ರಾಜ್ಯ ಸರ್ಕಾರದಿಂದ ಶಾಲೆಗಳಿಗೆ ಬೀಗ, ಮಠಗಳೇ ಸಮಾಜಕ್ಕೆ ಬೆಳಕು: ಕುಮಾರಸ್ವಾಮಿ

ಬೆಂಗಳೂರಿನ ವಿಜಯನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ 17ನೇ ಬಿಜಿಎಸ್ ಸಂಸ್ಥಾಪನಾ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವಕ್ಕೆ ಚಾಲನೆ ನೀಡಿ

Update: 2025-11-21 11:04 GMT
Click the Play button to listen to article

"ಸರ್ಕಾರಗಳು ಶೈಕ್ಷಣಿಕ ಸಂಸ್ಥೆಗಳನ್ನು ನಡೆಸಲಾಗದೆ ಶಾಲೆಗಳಿಗೆ ಬೀಗ ಜಡಿಯುತ್ತಿವೆ. ಆದರೆ, ಮಠ-ಮಾನ್ಯಗಳು ಯಾವುದೇ ಫಲಾಪೇಕ್ಷೆಯಿಲ್ಲದೆ, ದಕ್ಷತೆ ಮತ್ತು ಸಾಮಾಜಿಕ ಕಳಕಳಿಯಿಂದ ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸುತ್ತಾ ಸರ್ಕಾರ ಮಾಡಬೇಕಾದ ಕೆಲಸವನ್ನು ತಾವು ಮಾಡುತ್ತಿವೆ," ಎಂದು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕಾ ಸಚಿವ ಎಚ್.ಡಿ. ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ವಿಜಯನಗರದಲ್ಲಿರುವ ಶ್ರೀ ಆದಿಚುಂಚನಗಿರಿ ಶಾಖಾ ಮಠದಲ್ಲಿ ಗುರುವಾರ ಆಯೋಜಿಸಲಾಗಿದ್ದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ 17ನೇ ಬಿಜಿಎಸ್ ಸಂಸ್ಥಾಪನಾ ದಿನಾಚರಣೆ ಹಾಗೂ ಬಿಜಿಎಸ್ ಉತ್ಸವಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳನ್ನು ಮುಚ್ಚುವುದಕ್ಕೆ ಆಕ್ರೋಶ

ರಾಜ್ಯ ಸರ್ಕಾರದ ಶಿಕ್ಷಣ ನೀತಿಯನ್ನು ಕಟುವಾಗಿ ಟೀಕಿಸಿದ ಕುಮಾರಸ್ವಾಮಿ, "ರಾಜ್ಯದಲ್ಲಿ ಸರ್ಕಾರಿ ಶಾಲೆಗಳನ್ನು ಮುಚ್ಚುವ ಪ್ರಕ್ರಿಯೆ ನಡೆಯುತ್ತಿದೆ. ಬಡವರು, ರೈತರು ಮತ್ತು ಆರ್ಥಿಕವಾಗಿ ಹಿಂದುಳಿದ ವರ್ಗದ ಮಕ್ಕಳು ಕಲಿಯುವ ಶಾಲೆಗಳನ್ನೇ ಸರ್ಕಾರ ಮುಚ್ಚುತ್ತಿದೆ. ಶಿಕ್ಷಣ ಸಂಸ್ಥೆಗಳನ್ನು ಕಟ್ಟುವುದು ಸುಲಭ, ಆದರೆ ಅವುಗಳನ್ನು ಗುಣಮಟ್ಟದೊಂದಿಗೆ ದೀರ್ಘಕಾಲ ಮುನ್ನಡೆಸುವುದು ಕಷ್ಟದ ಕೆಲಸ. ಸರ್ಕಾರ ಈ ವಿಷಯದಲ್ಲಿ ಎಡವಿದ್ದರೂ, ಮಠಗಳು ತಮ್ಮ ದೂರದೃಷ್ಟಿ ಮತ್ತು ಸಮಾಜಮುಖಿ ಚಿಂತನೆಯಿಂದ ಈ ಜವಾಬ್ದಾರಿಯನ್ನು ಸಮರ್ಥವಾಗಿ ನಿಭಾಯಿಸುತ್ತಿವೆ," ಎಂದು ಶ್ಲಾಘಿಸಿದರು.

ಮಠಗಳ ಕೊಡುಗೆಗೆ ಮೆಚ್ಚುಗೆ

"ಮಠಗಳು ಕೇವಲ ಅಕ್ಷರ ದಾಸೋಹಕ್ಕೆ ಸೀಮಿತವಾಗಿಲ್ಲ. ಬದಲಾಗಿ, ಹಸಿದವರಿಗೆ ಅನ್ನ, ನೆಲೆ ಇಲ್ಲದವರಿಗೆ ಆಶ್ರಯ ನೀಡುವ ಮೂಲಕ 'ತ್ರಿವಿಧ ದಾಸೋಹ' ತತ್ವವನ್ನು ಪಾಲಿಸುತ್ತಿವೆ. ಆಧುನಿಕ ಶಿಕ್ಷಣದ ಜೊತೆಗೆ ಮುಂದಿನ ಪೀಳಿಗೆಗೆ ಅಗತ್ಯವಿರುವ ಸಂಸ್ಕಾರ ಮತ್ತು ಮೌಲ್ಯಯುತ ಶಿಕ್ಷಣವನ್ನು ಧಾರೆ ಎರೆಯುತ್ತಿವೆ. ಆದಿಚುಂಚನಗಿರಿ ಮಠವು ಈ ದಿಸೆಯಲ್ಲಿ ಮುಂಚೂಣಿಯಲ್ಲಿದ್ದು, ಸಮಾಜದಲ್ಲಿ ಅರಿವು ಮೂಡಿಸುವ ಕಾಯಕದಲ್ಲಿ ತೊಡಗಿಸಿಕೊಂಡಿದೆ," ಎಂದು ಕುಮಾರಸ್ವಾಮಿ ಬಣ್ಣಿಸಿದರು.

ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷರಾದ ಡಾ. ಶ್ರೀ ನಿರ್ಮಲಾನಂದನಾಥ ಮಹಾಸ್ವಾಮೀಜಿ, ಸುತ್ತೂರು ಮಠದ ಜಗದ್ಗುರು ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮತ್ತು ಸಿದ್ದಗಂಗಾ ಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಶ್ರೀ ಪ್ರಕಾಶನಾಥ ಸ್ವಾಮೀಜಿ, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಪಬ್ಲಿಕ್ ಟಿವಿ ಮುಖ್ಯಸ್ಥ ಎಚ್.ಆರ್. ರಂಗನಾಥ್, ಹಿರಿಯ ನಟಿ ಮಾಲಾಶ್ರೀ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು. 

Tags:    

Similar News