ಶಿರೂರು ಗುಡ್ಡ ಕುಸಿತ| SDRF ಮತ್ತು NDRF ಸಿಬ್ಬಂದಿಯ ಕಾರ್ಯಕ್ಷಮತೆಗೆ ಸಿಎಂ ಸಿದ್ದರಾಮಯ್ಯ ಮೆಚ್ಚುಗೆ

Update: 2024-07-21 13:40 GMT

ಉತ್ತರ ಕನ್ನಡ ಜಿಲ್ಲೆಯ ಅಂಕೋಲ ತಾಲೂಕಿನ ಶಿರೂರು ಗುಡ್ಡ ಕುಸಿತ ಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಭೇಟಿ ನೀಡಿ, ಅತ್ಯಂತ ಅಪಾಯಕಾರಿ ಸನ್ನಿವೇಶದಲ್ಲಿ ಕಾರ್ಯಾಚರಣೆ ನಡೆಸುತ್ತಿರುವ SDRF ಮತ್ತು NDRF ಸಿಬ್ಬಂದಿಯ ಕಾರ್ಯಕ್ಷಮತೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಹಲವು ದಿನಗಳಿಂದ ತಾಲ್ಲೂಕಿನಲ್ಲೇ ಮೊಕ್ಕಾಂ ಹೂಡಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಘಟನಾ ಸ್ಥಳದ ಪರಿಸ್ಥಿತಿಯ ಬಗ್ಗೆ ವಿವರಣೆ ನೀಡಿದರು. ನಾಲ್ಕು ತಂಡಗಳು ಗುಡ್ಡ ಕುಸಿತದ ಕೆಳಗೆ ಸಿಲುಕಿರಬಹುದಾದವರ ಪತ್ತೆಗೆ ರಾಡಾರ್ ತಂತ್ರಜ್ಞಾನ ಬಳಸಿ ಕಾರ್ಯಾಚರಣೆ ನಡೆಸುತ್ತಿವೆ. ಇನ್ನು ನಾಲ್ಕು ತಂಡಗಳು ಮತ್ತೊಂದು ಬದಿಯ ನದಿಯೊಳಗೆ ಕಾರ್ಯಾಚರಣೆ ನಡೆಸುತ್ತಿವೆ ಎಂದು ತಿಳಿಸಿದರು.

ಈ ವೇಳೆ ಸಿದ್ದರಾಮಯ್ಯ ಅವರು SDRF ಮತ್ತು NDRF ಸಿಬ್ಬಂದಿಯೊಂದಿಗೆ ಮಾತನಾಡಿ, ʻʻಗುಡ್ಡ ಕುಸಿತದಿಂದ ಮುಚ್ಚಿ ಹೋಗಿರುವ ರಸ್ತೆಯ ಎಡಭಾಗದಲ್ಲಿ ಕುಸಿತದ ಗುಡ್ಡ-ಬಲ ಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾಳಿ ನದಿ ಇದೆ. ಜೊತೆಗೆ ನಿರಂತರವಾಗಿ ಸುರಿಯುತ್ತಿರುವ ಧಾರಾಕಾರ ಮಳೆಯಲ್ಲಿ ಮಣ್ಣಿನಡಿ ಸಿಲುಕಿರುವ ಜೀವಗಳ ಪತ್ತೆ ಕಾರ್ಯ ಬಹಳ ಸವಾಲಿನದ್ದಾಗಿದೆ. ಕಾರ್ಯಾಚರಣೆ ನಡೆಯುತ್ತಿರುವ ಜಾಗ ಮತ್ತು ಮಣ್ಣು ತುಂಬಿರುವ ರಸ್ತೆಯೂ ಕುಸಿಯುವ ಸಾಧ್ಯತೆಗಳ ಬಗ್ಗೆ ಮುಖ್ಯಮಂತ್ರಿಗಳು ಅಧಿಕಾರಿಗಳಿಂದ ಮಾಹಿತಿ ಪಡೆದು ಈ ಬಗ್ಗೆ ಹೆಚ್ಚು ಜಾಗರೂಕರಾಗಿರುವಂತೆ ಸಿಬ್ಬಂದಿಗೆ ಎಚ್ಚರಿಸಿದರು.

ಗುಡ್ಡ ಕುಸಿತದ ಸ್ಥಳ ಒಂದು ರೀತಿ ದ್ವೀಪದಂತಾಗಿದೆ. ಸುತ್ತಲೂ ಕಾಳಿ ನದಿ ಭೋರ್ಗರೆದು ಹರಿಯುತ್ತಿದೆ. ನಡುವೆ ಅರ್ಧ ಕುಸಿದ ಗುಡ್ಡ ನಿಂತಿದೆ. ಹೀಗಾಗಿ ಕಾರ್ಯಾಚರಣೆ ವೇಳೆ ಎದುರಾಗಬಹುದಾದ ಅಪಾಯಗಳು ಮತ್ತು ಸವಾಲುಗಳ ಬಗ್ಗೆ ಉನ್ನತ ಮಟ್ಟದ ತಜ್ಞರಿಂದ ಮಾಹಿತಿ ಪಡೆದು ತಂತ್ರಜ್ಞಾನದ ನೆರವು ಪಡೆಯುವಂತೆ ಮುಖ್ಯಮಂತ್ರಿಗಳು ಸೂಚಿಸಿದರು.

ಆ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ ಅವರು, ʻʻಗೋವಾ ಮತ್ತು ಅಂಕೋಲಾ ನಡುವೆ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಜುಲೈ 16 ರಂದು ಭೂ ಕುಸಿತವಾಗಿದೆ. ಭೂ ಕುಸಿತದಿಂದ 10 ಜನ ಕಾಣೆಯಾಗಿದ್ದಾರೆ. ಅದರಲ್ಲಿ ಏಳು ಜನರ ಹೆಣಗಳು ಪತ್ತೆಯಾಗಿದ್ದು ಇನ್ನೂ ಮೂವರು ಕಾಣೆಯಾಗಿದ್ದು ಅವರ ಪತ್ತೆಗಾಗಿ ಪರಿಹಾರ ಕಾರ್ಯಾಚರಣೆ ಜಾರಿಯಲ್ಲಿದೆ. ಭೂಕುಸಿತದ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಜನ ಹಾಗೂ 44 ಜನ ಮಿಲಿಟರಿಯವರು ಹಾಗೂ ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆʼʼ ಎಂದು ತಿಳಿಸಿದರು.

ʻʻಘಟನೆಯಲ್ಲಿ ಖಾಲಿ ಗ್ಯಾಸ್ ಟ್ಯಾಂಕರ್ ಹಾಗೂ ಭರ್ತಿಯಾಗಿರುವ ಗ್ಯಾಸ್ ಟ್ಯಾಂಕರ್ ಕೂಡ ಸಿಕ್ಕಿಹಾಕಿಕೊಂಡಿದ್ದು, ಅಲ್ಲಿಯೇ ವಾಸವಾಗಿರುವ ಒಂದೇ ಕುಟುಂಬದವರು ಟೀ ಅಂಗಡಿಯನ್ನು ಇಟ್ಟುಕೊಂಡಿದ್ದರು. ಅವರಲ್ಲಿ ಐವರು ಭೂ ಕುಸಿತದಲ್ಲಿ ಸಾವನ್ನಪ್ಪಿದ್ದಾರೆ. ರಿಸ್ಕ್ ಆಪರೇಶನ ನ್ನು ತ್ವರಿತವಾಗಿ ಮಾಡಬೇಕೆಂದು ಜಿಲ್ಲಾಡಳಿತ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಿಗೆ ಸ್ಪಷ್ಟವಾಗಿ ಸೂಚಿಸಿದ್ದೇನೆʼʼ ಎಂದರು.

ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ

ʻʻವಿಧಾನಸಭಾ ಅಧಿವೇಶನ ನಡೆಯುತ್ತಿದ್ದುದರಿಂದ ಇಂದು ಭೇಟಿ ನೀಡಿದ್ದೇನೆ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಎಲ್ಲಾ ಕ್ರಮವನ್ನು ತೆಗೆದುಕೊಳ್ಳಬೇಕೆಂದು ಸೂಚಿಸಿದ್ದೆ. ಸಾವನ್ನಪ್ಪಿದವರ ಕುಟುಂಬಕ್ಕೆ 5 ಲಕ್ಷ ಪರಿಹಾರ ನೀಡಬೇಕೆಂದು ಘೋಷಿಸಲಾಗಿದೆ. ಈಗಾಗಲೇ ಅದನ್ನು ವಿತರಿಸಲಾಗಿದೆ. ಒಂದು ವೇಳೆ ಭೂ ಕುಸಿತದಲ್ಲಿ ಇನ್ಯಾರಾದರೂ ಸಾವನ್ನಪ್ಪಿದ್ದರೆ ಅವರಿಗೂ 5 ಲಕ್ಷ ರೂಪಾಯಿಗಳ ಪರಿಹಾರವನ್ನು ನೀಡಲಾಗುವುದುʼʼ ಎಂದರು.

10 ಜನರು ಕಾಣೆಯಾಗಿದ್ದಾರೆ, ಅವರನ್ನು ಎಲ್ಲೆಡೆ ಹುಡುಕುವಂತೆ ನೌಕಾದಳ ಹಾಗೂ ರಕ್ಷಣಾ ತಂಡದವರಿಗೆ ಸೂಚನೆ ನೀಡಲಾಗಿದೆ. ಘಟನೆ ನಡೆದ ದಿನವೇ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯರನ್ನೂ ಹಾಗೂ ಶಾಸಕರನ್ನು ಸ್ಥಳಕ್ಕೆ ಕಳುಹಿಸಲಾಗಿದೆ ಎಂದರು.

ಈ ವೇಳೆ ಮಾಧ್ಯಮದವರು, ಈ ಭೂ ಕುಸಿತವು ಪ್ರಕೃತಿ ವಿಕೋಪವಲ್ಲ ಐ.ಆರ್.ಬಿ ಸಂಸ್ಥೆಯ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಆಗಿದೆ, ಆದರೆ ಅವರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಯಾಕೆ? ಎಂದು ಪ್ರಶ್ನೆ ಕೇಳಿದರು. ಆ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ʻʻಯಾರೇ ತಪ್ಪು ಮಾಡಿದರೂ ಕೂಡ ಅವರ ಮೇಲೆ ಕ್ರಮ ವಹಿಸಲಾಗುವುದು, ರಸ್ತೆ ನಿರ್ಮಾಣ ಮಾಡಿರುವವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರು. ಪರಿಹಾರ ಕಾಮಗಾರಿ ಮುಗಿದ ಮೇಲೆ ಪ್ರಕರಣದ ಬಗ್ಗೆ ಗಮನಹರಿಸಿ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದುʼʼಎಂದು ಉತ್ತರಿಸಿದರು.

ಕೇಂದ್ರ ಸರ್ಕಾರ ರಸ್ತೆ ಪೂರ್ಣಗೊಳ್ಳದಿದ್ದರೂ ಟೋಲ್ ಸಂಗ್ರಹ ಮಾಡುತ್ತಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಅವರು, ʻʻಕೇಂದ್ರ ರಸ್ತೆ ಸಾರಿಗೆ ಸಚಿವರೊಂದಿಗೆ ನಾನು ಮಾತನಾಡುತ್ತೇನೆ. ಕಳಪೆ ಕೆಲಸವಾಗಿದ್ದಾರೆ ಅದನ್ನು ಕೂಡಲೇ ಸರಿಪಡಿಸುವ ಕೆಲಸ ಮಾಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯ ಮಾಡಲಾಗುವುದುʼʼ ಎಂದರು.

ರಾಜ್ಯ ಸರ್ಕಾರ ವಿಳಂಬ ಕಾರ್ಯಾಚರಣೆ ಮಾಡುತ್ತಿದೆ ಎಂಬ ಆರೋಪಕ್ಕೆ ಪ್ರತಿಕ್ರಿಯಿಸಿ, ʻʻರಾಜ್ಯ ಸರ್ಕಾರ ಯಾವುದನ್ನೂ ವಿಳಂಬ ಮಾಡಿಲ್ಲ. ಎಲ್ಲವನ್ನೂ ತ್ವರಿತವಾಗಿ ಮಾಡುತ್ತಿದ್ದೇವೆ. ಕೇರಳದ ಅರ್ಜುನ್ ಎಂಬುವರು ಕಾಣೆಯಾಗಿದ್ದು, ತಮ್ಮ ರಾಜ್ಯದವರೆಂದು ಅವರೆಲ್ಲಾ ಬಂದಿರಬಹುದು. ಆದರೆ ನಾವು ವಿಳಂಬ ಮಾಡದೇ, ನಿರ್ಲಕ್ಷ್ಯ ತೋರದೆ ಕೆಲಸ ಮಾಡುತ್ತಿದ್ದೇವೆʼʼ ಎಂದು ಸಮರ್ಥಿಸಿಕೊಂಡರು.

ಭೂ ಕುಸಿತವಾಗುತ್ತದೆ ಎಂದು ಒಂದು ವರ್ಷದ ಹಿಂದೆಯೇ ವರದಿಯಾಗಿದೆ, ಸತ್ತ ಮೇಲೆಯೇ ಕ್ರಮವೇಕೆ? ಎಂದು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ʻʻನಮ್ಮ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾಯಿತು. ಕಳೆದ ಬಾರಿ ಬರವಿದ್ದು, ಈ ಬಾರಿ ಮಳೆಯಾಗುತ್ತಿದೆ. ಬಹಳ ವರ್ಷ ಗಳಿಂದ ಇಲ್ಲಿ ಭೂ ಕುಸಿತವಾಗಿರಲಿಲ್ಲ. ಎಲ್ಲೆಲ್ಲಿ ಭೂ ಕುಸಿತವಾಗುತ್ತದೆಯೋ ಅದನ್ನು ತಡೆಗಟ್ಟಲು ಪ್ರಯತ್ನಿಸಲಾಗುವುದುʼʼ ಎಂದರು.

ʻʻಪ್ರಕೃತಿ ವಿಕೋಪದ ಸಂದರ್ಭದಲ್ಲಿ ರಾಜಕಾರಣ ಮಾಡುವುದಿಲ್ಲ. ಕೇಂದ್ರ ಸರ್ಕಾರದ ತಂಡ ಎನ್.ಡಿ.ಆರ್. ಎಫ್ ಕೂಡ ಇಲ್ಲಿ ಕಾರ್ಯಾಚರಣೆ ಮಾಡುತ್ತಿದೆ. ನೌಕಾ ತಂಡವೂ ಇದೆ. ಇಲ್ಲಿ ಇನ್ಯಾರ ಮೇಲೆಯೂ ದೋಷ ಹೊರೆಸಲು ನಾನು ಹೋಗುವುದಿಲ್ಲʼʼ ಎಂದು ಹೇಳಿದರು.

ʻʻಭೂ ಕುಸಿತದಿಂದ ಮರಣ ಹೊಂದಿದವರ ಆತ್ಮಕ್ಕೆ ಶಾಂತಿ ದೊರೆಯಲಿ ಎಂದು ಪ್ರಾರ್ಥನೆ ಮಾಡುತ್ತೇವೆ. ನಾವು ಕೊಡುವ ಪರಿಹಾರದಿಂದ ಅವರ ಜೀವ ಮರಳಿ ಬರುವುದಿಲ್ಲ. ಪ್ರಕೃತಿ ವಿಕೋಪದಿಂದಾಗಿರುವ ಘಟನೆ ಇದು. ಸಾಧ್ಯವಾದಷ್ಟು ಅವರನ್ನು ಉಳಿಸುವ ಪ್ರಯತ್ನ ಮಾಡಲಾಗುವುದು. ಇಲ್ಲದಿದ್ದರೆ ಅವರ ಮೃತ ದೇಹವನ್ನು ಪತ್ತೆಹಚ್ಚುವ ಕೆಲಸ ಮಾಡಲಾಗುವುದುʼʼ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

Tags:    

Similar News