ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ : ಇಂದಿನಿಂದ ಜಾರಿ
ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದ್ದು ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದೆ ಎಂದು ಸಿ.ಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ ದೊರೆತಿದ್ದು, ಗುರುವಾರದಿಂದ ಜಾರಿಯಾಗಲಿದೆ. ಬಿಬಿಎಂಪಿ ಬದಲು ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಈ ಬಗ್ಗೆ ಗುರುವಾರ ವಿಧಾನಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದ್ದು ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ಮಳೆ ಅನಾಹುತಕ್ಕೆ ಸೂಕ್ತ ಪರಿಹಾರ
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು.
ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಜಾರಿಗೊಳಿಸಿ ರಾಜ್ಯ ಸರ್ಕಾರ ಬುಧವಾರ ಅಧಿಕೃತ ಅಧಿಸೂಚನೆ ಹೊರಡಿಸಿತ್ತು. ಮೇ 5ರಿಂದ ಪೂರ್ವಾನ್ವಯವಾಗುವಂತೆ ಗ್ರೇಟರ್ ಬೆಂಗಳೂರು ಅಧಿಸೂಚನೆ ಪ್ರಕಟಗೊಂಡಿತ್ತು. ಅದರ ಪ್ರಕಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಎಲ್ಲ ಕಾರ್ಯಗಳು ಗುರುವಾರದಿಂದ ಗ್ರೇಟರ್ ಬೆಂಗಳೂರು ವ್ಯಾಪ್ತಿಯಲ್ಲೇ ನಡೆಯಲಿವೆ.
ಗ್ರೇಟರ್ ಬೆಂಗಳೂರು ವಿಧೇಯಕ ಜಾರಿಯಿಂದ ಪಾಲಿಕೆಯ ಆಡಳಿತವು ತಾಂತ್ರಿಕವಾಗಿ ಬದಲಾಗಲಿದ್ದು, ಆಡಳಿತಾಧಿಕಾರಿಗಳನ್ನು ನೇಮಕ ಮಾಡಲಾಗುತ್ತದೆ. ಬಿಬಿಎಂಪಿ ಆಡಳಿತಾಧಿಕಾರಿಯೇ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಆಡಳಿತಾಧಿಕಾರಿಗಳಾಗಿ, ಬಿಬಿಎಂಪಿ ಮುಖ್ಯ ಆಯುಕ್ತರು ಪ್ರಾಧಿಕಾರದ ಮುಖ್ಯ ಆಯುಕ್ತರಾಗಿ ನೇಮಕವಾಗಲಿದ್ದಾರೆ. ಹೊಸ ಪಾಲಿಕೆಗಳ ರಚನೆ, ನಿಯಮ ಉಪಬಂಧಗಳ ಸಹಿತ ಇತರ ಕಾರ್ಯಗಳನ್ನು ಇನ್ನಷ್ಟೇ ರೂಪಿಸಬೇಕಾಗಿದೆ. ಗ್ರೇಟರ್ ಬೆಂಗಳೂರು ವಿಧೇಯಕ ಜಾರಿಯಾಗಿ 120 ದಿನಗಳಲ್ಲಿ ಮುಖ್ಯಮಂತ್ರಿ ಅಧ್ಯಕ್ಷತೆಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ಮಾಡಬೇಕಾಗಿದೆ.