ಹಾಸನ ಗಣೇಶ ಮೆರವಣಿಗೆ ದುರಂತ: ಸಾವಿನ ಸಂಖ್ಯೆ 10ಕ್ಕೆ, ದೇವೇಗೌಡರಿಂದ ತಲಾ 1 ಲಕ್ಷ ರೂ. ಪರಿಹಾರ
ಜೆಡಿಎಸ್ ಪಕ್ಷದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 25 ಸಾವಿರ ರೂ., ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 20 ಸಾವಿರ ರೂ. ಪರಿಹಾರವನ್ನು ಘೋಷಿಸಿದರು.;
ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
ಹಾಸನ ತಾಲೂಕಿನ ಮೊಸಳೆಹೊಸಳ್ಳಿ ಗ್ರಾಮದಲ್ಲಿ ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಸಂಭವಿಸಿದ ಭೀಕರ ಟ್ರಕ್ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಶಿವಯ್ಯನ ಕೊಪ್ಪಲು ಗ್ರಾಮದ ಯುವಕ ಚಂದನ್ (26) ಅವರು ಚಿಕಿತ್ಸೆ ಫಲಿಸದೆ ಶನಿವಾರ ಮೃತಪಟ್ಟಿದ್ದಾರೆ. ಈ ದುರಂತದ ಹಿನ್ನೆಲೆಯಲ್ಲಿ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು ಜಿಲ್ಲಾಸ್ಪತ್ರೆಗೆ ಭೇಟಿ ನೀಡಿ ಗಾಯಾಳುಗಳ ಆರೋಗ್ಯ ವಿಚಾರಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಜೆಡಿಎಸ್ ಪಕ್ಷದ ವತಿಯಿಂದ ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ., ಗಂಭೀರವಾಗಿ ಗಾಯಗೊಂಡವರಿಗೆ ತಲಾ 25 ಸಾವಿರ ರೂ., ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ ತಲಾ 20 ಸಾವಿರ ರೂ. ಪರಿಹಾರವನ್ನು ಘೋಷಿಸಿದರು. ಅಲ್ಲದೆ, "ರಾಜ್ಯ ಸರ್ಕಾರ ನೀಡಿರುವ ಪರಿಹಾರ ಸಾಕಾಗುವುದಿಲ್ಲ, ಹೆಚ್ಚಿನ ಪರಿಹಾರ ನೀಡಬೇಕು," ಎಂದು ಆಗ್ರಹಿಸಿದರು.
ಈಗಾಗಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ್ದು, ಗಾಯಾಳುಗಳ ಸಂಪೂರ್ಣ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ತಿಳಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಕೂಡ ಘಟನೆಗೆ ಸಂತಾಪ ಸೂಚಿಸಿ, ಪ್ರಧಾನ ಮಂತ್ರಿಗಳ ರಾಷ್ಟ್ರೀಯ ಪರಿಹಾರ ನಿಧಿಯಿಂದ (PMNRF) ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಮತ್ತು ಗಾಯಾಳುಗಳಿಗೆ ತಲಾ 50,000 ರೂ. ಪರಿಹಾರವನ್ನು ಘೋಷಿಸಿದ್ದಾರೆ.
ಶುಕ್ರವಾರ ರಾತ್ರಿ ಗಣೇಶ ವಿಸರ್ಜನಾ ಮೆರವಣಿಗೆ ನಡೆಯುತ್ತಿದ್ದಾಗ, ವೇಗವಾಗಿ ಬಂದ ಟ್ರಕ್ ಚಾಲಕನ ನಿಯಂತ್ರಣ ತಪ್ಪಿ ಜನರ ಮೇಲೆ ಹರಿದ ಪರಿಣಾಮ ಈ ಭೀಕರ ದುರಂತ ಸಂಭವಿಸಿತ್ತು. ಘಟನೆಯಲ್ಲಿ 8 ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದರು.