ಗ್ರೇಟರ್ ಬೆಂಗಳೂರು ಅಥಾರಿಟಿ | ಡಿಕೆಶಿ ನೇತೃತ್ವದ ಸರ್ವಪಕ್ಷ ಸಭೆ ಚರ್ಚೆ

Update: 2024-07-27 13:37 GMT

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ)ಯನ್ನು ಗ್ರೇಟರ್ ಬೆಂಗಳೂರು ಅಥಾರಿಟಿ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ. ಈ ಗ್ರೇಟರ್ ಬೆಂಗಳೂರು ವಿಧೇಯಕವನ್ನು ಪ್ರತಿಪಕ್ಷಗಳು ವಿರೋಧಿಸುತ್ತಿರುವುದರಿಂದ ಸರ್ಕಾರ ಶನಿವಾರ ಸರ್ವಪಕ್ಷ ಸಭೆ ನಡೆಸಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಳ್ಳುವ ಪ್ರಯತ್ನ ಮಾಡಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಅವರ ನೇತೃತ್ವದಲ್ಲಿ ಶನಿವಾರ(ಜು.27) ಸರ್ವ ಪಕ್ಷಗಳ ಸಭೆ ನಡೆಯಿಒ.

‘ನಾಗರೀಕರ ಧ್ವನಿ, ಅದೇ ಸರ್ಕಾರದ ಧ್ವನಿ’ ಎಂಬ ಪರಿಕಲ್ಪನೆಯಡಿ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಸರ್ವಪಕ್ಷ ಸಭೆ ನಡೆಯಿತು. ಸಭೆಯಲ್ಲಿ ಬೆಂಗಳೂರಿನ‌ ಬಿಜೆಪಿ ಹಾಗೂ ಕಾಂಗ್ರೆಸ್ ಶಾಸಕರು ಭಾಗಿಯಾಗಿದ್ದರು. ವಿಪಕ್ಷ ನಾಯಕ ಆರ್ ಅಶೋಕ್, ಶಾಸಕ ಎಸ್​ ​ಟಿ ಸೋಮಶೇಖರ್ ಕೂಡ ಭಾಗಿಯಾದರು. ಸಭೆಯಲ್ಲಿ ಟ್ರಾಫಿಕ್, ಕುಡಿಯುವ ನೀರು, ಮೆಟ್ರೋ, ರಸ್ತೆ, ಎಲಿವೇಟೆಡ್ ಕಾರಿಡಾರ್ ಸೇರಿದಂತೆ ಹತ್ತು ಹಲವು ವಿಷಯಗಳ ಕುರಿತು ಚರ್ಚೆಸಲಾಯಿತು.

ಸಭೆಯನ್ನು ಉದ್ದೇಶಿಸಿ ಮಾತನಾಡಿದ ಡಿಕೆ ಶಿವಕುಮಾರ್, ʻʻಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ. ನಿಮ್ಮೆಲ್ಲರ ಒತ್ತಾಯದಂತೆ ಗ್ರೇಟರ್ ಬೆಂಗಳೂರು ವಿಚಾರವಾಗಿ ಸದನ ಸಮಿತಿ ರಚಿಸಲು ತೀರ್ಮಾನಿಸಿದ್ದೇವೆʼʼ ಎಂದರು.

ʻʻವಿರೋಧ ಪಕ್ಷದ ನಾಯಕರು ಇಲ್ಲೇ ಇದ್ದು, ನಿಮ್ಮ ಪಕ್ಷದಿಂದ ಸಮಿತಿಗೆ ಹೆಸರು ಶಿಫಾರಸು ಮಾಡಿದರೆ ಇಂದು ಸಂಜೆಯೇ ಸಮಿತಿ ರಚಿಸಿ ಅದನ್ನು ಅಧಿಕೃತವಾಗಿ ಘೋಷಣೆ ಮಾಡಬಹುದು. ಇಂದು ಈ ಎಲ್ಲಾ ವಿಚಾರವಾಗಿ ಎಷ್ಟು ಹೊತ್ತು ಬೇಕಾದರೂ ಚರ್ಚೆ ಮಾಡಲು ಸಿದ್ಧ. ನಿಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ತಿಳಿಸಿʼʼ ಎಂದು ಹೇಳಿದರು.

ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಬಹಳ ಸವಾಲಿನ ಇಲಾಖೆಯಾಗಿದೆ. ಬೆಂಗಳೂರಿನ ಸಮಸ್ಯೆಗಳಿಗೆ ಹೊಸ ರೂಪ ನೀಡುವ ಪ್ರಯತ್ನ ಮಾಡುತ್ತಿದ್ದೇನೆ. ಕೇಂಪೇಗೌಡರು ಬೆಂಗಳೂರನ್ನು ಕಟ್ಟಿದರು. ಕೆಂಗಲ್ ಹನುಮಂತಯ್ಯನವರು ಇಲ್ಲಿ ವಿಧಾನಸೌಧ ಕಟ್ಟಿಸಿದರು. ಎಸ್.ಎಂ ಕೃಷ್ಣ ಅವರು ಇದನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ದರು. ಬೆಂಗಳೂರು ಯೋಜಿತ ನಗರವಲ್ಲ. ನಾನು ಈ ಹಿಂದೆ ನಗರಾಭಿವೃದ್ಧಿ ಸಚಿವನಾಗಿದ್ದಾಗ ಬೆಂಗಳೂರಿನ ಜನಸಂಖ್ಯೆ 70 ಲಕ್ಷ ಇತ್ತು. ಈಗ ಅದು 1.40 ಕೋಟಿಗೆ ಏರಿಕೆಯಾಗಿದೆ. 1.04 ಕೋಟಿ ವಾಹನಗಳಿವೆ. ಪ್ರತಿನಿತ್ಯ ಹೆಚ್ಚಿನ ಸಂಖ್ಯೆಯಲ್ಲಿ ಜನ ಬೇರೆ ಬೇರೆ ಕಡೆಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದಾರೆʼʼ ಎಂದು ತಿಳಿಸಿದರು.

ಸಭೆಯಲ್ಲಿ ಚರ್ಚೆಯಾದ ವಿಚಾರಗಳು

* ತಂತ್ರಜ್ಞಾನ, ಮಾನವ ಸಂಪನ್ಮೂಲ, ಹವಾಮಾನ, ಸಂಸ್ಕೃತಿ ನೋಡಿ ಇಲ್ಲಿಗೆ ಬಂದವರು ಮತ್ತೆ ವಾಪಸ್ ಹೋಗುತ್ತಿಲ್ಲ. ಹಾಗಾಗಿ ಬೆಂಗಳೂರಿನ ಜನಸಂಖ್ಯೆ ಹೆಚ್ಚಾಗುತ್ತಿದೆ.

* ಬಿಜೆಪಿ ಸರ್ಕಾರ 110 ಹಳ್ಳಿಗಳನ್ನು ಬೆಂಗಳೂರಿನ ವ್ಯಾಪ್ತಿಗೆ ಸೇರಿಸಿದೆ. ಆ ಭಾಗಕ್ಕೆ ಮೂಲಸೌಕರ್ಯ ಒದಗಿಸಿಕೊಡಲು ಸಾಧ್ಯವಾಗಿಲ್ಲ.

* ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚಾಗಿದೆ.

* ಕಾವೇರಿ ನೀರಿನ ಸಮಸ್ಯೆ ಒಂದೆಡೆಯಾದರೆ, ಬೇಸಿಗೆಯಲ್ಲಿ ನಗರದ 7 ಸಾವಿರ ಕೊಳವೆಬಾವಿ ಬರಿದಾಗಿ ಸಮಸ್ಯೆ ಉದ್ಭವಿಸಿತ್ತು.

* ಕೆರೆಗಳನ್ನು ಉಳಿಸಿ ಜೀವಂತವಾಗಿರಿಸಿಕೊಳ್ಳಬೇಕು.

* ಕಸ ಹಾಗೂ ಸಂಚಾರ ದಟ್ಟಣೆ ಸಮಸ್ಯೆ ವಿಚಾರವಾಗಿ ಸುಮಾರು 70 ಸಾವಿರ ಸಲಹೆಗಳು ಬಂದಿವೆ.

* ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ.

* ಎಸ್ಟೇಮ್ ಮಾಲ್ ಟು ಸಿಲ್ಕ್ ಬೋರ್ಡ್ ಸುರಂಗ ಮಾರ್ಗ ಮಾಡುವ ಬಗ್ಗೆ ಚರ್ಚೆಯಾಗಿದೆ.

* 12 ಕೋಟಿ ರೂಪಾಯಿ ವೆಚ್ಚದಲ್ಲಿ 100 ಕಿಮೀ ಸಿಗ್ನಲ್ ಫ್ರೀ ಕಾರಿಡಾರ್ ಮಾಡುವ ತೀರ್ಮಾನ.

ಇನ್ನು ಬೆಂಗಳೂರಿನಲ್ಲಿ ವಿಧಾನಸೌಧ ಕಟ್ಟಡ ಬಿಟ್ಟರೆ ಪ್ರವಾಸಿ ಆಕರ್ಷಣೆಯ ಕೇಂದ್ರಗಳು ಹೆಚ್ಚಾಗಿಲ್ಲ. ಕಬ್ಬನ್ ಪಾರ್ಕ್ ಹಾಗೂ ಲಾಲ್ ಬಾಗ್ ನೋಡುತ್ತಿದ್ದ ಕಾಲ ಮುಗಿದಿದೆ. ಸಣ್ಣ ಮಕ್ಕಳು ನೆಹರು ಪ್ಲಾನೆಟೋರಿಯಂ ನೋಡಬಹುದು. ಇದರ ಹೊರತಾಗಿ ಪ್ರಮುಖವಾಗಿ ಪ್ರವಾಸಿಗರನ್ನು ಆಕರ್ಷಿಸುವ ಕೇಂದ್ರವಿಲ್ಲ. ಹೀಗಾಗಿ ಬೆಂಗಳೂರಿನಲ್ಲಿ ಸ್ಕೈಡೆಕ್ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಈ ವಿಚಾರವಾಗಿ ವಿವರಣೆ ನೀಡಲಾಗುವುದು ಎಂದು ಡಿಕೆ ಶಿವಕುಮಾರ್ ತಿಳಿಸಿದರು.

ಇದಕ್ಕೂ ಮುನ್ನ ಬ್ರ್ಯಾಂಡ್ ಬೆಂಗಳೂರು ಕುರಿತ ಕಿರುಹೊತ್ತಿಗೆಯನ್ನು ಡಿಸಿಎಂ ಡಿ.ಕೆ. ಶಿವಕುಮಾರ್, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್, ವಸತಿ ಸಚಿವ ಜಮೀರ್ ಅಹ್ಮದ್, ಬಿಬಿಎಂಪಿ ಆಯುಕ್ತರಾದ ತುಷಾರ್ ಗಿರಿನಾಥ್ ಅವರು ಬಿಡುಗಡೆಗೊಳಿಸಿದರು. 

Tags:    

Similar News