DA Hike | ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್: ತುಟ್ಟಿ ಭತ್ಯೆ ಶೇ.3.75ರಷ್ಟು ಹೆಚ್ಚಳ
ರಾಜ್ಯದ ಸರ್ಕಾರಿ ನೌಕರರಿಗೆ 2024ರ ಜನವರಿ 1ರಿಂದಲೇ ಅನ್ವಯ | ಮೂಲ ವೇತನದ ಶೇಕಡ 38.75 ರಿಂದ ಶೇಕಡ 42.5ಕ್ಕೆ ಪರಿಷ್ಕರಣೆ;
ಲೋಕಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿರುವಂತೆಯೇ ರಾಜ್ಯ ಸರ್ಕಾರವು ಸರ್ಕಾರಿ ನೌಕರರ ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದೆ. ತುಟ್ಟಿಭತ್ಯೆಯ ದರವನ್ನು ಈಗ ಇರುವ ಮೂಲ ವೇತನದ ಶೇ. 38.75 ರಿಂದ ಶೇ. 42.5ಕ್ಕೆ ಪರಿಷ್ಕರಣೆ ಮಾಡಲಾಗಿದೆ.
ಸರ್ಕಾರದ ಈ ಆದೇಶವು 2018ರ ಪರಿಷ್ಕೃತ ವೇತನ ಶ್ರೇಣಿಗಳಲ್ಲಿ ವೇತನವನ್ನು ಪಡೆಯುತ್ತಿರುವ ರಾಜ್ಯ ಸರ್ಕಾರಿ ನೌಕರರಿಗೆ 2024ರ ಜನವರಿ 1ರಿಂದ ಅನ್ವಯವಾಗಲಿದೆ ಎಂದು ಹೇಳಲಾಗಿದೆ. ಈ ಮೂಲಕ ರಾಜ್ಯ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಪ್ರಮಾಣವು ಶೇ.3.75ರಷ್ಟು ಹೆಚ್ಚಳವಾದಂತಾಗಿದೆ.
ರಾಜ್ಯ ಸರ್ಕಾರದ ಆದೇಶದಲ್ಲಿ ಏನಿದೆ ?
ರಾಜ್ಯ ಸರ್ಕಾರವು ತುಟ್ಟಿ ಭತ್ಯೆಯನ್ನು ಹೆಚ್ಚಳ ಮಾಡಿದ್ದು, ಇದೇ ಸಂದರ್ಭದಲ್ಲಿ ಕೆಲವು ನಿರ್ದಿಷ್ಟ ಷರತ್ತುಗಳನ್ನೂ ಸಹ ವಿಧಿಸಿದೆ. ತುಟ್ಟಿಭತ್ಯೆಯ ಉದ್ದೇಶಕ್ಕಾಗಿ “ಮೂಲ ವೇತನ" ಅಂದರೆ ಸರ್ಕಾರಿ ನೌಕರರು (ಹುದ್ದೆಯಲ್ಲಿ ಮುಂದುವರಿದಿದ್ದರೆ) ಹುದ್ದೆಗೆ ಅನ್ವಯವಾಗುವ ವೇತನ ಶ್ರೇಣಿಯಲ್ಲಿ ಪಡೆಯುತ್ತಿರುವ ವೇತನ ಮತ್ತು ಅದರಲ್ಲಿ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ನೌಕರರಿಗೆ ಸ್ಥಗಿತ ವೇತನ ಬಡ್ತಿಯನ್ನು ನೀಡಲಾಗಿದ್ದರೆ, ಆ ಸ್ಥಗಿತ ವೇತನ ಬಡ್ತಿಗೆ ಇದು ಅನ್ವಯವಾಗಲಿದೆ.
ಇನ್ನು 2018ರ ಕರ್ನಾಟಕ ನಾಗರಿಕ ಸೇವಾ (ಪರಿಷ್ಕೃತ ವೇತನ) ನಿಯಮಗಳ ನಿಯಮ 3(ಸಿ)ಯ 7ನೇ ನಿಯಮದ (3)ನೇ ಉಪನಿಯಮದ ಮೇರೆಗೆ ನೌಕರರಿಗೆ ನೀಡಲಾದ ವೈಯಕ್ತಿಕ ವೇತನ ಯಾವುದಾದರೂ ಇದ್ದರೆ, ಆ ವೈಯಕ್ತಿಕ ವೇತನ ಹಾಗೂ ವೇತನ ಶ್ರೇಣಿಯ ಗರಿಷ್ಠಕ್ಕಿಂತ ಹೆಚ್ಚಾಗಿ ನೌಕರರಿಗೆ ಮಂಜೂರು ಮಾಡಲಾಗಿರುವ ಹೆಚ್ಚುವರಿ ವೇತನ ಬಡ್ತಿ ಯಾವುದಾದರೂ ಇದ್ದರೆ ಅದೂ ಸಹ ಸೇರಲಿದೆ ಎಂದು ಸರ್ಕಾರ ತಿಳಿಸಿದೆ.
ಇನ್ನು ಈ ಅಂಶಗಳನ್ನು ಮೂಲ ವೇತನಕ್ಕೆ ಹೊರತುಪಡಿಸಿ ಇತರೆ ಯಾವುದೇ ಅಗತ್ಯತೆಗೆ ಸೇರಿಸಬಾರದು ಎಂದು ಹೇಳಲಾಗಿದೆ. ರಾಜ್ಯ ಸರ್ಕಾರದ ನಿವೃತ್ತಿ ವೇತನದಾರರು ಅಥವಾ ಕುಟುಂಬ ನಿವೃತ್ತಿ ವೇತನದಾರರಿಗೆ ಮತ್ತು ರಾಜ್ಯದ ಸಂಚಿತ ನಿಧಿಯಿಂದ ನಿವೃತ್ತಿ ವೇತನ ಮತ್ತು ಕುಟುಂಬನಿವೃತ್ತಿ ವೇತನವನ್ನು ಪಡೆಯುತ್ತಿರುವ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತಿ ವೇತನದಾರರಿಗೂ ಇದರ ಲಾಭ ಸಿಗಲಿದೆ.
ಅಲ್ಲದೇ ಕುಟುಂಬ ನಿವೃತ್ತಿ ವೇತನದಾರರಿಗೂ ಸಹ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ಹಾಲಿ ಲಭ್ಯವಿರುವ ತುಟ್ಟಿಭತ್ಯೆಯ ದರಗಳನ್ನು ಮೂಲ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನದ ಪ್ರಸಕ್ತ ಇರುವ ತುಟ್ಟಿ ಭತ್ಯೆ ಪ್ರಮಾಣ 38.75 ರಿಂದ ಶೇಕಡ 42.5ಕ್ಕೆ ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ. ಯುಜಿಸಿ/ಎಐಸಿಟಿಇ/ಐಸಿಎಆರ್ ವೇತನ ಶ್ರೇಣಿಗಳ ನಿವೃತ್ತ ವೇತನದಾರರಿಗೂ ಸಹ ಈ ಆದೇಶಗಳು ಅನ್ವಯಿಸುತ್ತವೆ ಎಂದು ಸರ್ಕಾರ ಆದೇಶದಲ್ಲಿ ಉಲ್ಲೇಖಿಸಿದೆ. ಇದೇ ಆದೇಶದಲ್ಲಿ ಕೆಲವು ನಿರ್ದಿಷ್ಟ ಷರತ್ತುಗಳನ್ನೂ ವಿಧಿಸಲಾಗಿದೆ.