BSY POCSO Case | ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅರ್ಜಿ ವಿಚಾರಣೆ ಮುಂದೂಡಿಕೆ
ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಹಾಗೂ ಅವರಿಗೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿ ಅರ್ಜಿಗಳ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.;
ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪಕ್ಕೆ ಸಂಬಂಧಿಸಿದಂತೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಅಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ಹಾಗೂ ಅವರಿಗೆ ನೀಡಿರುವ ಮಧ್ಯಂತರ ರಕ್ಷಣೆಯನ್ನು ರದ್ದು ಮಾಡಬೇಕು ಎಂದು ರಾಜ್ಯ ಸರ್ಕಾರ ಸಲ್ಲಿಸಿರುವ ಮನವಿ ಅರ್ಜಿಗಳ ವಿಚಾರಣೆಯನ್ನು ರಾಜ್ಯ ಹೈಕೋರ್ಟ್ ಸೋಮವಾರಕ್ಕೆ ಮುಂದೂಡಿದೆ.
ಈ ಎರಡೂ ಅರ್ಜಿಗಳ ವಿಚಾರಣೆಯನ್ನು ನಡೆಸುತ್ತಿರುವ ಹೈಕೋರ್ಟ್ ನ್ಯಾಯಾಧೀಶ ಎಂ ನಾಗಪ್ರಸನ್ನ ಅವರ ಏಕಸದಸ್ಯ ಪೀಠವು ವಿಚಾರಣೆಯನ್ನು ಸೋಮವಾರ ಮಧ್ಯಾಹ್ನ 2:30ಕ್ಕೆ ಮುಂದೂಡಿದೆ.
ರಾಜ್ಯ ಸರಕಾರದ ಪರ ವಾದ ಮಂಡಿಸಿದ ವಿಶೇಷ ಅಭಿಯೋಜಕ ಪ್ರೊ.ರವಿವರ್ಮ ಕುಮಾರ್, ಪ್ರಕರಣದಲ್ಲಿ ಈಗಾಗಲೇ ಚಾರ್ಚ್ ಶೀಟ್ ಸಲ್ಲಿಸಲಾಗಿದೆ. ಪೋಕ್ಸೊ ಕಾಯ್ದೆ ಸೆಕ್ಷನ್ 35ರಲ್ಲಿ ತಿಳಿಸಿರುವಂತೆ, ಪ್ರಕರಣ ಸಂಬಂಧ ಕಾಗ್ನಿಜೆನ್ಸ್ ಪಡೆದ ಬಳಿಕ ಮೂರು ತಿಂಗಳಲ್ಲಿ ಸಾಕ್ಷ್ಯಗಳನ್ನು ದಾಖಲಿಸಿಕೊಳ್ಳಬೇಕು. ವಿಳಂಬವಾದಲ್ಲಿ ಅದಕ್ಕೆ ಸೂಕ್ತ ಕಾರಣವನ್ನು ವಿಶೇಷ ನ್ಯಾಯಾಲಯ ದಾಖಲಿಸಬೇಕು ಎಂದು ತಿಳಿಸಲಾಗಿದೆ. ಕಾಗ್ನಿಜೆನ್ಸ್ ಪಡೆದುಕೊಂಡು ಈಗಾಗಲೇ ಆರು ತಿಂಗಳು ಕಳೆದಿದೆ. ಆದ್ದರಿಂದ ಅರ್ಜಿದಾರ ಆರೋಪಿ ಪೋಕ್ಸೊ ವಿಶೇಷ ನ್ಯಾಯಾಲಯಕ್ಕೆ ಖುದ್ದು ಹಾಜರಾಗುವುದರಿಂದ ವಿನಾಯಿತಿ ನೀಡಿ ಈ ಹಿಂದೆ ನೀಡಿರುವ ಮಧ್ಯಂತರ ಆದೇಶವನ್ನು ತೆರವುಗೊಳಿಸುವಂತೆ ಮನವಿ ಮಾಡಿದರು.
ಈ ವೇಳೆ ಯಡಿಯೂರಪ್ಪ ಪರ ಹಿರಿಯ ವಕೀಲ ಸಿ ವಿ ನಾಗೇಶ್ ವಾದ ಮಂಡಿಸಲು ಕಾಲಾವಕಾಶ ಕೇಳಿದರು. ಹಾಗಾಗಿ ವಿಚಾರಣೆಯನ್ನು ಮೂಂದೂಡಲಾಗಿದೆ.
ಏನಿದು ಪ್ರಕರಣ?
ಫೆಬ್ರವರಿ 2 ರಂದು ಯಡಿಯೂರಪ್ಪ ಅವರು ತಮ್ಮ ಬೆಂಗಳೂರು ನಿವಾಸದಲ್ಲಿ ತನ್ನ ಅಪ್ರಾಪ್ತ ವಯಸ್ಸಿನ ಮಗಳನ್ನು ತಮ್ಮ ಖಾಸಗಿ ಕೋಣೆಗೆ ಕರೆದೊಯ್ದು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ 17 ವರ್ಷದ ಯುವತಿಯ ತಾಯಿ ಆರೋಪ ಮಾಡಿದ್ದರು. ಘಟನೆ ನಂತರ ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಸಹ ದಾಖಲಾಗಿತ್ತು.
ಅಪ್ರಾಪ್ತೆಗೆ ಲೈಂಗಿಕ ದೌರ್ಜನ್ಯ ನೀಡಿದ ಆರೋಪದಡಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿರುದ್ಧ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ನಂತರ ಈ ಪ್ರಕರಣವನ್ನು ಸರ್ಕಾರ ಸಿಐಡಿಗೆ ವಹಿಸಿತ್ತು. ಈ ಪ್ರಕರಣ ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ರಾಜ್ಯ ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ.