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 29ಕ್ಕೆ ಮುಂದೂಡಲಾಗಿದೆ.
ದರ್ಶನ್ ಪರವಾಗಿ ಹಿರಿಯ ವಕೀಲ ಕೆ.ಎನ್. ಫಣೀಂದ್ರ ವಾದ ಮಾಡಿದ್ದಾರೆ. ಹೈಕೋರ್ಟ್ ಈ ಅರ್ಜಿಯ ವಿಚಾರಣೆಯನ್ನು ಜುಲೈ 29ಕ್ಕೆ ಮುಂದೂಡಿದೆ.
ನ್ಯಾ. ಎಸ್.ಆರ್. ಕೃಷ್ಣಕುಮಾರ್ ಅವರಿದ್ದ ಹೈಕೋರ್ಟ್ ಪೀಠದಲ್ಲಿ ದರ್ಶನ್ ಅವರ ರಿಟ್ ಅರ್ಜಿಯ ವಿಚಾರಣೆ ಶುಕ್ರವಾರ (ಜುಲೈ 19) ನಡೆದಿದೆ. ‘2022ರಲ್ಲಿ ಜೈಲು ಕೈಪಿಡಿಯಲ್ಲಿ ನಿಯಮ ರೂಪಿಸಲಾಗಿದೆ. ಪ್ಯಾರಾ 295ರಲ್ಲಿ ವಿಚಾರಣಾಧೀನ ಕೈದಿಗೆ ಅವಕಾಶ ಕಲ್ಪಿಸಲಾಗಿದೆ. ಮನೆ ಊಟ, ಹಾಸಿಗೆ, ಊಟದ ಪರಿಕರ, ದಿನಪತ್ರಿಕೆಗೆ ಅವಕಾಶವಿದೆ. ಜೈಲು ಕಾಯ್ದೆಯ ಸೆಕ್ಷನ್ 30ರಲ್ಲಿ ಮನೆ ಊಟಕ್ಕೆ ಯಾವುದೇ ನಿರ್ಬಂಧವಿಲ್ಲ. ಕೈಪಿಡಿಯಲ್ಲಿ ಕೊಲೆ ಆರೋಪಿಗೂ ಇತರೆ ಆರೋಪಿಗೂ ವ್ಯತ್ಯಾಸ ತೋರಲಾಗಿದೆ. ನಿಯಂತ್ರಣಕ್ಕೊಳಪಟ್ಟು ಸವಲತ್ತು ನೀಡಲು ಅವಕಾಶವಿದೆ. ಸಮಯದ ನಿಬಂಧನೆ ವಿಧಿಸಿ ಅವಕಾಶ ನೀಡಬಹುದು’ ಎಂದು ಕೆ.ಎನ್. ಫಣೀಂದ್ರ ವಾದ ಮಂಡಿಸಿದ್ದರು.
ಈ ವೇಳೆ ಪ್ರತಿಕ್ರಿಯಿಸಿದ ಜಡ್ಜ್ ಎಸ್.ಆರ್. ಕೃಷ್ಣಕುಮಾರ್, ನೀವು ಆಹಾರ, ಹಾಸಿಗೆ ಮೂಲಭೂತ ಹಕ್ಕು ಎನ್ನುತ್ತಿದ್ದೀರಿ. ಆದರೆ ನಾನು ಈಗ ಮಧ್ಯಂತರ ಆದೇಶ ಮಾಡಲು ಸಾಧ್ಯವಿಲ್ಲ. ಸಂಪೂರ್ಣ ಪ್ರಕರಣದ ವಿಚಾರಣೆ ಮಾಡಬೇಕು. ವಿಚಾರಣಾಧೀನ ಕೈದಿ ಇದ್ದಾಗ ಮ್ಯಾಜಿಸ್ಟ್ರೇಟ್ ಕೋರ್ಟ್‌ಗೆ ಅಧಿಕಾರ ಇದೆ. ಅಲ್ಲಿ ಮೊದಲು ಅರ್ಜಿ ಸಲ್ಲಿಸಿ ಅವಕಾಶ ಕೋರಬೇಕು. ಅಲ್ಲಿ ನಿರಾಕರಣೆಯಾದರೆ, ಮುಂದೆ ನೋಡೋಣ ಎಂದು ಹೇಳಿ, ಮುಂದಿನ ವಿಚಾರಣೆ 29ಕ್ಕೆ ಮುಂದೂಡಿದರು.
ತಮಗೆ ಜೈಲಿನ ಊಟ ಒಗ್ಗುತ್ತಿಲ್ಲವಾದ್ದರಿಂದ ತಮಗೆ ಮನೆಯೂಟ, ಹಾಸಿಗೆ ಹಾಗೂ ಪುಸ್ತಕ ಓದಲು ಅವಕಾಶ ಕೊಡಬೇಕೆಂದು ಕೋರಿ ದರ್ಶನ್ ಅವರು ತಮ್ಮ ವಕೀಲರ ಪರವಾಗಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದು ನಟ ದರ್ಶನ್ ಪರ ವಕೀಲ ಕೆಎನ್ ಫಣೀಂದ್ರ ಅವರು ದರ್ಶನ್ ಪರ ಅರ್ಜಿ ಸಲ್ಲಿಸಿದ್ದರು.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್‌ಗೆ ಅವರ ನ್ಯಾಯಾಂಗ ಬಂಧನವನ್ನು ಆಗಸ್ಟ್ 1ರವರೆಗೆ ವಿಸ್ತರಣೆ ಮಾಡಲಾಗಿದೆ.
ಪ್ರಕರಣದ ಹಿನ್ನಲೆ
ದರ್ಶನ್ ಆಪ್ತೆ ಪವಿತ್ರಾ ಗೌಡ ಅವರಿಗೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬಾತ ಅಶ್ಲೀಲ ಸಂದೇಶಗಳನ್ನು ಕಳುಹಿಸಿದ್ದ ಎಂಬ ಕಾರಣಕ್ಕೆ ಚಿತ್ರದುರ್ಗದ ದರ್ಶನ್ ಅಭಿಮಾನಿಗಳ ಸಂಘದ ಅಧ್ಯಕ್ಷ ಹಾಗೂ ಆರೋಪಿಗಳಲ್ಲಿ ಒಬ್ಬನಾದ ರಾಘವೇಂದ್ರ ಎಂಬಾತ ರೇಣುಕಾಸ್ವಾಮಿಯನ್ನು ದರ್ಶನ್ ಭೇಟಿ ನೆಪದಲ್ಲಿ ಬೆಂಗಳೂರಿನ ಆರ್ ಆರ್ ನಗರದ ಶೆಡ್‌ಗೆ ಕರೆತಂದಿದ್ದ. ಇದೇ ಶೆಡ್‌ನಲ್ಲಿಯೇ ಜೂನ್ 8 ರಂದು ಆತನಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡಲಾಗಿತ್ತು.
ನಂತರ ದರ್ಶನ್ ಸೂಚನೆ ಮೇರೆಗೆ ರೇಣುಕಾ ಸ್ವಾಮಿಯ ಶವವನ್ನು ಮೋರಿಗೆ ಎಸೆದು ಹೋಗಿದ್ದರು. ಮೋರಿಯಲ್ಲಿ ತೇಲುತ್ತಿದ್ದ ಶವವನ್ನು ಬೀದಿನಾಯಿಗಳು ಕಚ್ಚಿ ಎಳೆದು ತಂದಾಗ ಈ ಪ್ರಕರಣ ಬೆಳಕಿಗೆ ಬಂದಿದೆ. ಪೊಲೀಸರು ಈ ಬಗ್ಗೆ ತನಿಖೆ ನಡೆಸುತ್ತಿರುವಾಗ ಈ ಕೊಲೆಯ ಹಿಂದಿನ ರೂವಾರಿ ದರ್ಶನ್ ಎಂದು ತಿಳಿದುಬಂದಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 11 ರಂದು ದರ್ಶನ್, ಪವಿತ್ರಾ ಗೌಡ ಸೇರಿದಂತೆ 17 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಪ್ರಕರಣ ಸಂಬಂಧ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ಪೊಲೀಸರು ಈಗಾಗಲೇ ಸಾಕಷ್ಟು ಸಾಕ್ಷ್ಯಗಳನ್ನು ಕಲೆ ಹಾಕಿದ್ದಾರೆ. ಸದ್ಯ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿ ಇದ್ದಾರೆ.