ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನೆ ವಿಳಂಬ; ಇನ್ನೊಂದು ವರ್ಷ ಬಿಬಿಎಂಪಿಯದ್ದೇ ಆಡಳಿತ
ಬಿಬಿಎಂಪಿಯನ್ನು ಐದು ಪಾಲಿಕೆಗಳಾಗಿ ವಿಭಜಿಸಲಾಗುತ್ತಿದೆ. ಜನವರಿ ವೇಳೆಗೆ ಚುನಾವಣೆ ಸಾಧ್ಯತೆ ಇದೆ. ಅಲ್ಲಿಯವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ ಎಂದು ಹೈಕೋರ್ಟ್‌ಗೆ ರಾಜ್ಯ ಸರ್ಕಾರ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದೆ.;
ಬಿಬಿಎಂಪಿ ಆಡಳಿತವನ್ನು ವಿಭಜಿಸುವ "ಗ್ರೇಟರ್ ಬೆಂಗಳೂರು ಪ್ರಾಧಿಕಾರ" ರಚನೆಗೆ ರಾಜ್ಯ ಸರ್ಕಾರವೇ ತಾತ್ಕಾಲಿಕ ಬ್ರೇಕ್ ಹಾಕಿದೆ.
ಆಡಳಿತಾತ್ಮಕ ಕಾರಣ ಹಾಗೂ ಗ್ರೇಟರ್ ಬೆಂಗಳೂರು ಪ್ರಾಧಿಕಾರ ರಚನಾ ಪ್ರಕ್ರಿಯೆಗಳನ್ನು ಮುಗಿಸುವ ಸಲುವಾಗಿ ಸದ್ಯ ಬಿಬಿಎಂಪಿ ಆಡಳಿತವನ್ನೇ ಮುಂದುವರಿಸಲು ನಿರ್ಧರಿಸಲಾಗಿದೆ ಎಂದು ರಾಜ್ಯ ಸರ್ಕಾರ ಸೋಮವಾರ ಹೈಕೋರ್ಟ್‌ಗೆ ಸಲ್ಲಿಸಿರುವ ಪ್ರಮಾಣಪತ್ರದಲ್ಲಿ ತಿಳಿಸಿದೆ. ಹಾಗಾಗಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ನಿರಾತಂಕವಾಗಿದೆ.
ಬಿಬಿಎಂಪಿ ಕಟ್ಟಡ ಬೈಲಾ ಉಲ್ಲಂಘನೆಗೆ ಸಂಬಂಧಿಸಿದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಪೀಠ, ಗ್ರೇಟರ್ ಬೆಂಗಳೂರು ಪ್ರಾಧಿಕಾರ ಜಾರಿ ಯಾವಾಗ ಎಂದು ಹೈಕೋರ್ಟ್ ಪ್ರಶ್ನಿಸಿತ್ತು. ಇದಕ್ಕೆ ಉತ್ತರಿಸಿದ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅವರು, ಬಿಬಿಎಂಪಿಯನ್ನು ಐದು ಪಾಲಿಕೆಗಳಾಗಿ ವಿಭಜಿಸಲಾಗುತ್ತಿದೆ. ಐದು ಪಾಲಿಕೆಗಳಿಗೆ ಜನವರಿ ವೇಳೆಗೆ ಚುನಾವಣೆ ಸಾಧ್ಯತೆ ಇದೆ. ಅಲ್ಲಿಯವರೆಗೆ ಬಿಬಿಎಂಪಿ ಆಡಳಿತವೇ ಮುಂದುವರಿಯಲಿದೆ. ಆದ್ದರಿಂದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಜಾರಿ ಮುಂದೂಡಲಾಗಿದೆ ಎಂದು ಪ್ರಮಾಣಪತ್ರದಲ್ಲಿ ಸ್ಪಷ್ಟಪಡಿಸಿದ್ದಾರೆ.
ಮೇ 5ರಿಂದ ಗ್ರೇಟರ್ ಬೆಂಗಳೂರು ಜಾರಿಗೆ ಬರುವಂತೆ ಸರ್ಕಾರ ಇತ್ತೀಚೆಗೆ ಅಧಿಕೃತ ಅಧಿಸೂಚನೆ ಹೊರಡಿಸಿತ್ತು. ಬೃಹತ್ ಬೆಂಗಳೂರನ್ನು ವಿಭಜಿಸುವ ಪ್ರಸ್ತಾಪಕ್ಕೆ ರಾಜ್ಯ ಸಚಿವ ಸಂಪುಟ ಕೂಡ ಅನುಮೋದನೆ ನೀಡಿತ್ತು. ಬಿಬಿಎಂಪಿ ಸುಧಾರಣಾ ಸಮಿತಿ ಅಧ್ಯಕ್ಷ ಬಿ.ಎಸ್. ಪಾಟೀಲ್ ಸಮಿತಿ ವರದಿಯನ್ನು ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯ ಸಂಪುಟ ಸಭೆ ಒಪ್ಪಿಕೊಂಡಿತ್ತು. ಇಷ್ಟೆಲ್ಲಾ ಬೆಳವಣಿಗೆಗಳ ಮಧ್ಯೆ ದಿಢೀರನೇ ಜಿಬಿಎ ರಚನೆ ಮುಂದೂಡಿರುವುದು ಕುತೂಹಲ ಮೂಡಿಸಿದೆ.
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಸ್ತಿತ್ವಕ್ಕೆ ಬರುತ್ತಿದ್ದಂತೆ ರಾಜಧಾನಿ ಬೆಂಗಳೂರಿನ ಆಡಳಿತ ಚಿತ್ರಣವೇ ಬದಲಾಗಲಿದೆ. ಬಿಬಿಎಂಪಿ ವ್ಯಾಪ್ತಿ 708 ಚ.ಕಿ.ಮೀ. ಇದ್ದು, ಜಿಬಿಎ ವ್ಯಾಪ್ತಿ 1400 ಚ.ಕಿ.ಮೀ.ಗೆ ವಿಸ್ತರಣೆಯಾಗಲಿದೆ. ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿಯೇ ಬಿಬಿಎಂಪಿ, ಬಿಡಿಎ, ಜಲಮಂಡಳಿ, ಬೆಸ್ಕಾಂ, ಮೆಟ್ರೊ, ಸಂಚಾರ ಪೊಲೀಸ್ ಹಾಗೂ ಸಾರಿಗೆ ಇಲಾಖೆ ಸೇರಿದಂತೆ ನಗರಕ್ಕೆ ಸಂಬಂಧಿಸಿದಂತೆ ಎಲ್ಲ ಇಲಾಖೆಗಳೂ ಕಾರ್ಯ ನಿರ್ವಹಿಸಲಿವೆ ಎಂದು ಹೇಳಲಾಗಿತ್ತು.