ಕನ್ನಡದಲ್ಲೇ ತಂತ್ರಜ್ಞಾನ ಅಭಿವೃದ್ಧಿಗೆ ಸರ್ಕಾರ ಒತ್ತು; ಸಚಿವ ತಂಗಡಗಿ ಭರವಸೆ

ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ ಎಂದು ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್‌ ಎಸ್‌. ತಂಗಡಗಿ ತಿಳಿಸಿದರು.

Update: 2025-11-01 07:59 GMT

ಸಚಿವ ಶಿವರಾಜ್‌ ಎಸ್‌. ತಂಗಡಗಿ ಪೊಲೀಸ್‌ ಗೌರವ ಸ್ವೀಕರಿಸಿದರು.

Click the Play button to listen to article

ಕನ್ನಡ ಲಿಪಿಯನ್ನು ಮುಂದಿನ ಜನಾಂಗಕ್ಕೂ ಬರೆಯಲು ಕಲಿಸಿದಾಗ ಮಾತ್ರ ಭಾಷೆ ಉಳಿಸಿ ಬೆಳೆಯಲು ಸಾಧ್ಯ. ಕನ್ನಡ ಭಾಷೆಯಲ್ಲಿ ತಂತ್ರಜ್ಞಾನದ ಅಭಿವೃದ್ಧಿಗೆ ನಮ್ಮ ಸರ್ಕಾರವು ಹೆಚ್ಚಿನ ಒತ್ತು ನೀಡಿದೆ ಎಂದು ಸಚಿವ ಶಿವರಾಜ್ ಎಸ್.ತಂಗಡಗಿ ಹೇಳಿದರು.

ಕೊಪ್ಪಳದ ಜಿಲ್ಲಾ ಕ್ರೀಡಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕನ್ನಡವನ್ನು ಕನ್ನಡಿಗರೆಲ್ಲರೂ ಮಾತನಾಡಿದಾಗ ಮತ್ತು ಬಳಸಿದಾಗ ಮಾತ್ರ ಕನ್ನಡದ ಬೆಳವಣಿಗೆ ಸಾಧ್ಯ. ರಾಷ್ಟ್ರಕವಿ ಕುವೆಂಪು ಹೇಳಿರುವಂತೆ ಕರ್ನಾಟಕ ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದು, ಇಲ್ಲಿ ವಿವಿಧತೆಯಲ್ಲಿ ಏಕತೆ ನೆಲೆಸಿದೆ. ಕನ್ನಡನಾಡು ಸಂಪನ್ಮೂಲ ಹಾಗೂ ಸಂಸ್ಕೃತಿಯಿಂದ ಶ್ರೀಮಂತವಾಗಿದೆ. ಆದಿಕವಿ ವಾಲ್ಮೀಕಿಯಿಂದ ಆರಂಭವಾಗಿ ಪಂಪ, ರನ್ನ ಮೊದಲಾದ ಕವಿಗಳು ತಮ್ಮ‌ ಕಾವ್ಯದಲ್ಲಿ ಕನ್ನಡ ನಾಡು ನುಡಿಯ ಬಗ್ಗೆ ಮನದುಂಬಿ ಹೊಗಳಿದ್ದಾರೆ. ರಾಜ್ಯ ಸರ್ಕಾರ ಕನ್ನಡ, ನಾಡು ನುಡಿ ಸೇವೆಗೆ ಸದಾಕಾಲ ಬದ್ಧವಾಗಿದೆ ಎಂದರು.

ಆಲೂರು ವೆಂಕಟರಾವ್ ಅವರು 1950ರಲ್ಲಿಯೇ ಕರ್ನಾಟಕ ಏಕೀಕರಣ ಚಳವಳಿಯೊಂದಿಗೆ ರಾಜ್ಯವನ್ನು ಏಕೀಕರಿಸುವ ಕನಸನ್ನು ಕಂಡ ಮೊದಲ ವ್ಯಕ್ತಿ. ಬ್ರಿಟಿಷರ ಅಧಿಕಾರದ ಅವಧಿಯಲ್ಲಿ ಹರಿದು ಹಂಚಿ ಹೋಗಿದ್ದ ಕರ್ನಾಟಕವನ್ನು ಏಕೀಕರಣ ಚಳವಳಿ ಮೂಲಕ ಹಲವು ವರ್ಷಗಳವರೆಗೆ ನಿರಂತರ ಹೋರಾಟದ ಪ್ರತಿಫಲವಾಗಿ 1956 ನವೆಂಬರ್ 1ರಂದು ನಮ್ಮ ರಾಜ್ಯ ಉದಯವಾಯಿತು. ರಾಜ್ಯದ ಪ್ರಗತಿಗೆ ಭದ್ರ ಬುನಾದಿ ಹಾಕಿದ ಅಂದಿನ ಮುಖ್ಯಮಂತ್ರಿಗಳಾಗಿದ್ದ ಡಿ. ದೇವರಾಜ ಅರಸುರವರ ಗಟ್ಟಿ ನಿರ್ಧಾರದಿಂದ 1973ರ ನವೆಂಬರ್ 1 ರಂದು ಮೈಸೂರು ರಾಜ್ಯವನ್ನು ಕರ್ನಾಟಕ ಎಂದು ಮರು ನಾಮಕರಣ ಮಾಡಿದರು ಎಂದು ತಿಳಿಸಿದರು.

ಏಕೀಕರಣದಲ್ಲಿ ಜಿಲ್ಲೆ ಸಕ್ರಿಯ

"ಕರ್ನಾಟಕ ಏಕೀಕರಣ ಚಳವಳಿಯಲ್ಲಿ ಕೊಪ್ಪಳ ಪಾತ್ರವೂ ಅಷ್ಟೇ ಪ್ರಮುಖವಾದುದಾಗಿದೆ. ಜಿಲ್ಲೆಯ ಅಳವಂಡಿ ಶಿವಮೂರ್ತಿಸ್ವಾಮಿ, ಶಿರೂರು ವೀರಭದ್ರಪ್ಪ ತೆಗ್ಗಿನಮನಿ, ಶಂಕರಗೌಡ್ರು, ಪ್ರಭುರಾಜ ಪಾಟೀಲ್ ಸಂಗನಾಳ, ಪಂಚಾಕ್ಷರಿ ಹಿರೇಮಠ, ಸೋಮಪ್ಪ ಡಂಬಳ, ದೇವೇಂದ್ರಕುಮಾರ ಹಕಾರಿ, ಭೀಮನಗೌಡ ಪಾಟೀಲ್, ಹನುಮರಡ್ಡಿ ಕಲ್ಗುಡಿ, ಪಂಚಪ್ಪ ಶೆಟ್ಟರು, ಹಂಜಿ ಕೊಟ್ರಪ್ಪ‌ ಮುಂತಾದವರು ಕರ್ನಾಟಕ ಏಕೀಕರಣಕ್ಕಾಗಿ ಹೋರಾಡಿದ್ದಾರೆ" ಎಂದರು.

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳಿಂದಾಗಿ ರಾಜ್ಯದ ಜನರು ನೆಮ್ಮದಿಯಿಂದ ಬದುಕುವಂತಾಗಿದೆ. ಈ ನಿಟ್ಟಿನಲ್ಲಿ ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಎನ್ನುವ ಸಾಮಾಜಿಕ ನ್ಯಾಯದ ಪರಿಪಾಲನೆ ಮಾಡುತ್ತಿದ್ದೇವೆ. ಪಂಚ ಗ್ಯಾರಂಟಿ ಯೋಜನೆಗಳಿಗಾಗಿ ಪ್ರತಿ ವರ್ಷ 56 ಸಾವಿರ ಕೋಟಿ ರೂ.ಗಳನ್ನು ಸರ್ಕಾರದಿಂದ ಖರ್ಚು ಮಾಡಲಾಗುತ್ತಿದೆ. ಈ ಯೋಜನೆಗಳಿಂದ ಬಡ ಜನರಿಗೆ ಅನುಕೂಲವಾಗಿದೆ. ಆರ್ಥಿಕ ಮತ್ತು ಸಾಮಾಜಿಕವಾಗಿ ಹಿಂದುಳಿದವರಿಗೆ ಗ್ಯಾರಂಟಿ ಯೋಜನೆಗಳ ಮೂಲಕ ಶಕ್ತಿ ತುಂಬುವಂತಹ ಕೆಲಸವಾಗುತ್ತಿದೆ ಎಂದು ತಿಳಿಸಿದರು.

ರಾಜ್ಯೋತ್ಸವ ಪುರಸ್ಕೃತರಿಗೆ ಅಭಿನಂದನೆ

ಪ್ರಸಕ್ತ‌ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಜಿಲ್ಲೆಯ ಬಸಪ್ಪ ಭರಮಪ್ಪ ಚೌಡ್ಕಿ (ಜಾನಪದ ಕ್ಷೇತ್ರ), ದೇವೇಂದ್ರಕುಮಾರ ಪತ್ತಾರ (ಸಂಗೀತ ಕ್ಷೇತ್ರ), ಶೇಖರಗೌಡ ಮಾಲಿಪಾಟೀಲ್ (ಸಹಕಾರ ಕ್ಷೇತ್ರ) ಅವರಿಗೆ ಅಭಿನಂದನೆಗಳನ್ನು ಸಲ್ಲಿಸಿದರು.

Tags:    

Similar News