ವಾಲ್ಮೀಕಿ ನಿಗಮ ಹಗರಣ | ಸಿದ್ದರಾಮಯ್ಯ ರಾಜೀನಾಮೆಗೆ ಜಿ.ಟಿ.ದೇವೇಗೌಡ ಆಗ್ರಹ
ರಾಜ್ಯದಲ್ಲಿ ವಾಲ್ಮೀಕಿ ನಿಗಮದ ಕೋಟ್ಯಾಂತರ ರೂ. ಹಗರಣಕ್ಕೆ ಸಂಬಂಧಿಸಿದಂತೆ ಪ್ರತಿಪಕ್ಷಗಳು ತೀವ್ರ ವಾಗ್ದಾಳಿ ಮುಂದುವರಿಸಿದ್ದು, ಇದೀಗ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಾಲ್ಮೀಕಿ ನಿಗಮದ ಕೋಟ್ಯಾಂತರ ರೂ. ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ವಾಗ್ದಾಳಿ ಮುಂದುವರಿದಿದೆ. ಇದೀಗ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ. ದೇವೇಗೌಡ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಒತ್ತಾಯಿಸಿದ್ದಾರೆ.
ವಾಲ್ಮೀಕಿ ನಿಗಮದ ಹಗರಣದಲ್ಲಿ ಹಣಕಾಸು ಇಲಾಖೆಯ ನಂಟು ಸ್ಪಷ್ಟವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು ಎಂದು ಅವರು ಮೈಸೂರಿನಲ್ಲಿ ಗುರುವಾರ ಆಗ್ರಹಿಸಿದ್ದಾರೆ.
ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ʼವಾಲ್ಮೀಕಿ ನಿಗಮದ ಕೋಟ್ಯಾಂತರ ರೂಪಾಯಿ ಒಂದು ಖಾತೆಯಿಂದ ಇನ್ನೊಂದು ಖಾತೆಗೆ ಅಕ್ರಮವಾಗಿ ವರ್ಗಾವಣೆ ಆಗಿದೆ. ಸಿದ್ದರಾಮಯ್ಯ ಅವರೇ ಹಣಕಾಸು ಸಚಿವರು. ಅವರ ಅನುಮತಿ ಇಲ್ಲದೆಯೇ ವರ್ಗಾವಣೆ ಸಾಧ್ಯವೇ' ಎಂದು ಅವರು ಪ್ರಶ್ನಿಸಿದ್ದಾರೆ.
ಈ ಹಿಂದೆ ಟೆಲಿಫೋನ್ ಕದ್ದಾಲಿಕೆ ಪ್ರಕರಣದಲ್ಲಿ ರಾಮಕೃಷ್ಣ ಹೆಗಡೆ, ಮತ್ತೊಂದು ಪ್ರಕರಣದಲ್ಲಿ ಎಸ್. ಬಂಗಾರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ಸಿದ್ದರಾಮಯ್ಯ ಸಹ ರಾಜೀನಾಮೆ ನೀಡಿ ತನಿಖೆ ಎದುರಿಸಬೇಕು. ಆರೋಪ ಮುಕ್ತರಾದಲ್ಲಿ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಅವರು ತಿಳಿಸಿದ್ದಾರೆ.
ಏನಿದು ಪ್ರಕರಣ?
ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಮುಖ್ಯ ಖಾತೆಯಲ್ಲಿ 2024-25 ನೇ ಸಾಲಿನ ಯೋಜನೆಗಳಿಗೆ ಮೀಸಲಿಟ್ಟ 187 ಕೋಟಿ ಮೊತ್ತದಲ್ಲಿ 88 ಕೋಟಿ ಹಣವನ್ನು ನಿಗಮದ ಅಧ್ಯಕ್ಷರ ಗಮನಕ್ಕೂ ತಾರದೇ ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಎಂ.ಜಿ ರಸ್ತೆಯ ಶಾಖೆಯ ಅನಧಿಕೃತ ಖಾತೆಗೆ ವರ್ಗಾವಣೆ ಮಾಡಿದ್ದರು. ಬ್ಯಾಂಕ್‌ನವರು ಫೆ.26ರಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರು ಹಾಗೂ ಲೆಕ್ಕಾಧಿಕಾರಿಗಳ ಸಹಿ ಪಡೆದು ನಿಗಮದ ಖಾತೆಯಿಂದ ಬೇರೆ ಬೇರೆ ಖಾತೆಗಳಿಗೆ ಹಂತ-ಹಂತವಾಗಿ 187.33 ಕೋಟಿ ರೂ. ವರ್ಗಾವಣೆ ಮಾಡಿದ್ದರು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಗಮದ ಅಧೀಕ್ಷಕ ಚಂದ್ರಶೇಖರನ್.ಪಿ (52) ಶಿವಮೊಗ್ಗದಲ್ಲಿ ಆತ್ಮಹತ್ಯೆಗೆ ಶರಣಾಗಿದ್ದರು. ಬಳಿಕ ಈ ಹಗರಣ ಬೆಳಕಿಗೆ ಬಂದಿದೆ. ಚಂದ್ರಶೇಖರನ್ ಆತ್ಮಹತ್ಯೆಗೂ ಮೊದಲು ವಾಲ್ಮೀಕಿ ನಿಗಮದಲ್ಲಿ 85 ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ನಿಗಮದ ಅಧಿಕಾರಿಗಳ ವಿರುದ್ಧ 5 ಪುಟಗಳ ಡೆತ್ ನೋಟ್ ಬರೆದಿಟ್ಟಿದ್ದಾರೆ.
ಈ ಅಕ್ರಮದಲ್ಲಿ ನಿಗಮದ ಎಂಡಿ ಜೆ.ಜಿ.ಪದ್ಮನಾಭ್, ಲೆಕ್ಕಾಧಿಕಾರಿ ಪರಶುರಾಮ ದುರುಗಣ್ಣನವರ್, ಯೂನಿಯನ್ ಬ್ಯಾಂಕ್‌ನ ಮ್ಯಾನೇಜರ್ ಶುಚಿಸ್ಮಿತಾ ರಾವುಲ್ ಪಾತ್ರವಿದೆ ಎಂದು ಉಲ್ಲೇಖಿಸಿದ್ದಾರೆ. ನಿಗಮದ ಎಂಡಿ ಅನುದಾನವನ್ನು ಒತ್ತಾಯಪೂರ್ವಕವಾಗಿ ವರ್ಗಾಯಿಸಿದ್ದಾರೆ. ನಮಗೆ ಇದರ ಒಳಸಂಚು ಅರ್ಥವೇ ಆಗಲಿಲ್ಲ. ನಿಗಮಕ್ಕೆ ಇನ್ನೂ ಬ್ಯಾಂಕ್ ಪಾಸ್ಬುಕ್ ಹಾಗೂ ಚೆಕ್ ಬುಕ್ ನೀಡಿಲ್ಲ. ಈ ಕುರಿತು ಬ್ಯಾಂಕ್ ಮ್ಯಾನೇಜರ್ ಸರಿಯಾದ ಉತ್ತರ ನೀಡಿಲ್ಲ ಎಂದೂ ತಮ್ಮ ಡೆತ್ ನೋಟ್‌ನಲ್ಲಿ ಉಲ್ಲೇಖ ಮಾಡಿದ್ದರು.
ಈ ಪ್ರಕಣಕ್ಕೆ ಸಂಬಂಧಿಸಿದಂತೆ ಎಸ್‌ಐಟಿ ತನಿಖೆ ನಡೆಸುತ್ತಿದ್ದು, ಇದುವರೆಗೆ 11 ಜನರನ್ನು ಬಂಧಿಸಿದ್ದು, ಒಟ್ಟು 35 ಕೋಟಿ ರೂಪಾಯಿಗೂ ಹೆಚ್ಚು ಮೌಲ್ಯದ ನಗದು, ಚಿನ್ನಾಭರಣ ಹಾಗೂ ಬ್ಯಾಂಕ್‌ಗಳಲ್ಲಿದ್ದ ಹಣ ಜಪ್ತಿ ಮಾಡಿದೆ. ಇದಲ್ಲದೆ ಈ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬುಧವಾರ ಕರ್ನಾಟಕದ ಹಲವೆಡೆ ದಾಳಿ ನಡೆಸಿ ಅನೇಕ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದರು. ಮಾಜಿ ಸಚಿವ ನಾಗೇಂದ್ರ ಹಾಗೂ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ನಿವಾಸದ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ತಡರಾತ್ರಿ ವರೆಗೂ ಶೋಧಕಾರ್ಯ ನಡೆಸಿದ್ದರು. ನಾಗೇಂದ್ರ ಪಿಎ ಹರೀಶ್‌ನನ್ನು ವಶಕ್ಕೆ ಪಡೆದು ನಂತರ ರಾತ್ರಿ ಬಿಡುಗಡೆ ಮಾಡಿದ್ದರು.