ವಾಲ್ಮೀಕಿ ನಿಗಮ ಹಗರಣ | CM ಹೆಸರು ಹೇಳಲು ED ಒತ್ತಾಯ ಪ್ರಕರಣ ರದ್ದುಗೊಳಿಸಿದ HC

ಇ.ಡಿ ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್ ಈ ಕುರಿತಂತೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಆದೇಶಿಸಿದೆ.;

Update: 2024-11-09 06:35 GMT
ಕರ್ನಾಟಕ ಹೈಕೋರ್ಟ್‌
Click the Play button to listen to article

ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಆರೋಪಿಯಾಗಿಸಲು ಒತ್ತಡ ಹೇರುತ್ತಿದ್ದಾರೆ ಎಂದು ದೂರಿ ಜಾರಿ ನಿರ್ದೇಶನಾಲಯದ (ಇ.ಡಿ) ಇಬ್ಬರು ಅಧಿಕಾರಿಗಳ ವಿರುದ್ಧ ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಬಿ.ಕಲ್ಲೇಶ್ ದಾಖಲಿಸಿದ್ದ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ.

ಇ.ಡಿ ಉಪ ನಿರ್ದೇಶಕ ಮನೋಜ್ ಮಿತ್ತಲ್ ಮತ್ತು ಸಹಾಯಕ ನಿರ್ದೇಶಕ ಮುರಳಿ ಕಣ್ಣನ್ ಈ ಕುರಿತಂತೆ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ನ್ಯಾಯಪೀಠ ಶುಕ್ರವಾರ ವಿಚಾರಣೆ ನಡೆಸಿ ಈ ಆದೇಶ ಹೊರಡಿಸಿದೆ.

'ದೂರನ್ನು ಮುಂದುವರೆಸಲು ಇಚ್ಚಿಸುವುದಿಲ್ಲ' ಎಂದು ದೂರುದಾರ ಬಿ.ಕಲ್ಲೇಶ್ ಸಲ್ಲಿಸಿದ ಮೆಮೊ ಅನ್ನು ನ್ಯಾಯಪೀಠ ಪರಿಗಣಿಸಿದೆ ಎಂದು ಆದೇಶದಲ್ಲಿ ತಿಳಿಸಿದೆ.

'ಈ ಅಧಿಕಾರಿಗಳು ತಮ್ಮ ಅಧಿಕೃತ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಹಾಗಾಗಿ, ಕರ್ತವ್ಯ ನಿರ್ವಹಣೆ ವೇಳೆ ಅವರ ವಿರುದ್ಧ ಎಫ್‌ಐಆ‌ರ್ ದಾಖಲಿಸುತ್ತಾ ಹೋದರೆ, ಯಾವುದೇ ಅಧಿಕಾರಿ ಕರ್ತವ್ಯ ನಿರ್ವಹಿಸಲಾಗದು. ಅಧಿಕಾರಿಗಳ ವಿರುದ್ಧದ ಎಫ್‌ಐಆ‌ರ್ ತನಿಖೆಗೆ ಅನುಮತಿ ನೀಡಿದರೆ, ಅದು ಕಾನೂನು ದುರ್ಬಳಕೆಯಾಗಲಿದೆ' ಎಂದು ಪೀಠ ಹೇಳಿತು.

ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದ 95 ಕೋಟಿ ರೂ ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರು ಹೇಳುವಂತೆ ತಮಗೆ ಬೆದರಿಸಿ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಜಾರಿ ನಿರ್ದೇಶನಾಲಯದ (ಇ.ಡಿ.) ಅಧಿಕಾರಿಗಳ ವಿರುದ್ಧ ವಿಲ್ಸನ್ ಗಾರ್ಡನ್ ಠಾಣೆಯಲ್ಲಿ ಬಿ.ಕಲ್ಲೇಶ್‌ ದೂರು ನೀಡಿದ್ದರು.

ಅಧಿಕಾರಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ-2023ರ (ಬಿಎನ್‌ಎಸ್) ಕಲಂ 3(5) (ಉದ್ದೇಶ ಪೂರ್ವಕ ಬೆದರಿಕೆ), 351 (2) (ಕ್ರಿಮಿನಲ್ ಬೆದರಿಕೆ), ಮತ್ತು 352 (ಉದ್ದೇಶಪೂರ್ವಕ ಅವಮಾನ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.

Tags:    

Similar News