ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳ ಚಟುವಟಿಕೆಗೆ ಬ್ರೇಕ್: ಅಧಿಕೃತ ಆದೇಶ ಹೊರಡಿಸಿದ ರಾಜ್ಯ ಸರ್ಕಾರ

ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ ಸಂಸ್ಥೆಗಳು, ಸಂಘಟನೆಗಳು ಚಟುವಟಿಕೆಗಳು ಅನುಮತಿ ಇಲ್ಲದೆ ನಡೆಸುವಂತಿಲ್ಲ ಎಂದು ಸಚಿವ ಸಂಪುಟ ತೀರ್ಮಾನ ಕೈಗೊಂಡ ಬೆನ್ನಲ್ಲೇ ಸರ್ಕಾರ ಅಧಿಕೃತವಾಗಿ ಆದೇಶ ಹೊರಡಿಸಿದೆ.

Update: 2025-10-18 15:03 GMT

ರಾಜ್ಯದ ಸರ್ಕಾರಿ ಮತ್ತು ಸರ್ಕಾರಿ ಸ್ವಾಮ್ಯದ ಸ್ಥಳಗಳಲ್ಲಿ ಖಾಸಗಿ ಸಂಘಟನೆಗಳು ಅನುಮತಿಯಿಲ್ಲದೆ ಯಾವುದೇ ಚಟುವಟಿಕೆಗಳನ್ನು ನಡೆಸುವುದನ್ನು ನಿರ್ಬಂಧಿಸಿ, ರಾಜ್ಯ ಸರ್ಕಾರವು ಅಧಿಕೃತವಾಗಿ ಆದೇಶ ಹೊರಡಿಸಿದೆ. ಸಚಿವ ಸಂಪುಟ ಸಭೆಯ ತೀರ್ಮಾನದ ಬೆನ್ನಲ್ಲೇ ಈ ಮಹತ್ವದ ಆದೇಶ ಜಾರಿಯಾಗಿದ್ದು, ಇನ್ನು ಮುಂದೆ ಯಾವುದೇ ಖಾಸಗಿ ಸಂಘ-ಸಂಸ್ಥೆಗಳು ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳಬೇಕಾದರೆ ಸಂಬಂಧಪಟ್ಟ ಇಲಾಖೆಗಳಿಂದ ಪೂರ್ವಾನುಮತಿ ಪಡೆಯುವುದು ಕಡ್ಡಾಯ.

ಈ ಆದೇಶವು ಯಾವುದೇ ನಿರ್ದಿಷ್ಟ ಸಂಘಟನೆಯ ಹೆಸರನ್ನು ನೇರವಾಗಿ ಪ್ರಸ್ತಾಪಿಸಿಲ್ಲವಾದರೂ, ಆರ್‌ಎಸ್‌ಎಸ್‌ನಂತಹ ಸಂಘಟನೆಗಳ ಚಟುವಟಿಕೆಗಳನ್ನು ನಿಯಂತ್ರಿಸುವ ಪರೋಕ್ಷ ಪ್ರಯತ್ನ ಇದಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.

ಆದೇಶದಲ್ಲಿ ಏನಿದೆ?

ಸರ್ಕಾರದ ಆದೇಶದ ಪ್ರಕಾರ, ರಾಜ್ಯದಲ್ಲಿ ಹಲವಾರು ಖಾಸಗಿ ಸಂಸ್ಥೆಗಳು ಮತ್ತು ಸಂಘಗಳು ಯಾವುದೇ ಅಧಿಕೃತ ಅನುಮತಿ ಪಡೆಯದೆ ಸರ್ಕಾರಿ ಸ್ಥಳಗಳಲ್ಲಿ ತಮ್ಮ ಚಟುವಟಿಕೆಗಳಾದ ತರಬೇತಿ, ಪ್ರಚಾರ, ಸಭೆಗಳು ಮತ್ತು ಉತ್ಸವಗಳನ್ನು ನಡೆಸುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿದೆ. ಈ ರೀತಿ ಸಾರ್ವಜನಿಕ ಆಸ್ತಿ, ಜಮೀನು, ಆಟದ ಮೈದಾನ, ಮತ್ತು ರಸ್ತೆಗಳನ್ನು ಬಳಸಿಕೊಳ್ಳುವುದು ಅತಿಕ್ರಮಣ ಅಥವಾ ಅಕ್ರಮ ಪ್ರವೇಶ ಎಂದು ಪರಿಗಣಿಸಲಾಗುತ್ತದೆ. ಇದು ಸಾರ್ವಜನಿಕ ಸುರಕ್ಷತೆಗೆ ಗಂಭೀರ ಬೆದರಿಕೆಯನ್ನುಂಟು ಮಾಡುತ್ತದೆ ಎಂದು ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಹಿನ್ನೆಲೆಯಲ್ಲಿ, ಸಾರ್ವಜನಿಕ ಸುವ್ಯವಸ್ಥೆ ಮತ್ತು ಸುರಕ್ಷತೆಯನ್ನು ಕಾಪಾಡುವ ಉದ್ದೇಶದಿಂದ, ಖಾಸಗಿ ಸಂಸ್ಥೆಗಳು ಯಾವುದೇ ಚಟುವಟಿಕೆ ನಡೆಸಬೇಕಾದರೆ, ಆಯಾ ಸಾರ್ವಜನಿಕ ಆಸ್ತಿಯ ಮಾಲೀಕತ್ವ ಹೊಂದಿರುವ ಸಕ್ಷಮ ಪ್ರಾಧಿಕಾರಗಳಿಂದ ಪೂರ್ವಾನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಲಾಗಿದೆ.

ಅನುಮತಿಗಾಗಿ ಹೊಸ ಮಾರ್ಗಸೂಚಿಗಳು

ಸರ್ಕಾರವು ವಿವಿಧ ಸ್ಥಳಗಳಿಗೆ ಅನುಮತಿ ನೀಡುವ ಪ್ರಾಧಿಕಾರಗಳನ್ನು ನಿಗದಿಪಡಿಸಿದೆ:

ಸರ್ಕಾರಿ ಸ್ವಾಮ್ಯದ ಮತ್ತು ಅನುದಾನಿತ ಶೈಕ್ಷಣಿಕ ಸಂಸ್ಥೆಗಳ ಆವರಣದಲ್ಲಿ ಯಾವುದೇ ಚಟುವಟಿಕೆ ನಡೆಸಲು ಉನ್ನತ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಅಥವಾ ವೈದ್ಯಕೀಯ ಶಿಕ್ಷಣ ಇಲಾಖೆಯ ಅನುಮತಿ ಕಡ್ಡಾಯ. ಪಾರ್ಕ್‌ಗಳು, ಆಟದ ಮೈದಾನಗಳು ಮತ್ತು ಇತರ ತೆರೆದ ಸ್ಥಳಗಳಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲು ನಗರಾಭಿವೃದ್ಧಿ ಇಲಾಖೆ ಅಥವಾ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅನುಮತಿ ಪಡೆಯಬೇಕು. ಸಾರ್ವಜನಿಕ ರಸ್ತೆಗಳು ಮತ್ತು ಸರ್ಕಾರದ ಇತರ ಆಸ್ತಿಗಳಲ್ಲಿ ಚಟುವಟಿಕೆ ನಡೆಸಲು ಆಯಾ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರು, ಅಥವಾ ಪೊಲೀಸ್ ವರಿಷ್ಠಾಧಿಕಾರಿಗಳಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ.

ಅನುಮತಿ ನೀಡುವಾಗ, ಸಂವಿಧಾನಬದ್ಧವಾದ ನಾಗರಿಕರ ಮೂಲಭೂತ ಹಕ್ಕುಗಳಿಗೆ ಯಾವುದೇ ಚ್ಯುತಿಯಾಗದಂತೆ ಎಚ್ಚರವಹಿಸಲು, ಆಯಾ ಇಲಾಖೆಗಳು ವಿವರವಾದ ಮಾರ್ಗಸೂಚಿಗಳನ್ನು ಹೊರಡಿಸಬೇಕೆಂದು ಸರ್ಕಾರ ನಿರ್ದೇಶನ ನೀಡಿದೆ.

ಆದೇಶದ ಹಿನ್ನೆಲೆ ಏನು?

ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್‌ನ ಶಾಖೆ (ಬೈಠಕ್) ನಡೆಸುವುದನ್ನು ನಿರ್ಬಂಧಿಸಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದು ರಾಜ್ಯ ರಾಜಕೀಯದಲ್ಲಿ ತೀವ್ರ ಚರ್ಚೆಯನ್ನು ಹುಟ್ಟುಹಾಕಿತ್ತು. ಇದರ ಬೆನ್ನಲ್ಲೇ ನಡೆದ ಸಚಿವ ಸಂಪುಟ ಸಭೆಯಲ್ಲಿ, ಯಾವುದೇ ಸಂಘಟನೆಯ ಹೆಸರನ್ನು ಉಲ್ಲೇಖಿಸದೆ, ತಮಿಳುನಾಡು ಮಾದರಿಯಲ್ಲಿ ನಿಯಮಗಳನ್ನು ಜಾರಿಗೊಳಿಸಲು ತೀರ್ಮಾನ ಕೈಗೊಳ್ಳಲಾಗಿತ್ತು.

ಇತ್ತೀಚೆಗೆ ನಡೆದ ಆರ್‌ಎಸ್‌ಎಸ್ ಪಥಸಂಚಲನದಲ್ಲಿ ಕೆಲವು ಸರ್ಕಾರಿ ನೌಕರರು ಭಾಗವಹಿಸಿದ್ದರು ಎಂಬ ಆರೋಪದ ಬಗ್ಗೆಯೂ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ನಡೆದಿತ್ತು ಎನ್ನಲಾಗಿದೆ. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಸರ್ಕಾರವು ಈ ನಿಯಂತ್ರಣ ಕ್ರಮಕ್ಕೆ ಮುಂದಾಗಿದೆ. ಈ ಮೂಲಕ ಸಾರ್ವಜನಿಕ ಸ್ಥಳಗಳ ದುರ್ಬಳಕೆಯನ್ನು ತಡೆಯುವುದು ಮತ್ತು ಕಾನೂನು ಸುವ್ಯವಸ್ಥೆಯನ್ನು ಕಾಪಾಡುವುದು ಸರ್ಕಾರದ ಮುಖ್ಯ ಉದ್ದೇಶವಾಗಿದೆ. 

Tags:    

Similar News