ಜಾಹೀರಾತು ಸರ್ಕಾರದಿಂದ 35,471 ಕಡತ ಬಾಕಿ: ಎಚ್ಡಿ ಕುಮಾರಸ್ವಾಮಿ ವಾಗ್ದಾಳಿ
ಕಾಂಗ್ರೆಸ್ ಸರ್ಕಾರ ಹೇಗೆ ಕೆಲಸ ಮಾಡುತ್ತಿದೆ ಎನ್ನುವುದಕ್ಕೆ ಇಲಾಖೆಗಳ ಕೆಲಸ ನೋಡಿದರೆ ಅರ್ಥ ಆಗುತ್ತದೆ. ಎಂಟು ಪ್ರಮುಖ ಇಲಾಖೆಗಳಲ್ಲಿ 35,471 ಕಡತಗಳು ವಿಲೇವಾರಿ ಆಗಿಲ್ಲ. ಇದು ಸರ್ಕಾರದ ಸಾಧನೆಯೇ? ಎಂದು ಒಂದು ವರ್ಷದ ಸಂಭ್ರಮದಲ್ಲಿರುವ ಸಿದ್ದರಾಮಯ್ಯ ಸರ್ಕಾರವನ್ನು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತರಾಟೆಗೆ ತೆಗೆದುಕೊಂಡರು.
ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಚುನಾವಣೆ ನಂತರ ಓರ್ವ ಮಂತ್ರಿಯಾದರೂ ಜಿಲ್ಲೆಗಳಿಗೆ ಭೇಟಿ ನೀಡಿದ್ದೀರಾ? ಅಧಿಕಾರಿಗಳಿಗೆ ಎಚ್ಚರಿಕೆ ನೀಡಿ ಕೆಲಸ ಮಾಡಿಸಿದ್ದಾರಾ? . ರಾಜ್ಯದ ಅಭಿವೃದ್ಧಿ ಸಂಪೂರ್ಣ ಸ್ಥಗಿತವಾಗಿದೆ. ನಾಡಿನ ಅಭಿವೃದ್ಧಿಗೆ ಪೂರಕವಾದ ಕೆಲಸ ಆಗಿಲ್ಲ. ಸರ್ಕಾರದ ಐದು ವರ್ಷದ ಆಡಳಿತಾತ್ಮಕ ಮಂಜೂರಾತಿ ಮುಂದುವರಿಸಿದ್ದು ಬಿಟ್ಟರೆ ಏನೂ ಆಗಿಲ್ಲ. ವರ್ಗಾವಣೆ ದಂಧೆಯೂ ನಿಂತಿಲ್ಲ ಎಂದು ಅವರು ಆರೋಪ ಮಾಡಿದರು.
ರಾಜ್ಯ ಸರ್ಕಾರ ವರ್ಷದ ಸಂಭ್ರಮದಲ್ಲಿದೆ. ಆದರೆ, ಕೇಂದ್ರ ಸರ್ಕಾರ ನೀಡಿರುವ ಬೆಳೆ ಪರಿಹಾರ ಹಣವು ಸಾಲಕ್ಕೆ ಜಮೆ ಆಗುತ್ತಿದೆ. ಇದು ಈ ಸರ್ಕಾರದ ವೈಖರಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಪೆನ್ಡ್ರೈವ್ ಸಾಧನೆ
ಸರ್ಕಾರ ಎಲ್ಲಾ ಸಾಧನೆಗಳನ್ನು ಹೇಳಿಕೊಳ್ಳುತ್ತಿದೆ. ಆದರೆ, ಪೆನ್ ಡ್ರೈವ್ ಸಾಧನೆ ಮಾತ್ರ ಇವರು ಹೇಳಿಕೊಳ್ಳುತ್ತಿಲ್ಲ. ವಿದ್ಯುತ್ ಸಂಚಲನ ಉಂಟು ಮಾಡಿದ, ವಿಶ್ವದಾದ್ಯಂತ ಸಂಚಲನ ಮೂಡಿಸಿದ ವಿಷಯವನ್ನು ಇವರು ಹೇಳೇ ಇಲ್ಲ. ಇದು ನನಗೆ ಆಶ್ಚರ್ಯ ಉಂಟು ಮಾಡಿದೆ ಎಂದು ಅವರು ಕುಟುಕಿದರು.
ರೈತರು ಬರದಿಂದ ಕಂಗೆಟ್ಟು ಸಂಕಷ್ಟದಲ್ಲಿದ್ದಾರೆ. ರೈತರಿಗೆ ಈ ಸರ್ಕಾರದ ಕೊಡುಗೆ ಏನೂ ಇಲ್ಲ. ರಾಜ್ಯದಲ್ಲಿ ರೈತರ ಆತ್ಮಹತ್ಯೆಗಳು ಆರಂಭ ಆಗಿವೆ. ಬರ ಪರಿಹಾರ ಹಣವನ್ನು ಸಾಲಕ್ಕೆ ವಜಾ ಮಾಡ್ತಿದ್ದಾರೆ. ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ನೀಡಿಲ್ಲ. ಹಲವು ಇಲಾಖೆಗಳಲ್ಲಿ ವೇತನ ನೀಡಿಲ್ಲ ಎಂದು ತರಾಟೆಗೆ ತೆಗೆದುಕೊಂಡರು.
ಮುಖ್ಯಮಂತ್ರಿಗಳು ಸಭೆ ನಡೆಸಿ ಅಧಿಕಾರಿಗಳ ಮೇಲೆ ವಾಗ್ದಾಳಿ ನಡೆಸಿದ್ದರು. ಆದರೆ, ಜನರ ಕೆಲಸಗಳು ಏನಾಗಿವೆ? ಅಭಿವೃದ್ಧಿ ಕೆಲಸಗಳು ಎಲ್ಲಾದರೂ ಆಗಿವೆಯೇ? ಕೇವಲ ಗ್ಯಾರಂಟೀಗಳ ಹೆಸರು ಹೇಳಿಕೊಂಡು ಅಭಿವೃದ್ಧಿಯನ್ನು ಸಂಪೂರ್ಣವಾಗಿ ನಿರ್ಲಕ್ಷ್ಯ ಮಾಡಿದ್ದಾರೆ . ರಾಜ್ಯದ ನೀರಾವರಿ ಯೋಜನೆಗಳ ಪರಿಸ್ಥಿತಿ ಏನಾಗಿದೆ? ರಸ್ತೆಯ ಪರಿಸ್ಥಿತಿ ಹೇಗಾಗಿದೆ? ಕಳೆದ ಒಂದು ವರ್ಷದಿಂದ ಬ್ರ್ಯಾಂಡ್ ಬೆಂಗಳೂರು ಏನಾಗಿದೆ? ಮಳೆ ಬಂದು ಬೆಂಗಳೂರಿನ ಪರಿಸ್ಥಿತಿ ಏನಾಗಿದೆ ಎನ್ನುವುದನ್ನು ಈಗ ಕಣ್ಣಾರೆ ನೋಡುತ್ತಿದ್ದೇವೆ. ಎರಡು ದಿನ ಸುರಿದ ಮಳೆಗೆ ಬೆಂಗಳೂರು ಜನರು ನರಕ ನೋಡುತ್ತಿದ್ದಾರೆ. ಮನೆಗಳಿಗೆ ಬೀಗ ಹಾಕಿ ಹೋಟೆಲ್ ಗೆ ಹೋಗಿ ಜೀವನ ಮಾಡುತ್ತಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.
ಇದು ಜಾಹೀರಾತು ಸರ್ಕಾರ
ನಾನು ಕೂಡ ಸರ್ಕಾರ ನಡೆಸಿದ್ದೇನೆ. ನಾನು ಮಾಡದ ಕೆಲಸದ ಬಗ್ಗೆ ಜಾಹೀರಾತು ಕೊಟ್ಟು ಪ್ರಚಾರ ಪಡೆದಿಲ್ಲ. ಜನರ ತೆರಿಗೆ ಹಣವನ್ನ ದುರ್ಬಳಕೆ ಮಾಡಿಕೊಂಡಿಲ್ಲಾ. ಇದು ಜಾಹೀರಾತು ಸರ್ಕಾರ! ಜಾಹಿರಾತು ಕೊಟ್ಟಿದ್ದೇ ಈ ಸರ್ಕಾರದ ಸಾಧನೆ ಎಂದು ಕುಮಾರಸ್ವಾಮಿ ಅವರು ಟೀಕಿಸಿದರು.