ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ; ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ

2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು 2,000 ರೂಪಾಯಿ ಹೆಚ್ಚಳ ಮಾಡಿದೆ.;

Update: 2025-05-15 13:07 GMT

ಸರ್ಕಾರಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶಿಕ್ಷಕರು.

ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಅತಿಥಿ ಶಿಕ್ಷಕರಿಗೆ ಗೌರವ ಸಂಭಾವನೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶಿಸಿದ್ದು ಶಿಕ್ಷಕರಿಗೆ ಸಿಹಿ ಸುದ್ದಿ ನೀಡಿದೆ.

2025-26ನೇ ಸಾಲಿನ ಆಯವ್ಯಯ ಘೋಷಣೆಯಂತೆ ರಾಜ್ಯದ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು 2,000 ರೂಪಾಯಿ ಹೆಚ್ಚಳ ಮಾಡಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಪ್ರಕಟಣೆ ಹೊರಡಿಸಿದ್ದಾರೆ.

ಈ ಮೊದಲು ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರಿಗೆ ಪ್ರತಿ ತಿಂಗಳು 10,000 ರೂಪಾಯಿ, ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರಿಗೆ 10,500 ರೂಪಾಯಿ ಹಾಗೂ ಸರ್ಕಾರಿ ಪದವಿಪೂರ್ವ ಕಾಲೇಜು ಅತಿಥಿ ಉಪನ್ಯಾಸಕರಿಗೆ 12,000 ರೂಪಾಯಿ ಗೌರವಧನ ನೀಡಲಾಗುತ್ತಿತ್ತು. ಇದೀಗ ಎಲ್ಲಾ ವೃಂದದ ಶಿಕ್ಷಕರಿಗೆ 2,000 ರೂಪಾಯಿ ಹೆಚ್ಚಳ ಮಾಡಿದೆ.

ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಲ್ಲಿ 2024-25ನೇ ಶೈಕ್ಷಣಿಕ ಸಾಲಿಗೆ ಒಟ್ಟು 35,000 ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕಾತಿಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಶಿಕ್ಷಕರ ಕೊರತೆಯನ್ನು ನೀಗಿಸಲು ಹುದ್ದೆಗಳನ್ನು ಭರ್ತಿ ಮಾಡಿತ್ತು.

Tags:    

Similar News