Heavy Rain | ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆ
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 24 ಗಂಟೆಗಳಲ್ಲಿ ಸಾಧಾರಣ ಹಾಗೂ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಕೆಲವೆಡೆ ಗುಡುಗು ಸಹಿತ ಮಳೆ, ಬಿರುಗಾಳಿ ಬೀಸುವ ಸಾಧ್ಯತೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಬಾಗಲಕೋಟೆ, ಧಾರವಾಡ, ಗದಗ, ಹಾವೇರಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಸೋನೆ ಮಳೆಯಾಗುವ ನಿರೀಕ್ಷೆಯಿದೆ.
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲೂ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಿರುಗಾಳಿಯೂ ಬೀಸಬಹುದು ಎಂದು ಮುನ್ಸೂಚನೆ ನೀಡಿದೆ.
ಬಳ್ಳಾರಿ, ಬೆಂಗಳೂರು (ನಗರ ಮತ್ತು ಗ್ರಾಮಾಂತರ), ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮಂಡ್ಯ, ರಾಮನಗರ, ತುಮಕೂರು ಮತ್ತು ವಿಜಯನಗರದಲ್ಲಿ ಹಗುರ ಮಳೆಯಾಗಲಿದೆ.
ಶುಕ್ರವಾರ ರಾತ್ರಿ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿದ ಪರಿಣಾಮ ಅನೇಕ ಕಡೆಗಳಲ್ಲಿ ನೀರು ನಿಂತು ದೈನಂದಿನ ಜೀವನ ಅಸ್ತವ್ಯಸ್ತಗೊಂಡಿತ್ತು. ವೀರಸಂದ್ರ ಬಳಿ ಬೆಂಗಳೂರು-ಹೊಸೂರು ರಾಷ್ಟ್ರೀಯ ಹೆದ್ದಾರಿ ಸಂಪೂರ್ಣ ಜಲಾವೃತಗೊಂಡಿತ್ತು. ಸಾಗರ್ ಜಂಕ್ಷನ್, ಡೈರಿ ಸಿಗ್ನಲ್, ರಾಯಸಂದ್ರ ಸೇರಿದಂತೆ ಹಲವಾರು ಪ್ರಮುಖ ರಸ್ತೆಗಳು ಜಲಾವೃತವಾಗಿದ್ದವು.
ಮೈಸೂರು ರಸ್ತೆ, ಗುಡ್ಡದಹಳ್ಳಿ ಜಂಕ್ಷನ್, ಕೆಂಗೇರಿ, ಬಿಳೇಕಲ್ಲಳ್ಳಿ ಸಿಗ್ನಲ್, ಜಿ.ಡಿ. ಮರ ಸಿಗ್ನಲ್, ಸಾಗರ್ ಜಂಕ್ಷನ್, ಡೈರಿ ಸಿಗ್ನಲ್, ದೊಡ್ಡ ಮರ, ಚೊಕ್ಕಸಂದ್ರ ಹಾಗೂ ರಾಯಸಂದ್ರ ಸೇರಿದಂತೆ ಅನೇಕ ಕಡೆಗಳಲ್ಲಿ ನೀರು ನಿಂತಿದ್ದು, ಸಂಚಾರ ದಟ್ಟಣೆ ಉಂಟಾಗಿತ್ತು ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.