ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಗೆ ಸೇರ್ಪಡೆ
ಮಾಲಿಕಯ್ಯ ಗುತ್ತೇದಾರ್ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಶುಕ್ರವಾರ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.;
ಬೆಂಗಳೂರು: ಹಿರಿಯ ಬಿಜೆಪಿ ಮುಖಂಡ ಮಾಲಿಕಯ್ಯ ಗುತ್ತೇದಾರ್ ಅವರು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಕಲಬುರಗಿ ಉಸ್ತುವಾರಿ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಶುಕ್ರವಾರ ಮರಳಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.
ಮಾಲೀಕಯ್ಯ ಗುತ್ತೇದಾರ್ ಕಲಬುರಗಿ ಜಿಲ್ಲೆಯ ಅಫಜಲಪುರದಿಂದ ಆರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಮಾಲಿಕಯ್ಯ ಗುತ್ತೇದಾರ ಅವರ ಸಹೋದರ ನಿತೀನ್ ಗುತ್ತೇದಾರ್ ಕೆಲವು ದಿನಗಳ ಹಿಂದಷ್ಟೇ ಬಿಜೆಪಿ ಸೇರ್ಪಡೆಗೊಂಡಿದ್ದು, ಇದರಿಂದ ಅಸಮಧಾನಗೊಂಡಿದ್ದರು ಎನ್ನಲಾಗಿದೆ.
ಮಾಲೀಕಯ್ಯ ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿದ ಉಪಮುಖ್ಯಮಂತ್ರಿ ಮತ್ತು ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ಡಿ ಕೆ ಶಿವಕುಮಾರ್, ಅನೇಕ ಬಿಜೆಪಿ ನಾಯಕರು ರಾಜ್ಯದಲ್ಲಿ ಆಡಳಿತ ಪಕ್ಷಕ್ಕೆ ಸೇರಲು ಸಿದ್ಧರಿದ್ದಾರೆ ಎಂದು ಹೇಳಿದ್ದಾರೆ.
ಗುತ್ತೇದಾರ್ ಅವರನ್ನು ಪಕ್ಷಕ್ಕೆ ಸ್ವಾಗತಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಕರ್ನಾಟಕದಲ್ಲಿ ಗ್ಯಾರಂಟಿಗಳ ಅಲೆ ಇದೆ. ಗ್ಯಾರಂಟಿ ಯೋಜನೆಗಳು ಸಮಾಜದ ಜನರಿಗೆ ಶಕ್ತಿ ಕೊಡೋ ಕೆಲಸ ಮಾಡಿದೆ. ಆ ಕಾರ್ಯಕ್ರಮಗಳಿಂದ ಬಿಜೆಪಿ-ಜೆಡಿಎಸ್ ಕಂಗೆಟ್ಟಿದೆ. ಅದಕ್ಕೆ ಬಾಯಿಗೆ ಬಂದಂತೆ ಟೀಕೆ ಮಾಡ್ತಾರೆ. ಈಗ ಗ್ಯಾರಂಟಿ ತಾತ್ಕಾಲಿಕ ಅಂತಿದ್ದಾರೆ, ನಾವು ಕೊಟ್ಟ ಮಾತಿನಂತೆ ನಡೆದುಕೊಳ್ತೀವಿ. ಬಿಜೆಪಿಯಂತೆ ನಾವು ಮಾಡುವುದಿಲ್ಲ, ನಾವು ಈ ಅವಧಿಯಲ್ಲಿ ಎಲ್ಲಾ ಗ್ಯಾರಂಟಿ ಜಾರಿ ಮಾಡಿದ್ದೇವೆ. ಬಜೆಟ್ ನಲ್ಲಿ 52 ಸಾವಿರ ಕೋಟಿ ಮೀಸಲು ಇಟ್ಟಿದ್ದೇವೆ. 2028 ರಲ್ಲಿ ಮತ್ತೆ ನಾವೇ ಗೆಲ್ತೀವಿ, ಗ್ಯಾರಂಟಿ ಮುಂದುವರೆಸುತ್ತೇವೆ ಎಂದರು.