ಅನಾರೋಗ್ಯ: ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಆಸ್ಪತ್ರೆಗೆ ದಾಖಲು

ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬದ ಮೂಲಗಳು ಸ್ಪಷ್ಟಪಡಿಸಿವೆ.

Update: 2025-10-07 12:59 GMT

ಮಾಜಿ ಪ್ರಧಾನಿ ಹೆಚ್‌.ಡಿ. ದೇವೇಗೌಡ

ಜೆಡಿಎಸ್ ವರಿಷ್ಠ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ (92) ಅವರು ಅನಾರೋಗ್ಯದ ಹಿನ್ನೆಲೆಯಲ್ಲಿ ಮಂಗಳವಾರ ಬೆಂಗಳೂರಿನ ಹಳೆ ವಿಮಾನ ನಿಲ್ದಾಣ ರಸ್ತೆಯಲ್ಲಿರುವ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಳಿಜ್ವರ ಮತ್ತು ಮೂತ್ರನಾಳದ ಸೋಂಕಿನಿಂದ ಬಳಲುತ್ತಿರುವ ಅವರಿಗೆ ತಜ್ಞ ವೈದ್ಯರ ತಂಡವು ಚಿಕಿತ್ಸೆ ನೀಡುತ್ತಿದೆ ಎಂದು ಆಸ್ಪತ್ರೆಯ ಮೂಲಗಳು ತಿಳಿಸಿವೆ.

ದೇವೇಗೌಡರ ಆರೋಗ್ಯ ಸ್ಥಿರವಾಗಿದ್ದು, ಚಿಕಿತ್ಸೆಗೆ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ. ಆತಂಕಪಡುವ ಅಗತ್ಯವಿಲ್ಲ ಎಂದು ಕುಟುಂಬದ ಮೂಲಗಳು ಸ್ಪಷ್ಟಪಡಿಸಿವೆ. ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿದೆ ಎಂದು ತಿಳಿದುಬಂದಿದೆ.

ವಯೋಸಹಜ ಅನಾರೋಗ್ಯ

92 ವರ್ಷದ ಎಚ್.ಡಿ. ದೇವೇಗೌಡರು ಇತ್ತೀಚಿನ ವರ್ಷಗಳಲ್ಲಿ ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಹಲವು ಬಾರಿ ಆಸ್ಪತ್ರೆಗೆ ದಾಖಲಾಗಿದ್ದರು.2024 ಫೆಬ್ರವರಿಯಲ್ಲಿ ಉಸಿರಾಟದ ಸಮಸ್ಯೆಯಿಂದಾಗಿ ದೇವೇಗೌಡರನ್ನು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೆಲವು ದಿನಗಳ ಚಿಕಿತ್ಸೆಯ ನಂತರ ಅವರು ಸಂಪೂರ್ಣವಾಗಿ ಚೇತರಿಸಿಕೊಂಡು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದರು.

2023ರ ಫೆಬ್ರವರಿಯಲ್ಲಿ ಕಾಲುಗಳಲ್ಲಿ ಊತ ಕಾಣಿಸಿಕೊಂಡಿದ್ದರಿಂದ ಸಾಮಾನ್ಯ ಆರೋಗ್ಯ ತಪಾಸಣೆಗಾಗಿ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಆಗಲೂ ಅವರಿಗೆ ಒಂದು ವಾರ ವಿಶ್ರಾಂತಿ ಪಡೆಯಲು ವೈದ್ಯರು ಸಲಹೆ ನೀಡಿದ್ದರು.

ನಿರಂತರ ರಾಜಕೀಯ ಚಟುವಟಿಕೆಗಳಲ್ಲಿ ಸಕ್ರಿಯರಾಗಿರುವ ದೇವೇಗೌಡರು, ತಮ್ಮ ವಯಸ್ಸಿಗೂ ಮೀರಿ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಕೆಲವು ದಿನಗಳ ಹಿಂದೆ ಹಾಸನದ ಹೊಳೆನರಸೀಪುರದಲ್ಲಿ ಗಣೇಶೋತ್ಸವದ ಮೆರವಣಿಗೆ ಮೇಲೆ ಕ್ಯಾಂಟರ್ ಒಂದು ಹತ್ತಿ 10 ಮಂದಿ ಮೃತಪಟ್ಟಾಗ ಅವರು ಅಲ್ಲಿಗೆ ಹೋಗಿ ಸಂತ್ರಸ್ತರ ಕುಟುಂಬಗಳ ಸದಸ್ಯರಿಗೆ ಸಾಂತ್ವನ ಹೇಳಿದ್ದರು. ಉತ್ತರ ಕರ್ನಾಟಕ ಪ್ರದೇಶದಲ್ಲಿ ನೆರೆ ಕಾಣಿಸಿಕೊಂಡಾಗ ಅವರು ಪತ್ರಿಕಾಗೋಷ್ಠಿ ನಡೆಸಿ ನೆರೆ ಪರಿಹಾರಕ್ಕಾಗಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದರು.  

Tags:    

Similar News