ರಾಜ್ಯದಲ್ಲಿ ಮುಂಗಾರು ಮಳೆ ಅಬ್ಬರ: ಮುಂದಿನ 3 ದಿನ ಭಾರೀ ಮಳೆಯ ಮುನ್ಸೂಚನೆ

ಜೂನ್ 24ರಿಂದ 27ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.;

Update: 2025-06-24 04:29 GMT

ರಾಜ್ಯದಲ್ಲಿ ಮುಂದಿನ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದಲ್ಲಿ ಮುಂಗಾರು ಮಳೆ ತೀವ್ರ ಸ್ವರೂಪ ಪಡೆದಿದ್ದು, ಮುಂದಿನ ಮೂರು ದಿನಗಳ ಕಾಲ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇದರ ಬೆನ್ನಲ್ಲೇ, ಕರಾವಳಿ ಮತ್ತು ಮಲೆನಾಡು ಭಾಗಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಜೂನ್ 24ರಿಂದ 27ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಮತ್ತು ಮಲೆನಾಡಿನಲ್ಲಿ ತೀವ್ರ ಮಳೆ ನಿರೀಕ್ಷೆ

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಭಾಗಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸಲಿದೆ. ವಿಶೇಷವಾಗಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ಮಲೆನಾಡು ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ನದಿಗಳ ಹರಿವು ಹೆಚ್ಚಾಗುವ ಸಂಭವವಿದೆ.

ಉತ್ತರ ಒಳನಾಡು ಮತ್ತು ಇತರ ಜಿಲ್ಲೆಗಳಲ್ಲಿ ಮಳೆ ಮುಂದುವರಿಕೆ

ಉತ್ತರ ಒಳನಾಡು ಕರ್ನಾಟಕದ ಬೆಳಗಾವಿ, ಧಾರವಾಡ, ಹಾವೇರಿ ಮತ್ತು ಗದಗ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರ್ಗಿ, ವಿಜಯಪುರ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ನಿರಂತರ ಗಾಳಿಯೊಂದಿಗೆ (40-50 ಕಿಮೀ) ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಕೋಲಾರ, ತುಮಕೂರು, ಬಳ್ಳಾರಿ, ದಾವಣಗೆರೆ, ಹಾವೇರಿ, ಗದಗ, ಬೆಳಗಾವಿ, ಕೊಪ್ಪಳ, ಧಾರವಾಡ, ವಿಜಯಪುರ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರಿನಲ್ಲಿ ಈಗಾಗಲೇ ಬೆಳಿಗ್ಗೆ ಮೋಡ ಕವಿದ ವಾತಾವರಣವಿದ್ದು, ಮಧ್ಯಾಹ್ನದ ವೇಳೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Tags:    

Similar News