ಚಿನ್ನ ಕಳ್ಳ ಸಾಗಣೆ ಪ್ರಕರಣ: ನಟಿ ರನ್ಯಾ ಆಸ್ತಿ ಜಪ್ತಿಗೆ ಹೈಕೋರ್ಟ್ ತಡೆ
2025ರ ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ನಟಿ ರನ್ಯಾ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ತಪಾಸಣೆ ನಡೆಸಿದ್ದರು.;
ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟಿ ಹರ್ಷವರ್ಧಿನಿ ಅಲಿಯಾಸ್ ರನ್ಯಾ ರಾವ್ ಅವರ ಆಸ್ತಿಯನ್ನು ಜಪ್ತಿ ಮಾಡಿ ಜಾರಿ ನಿರ್ದೇಶನಾಲಯ (ED) ಹೊರಡಿಸಿದ್ದ ಆದೇಶಕ್ಕೆ ಕರ್ನಾಟಕ ಹೈಕೋರ್ಟ್ ಮಧ್ಯಂತರ ತಡೆ ನೀಡಿದೆ.
2025ರ ಮಾರ್ಚ್ 3ರಂದು ದುಬೈನಿಂದ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದ ನಟಿ ರನ್ಯಾ ಅವರನ್ನು ಕಂದಾಯ ಗುಪ್ತಚರ ನಿರ್ದೇಶನಾಲಯ (DRI) ಅಧಿಕಾರಿಗಳು ತಪಾಸಣೆ ನಡೆಸಿದ್ದರು. ಈ ವೇಳೆ, ಅವರ ಬಳಿ 12.56 ಕೋಟಿ ರೂಪಾಯಿ ಮೌಲ್ಯದ 14.21 ಕೆ.ಜಿ. ತೂಕದ ಚಿನ್ನ ಪತ್ತೆಯಾಗಿತ್ತು. ಇದನ್ನು ಮೆಡಿಕಲ್ ಅಡ್ಹೆಸಿವ್ ಬ್ಯಾಂಡೇಜ್ ಬಳಸಿ ದೇಹಕ್ಕೆ ಅಂಟಿಸಿಕೊಂಡು ಸಾಗಿಸಲಾಗುತ್ತಿತ್ತು. ಈ ಸಂಬಂಧ ಕಸ್ಟಮ್ಸ್ ಕಾಯಿದೆಯಡಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣದ ಆಧಾರದ ಮೇಲೆ, ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯ (PMLA) ಅಡಿಯಲ್ಲಿ ತನಿಖೆ ನಡೆಸಿದ ಜಾರಿ ನಿರ್ದೇಶನಾಲಯ, 2025ರ ಜುಲೈ 4ರಂದು ರನ್ಯಾ ರಾವ್ ಅವರಿಗೆ ಸೇರಿದ ಬೆಂಗಳೂರು ಮತ್ತು ತುಮಕೂರಿನಲ್ಲಿರುವ 34.12 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿತ್ತು. ಈ ಆದೇಶವನ್ನು ಪ್ರಶ್ನಿಸಿ ರನ್ಯಾ ರಾವ್ ಹೈಕೋರ್ಟ್ ಮೊರೆ ಹೋಗಿದ್ದರು.
ಹೈಕೋರ್ಟ್ ಆದೇಶ
ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರಿದ್ದ ಏಕಸದಸ್ಯ ಪೀಠ, ಜಾರಿ ನಿರ್ದೇಶನಾಲಯದ ಆದೇಶಕ್ಕೆ ತಡೆ ನೀಡಿದೆ. "ಚಿನ್ನ ಕಳ್ಳ ಸಾಗಣೆಯ ಅಪರಾಧವು 2025ರಲ್ಲಿ ನಡೆದಿದೆ. ಆದರೆ, ಅದಕ್ಕೂ ಮುನ್ನ ಸಂಪಾದಿಸಿದ ಆಸ್ತಿಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿದೆ. ಇದು ಸುಪ್ರೀಂ ಕೋರ್ಟ್‌ನ 'ಪವನ ದಿಬ್ಬೂರ್ ವರ್ಸಸ್ ಜಾರಿ ನಿರ್ದೇಶನಾಲಯ' ಪ್ರಕರಣದಲ್ಲಿ ನೀಡಿರುವ ತೀರ್ಪಿಗೆ ವಿರುದ್ಧವಾಗಿದೆ. ಅಪರಾಧ ನಡೆಯುವುದಕ್ಕೂ ಮುನ್ನ ಗಳಿಸಿದ ಆಸ್ತಿಯನ್ನು ಜಪ್ತಿ ಮಾಡಲು ಅವಕಾಶವಿಲ್ಲ," ಎಂದು ನ್ಯಾಯಾಲಯ ಅಭಿಪ್ರಾಯಪಟ್ಟು, ಇ.ಡಿ. ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ.
ಸದ್ಯ ರನ್ಯಾ ರಾವ್ ಅವರು ವಿದೇಶಿ ವಿನಿಮಯ ನಿಯಂತ್ರಣ ಮತ್ತು ಕಳ್ಳ ಸಾಗಣೆ ಚಟುವಟಿಕೆಗಳ ತಡೆ ಕಾಯ್ದೆ (COFEPOSA) ಅಡಿಯಲ್ಲಿ ಬಂಧನದಲ್ಲಿದ್ದಾರೆ.