ರಾಜ್ಯದಲ್ಲಿ ವರುಣಾರ್ಭಟ ಸಾಧ್ಯತೆ : ಕರಾವಳಿಗೆ 'ಆರೆಂಜ್ ಅಲರ್ಟ್
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದೆ.
ರಾಜ್ಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆಯು ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ಘೋಷಿಸಿದೆ. ಉಳಿದ ಬಹುತೇಕ ಜಿಲ್ಲೆಗಳಿಗೆ 'ಯೆಲ್ಲೋ ಅಲರ್ಟ್' ನೀಡಲಾಗಿದ್ದು, ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ ಇರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ಇಂದು (ಅ. 27) ಕರಾವಳಿಯ ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿಯೂ ಗುಡುಗು ಸಹಿತ ಭಾರಿ ಮಳೆಯಾಗಲಿದೆ. ಉತ್ತರ ಒಳನಾಡಿನ ಬೆಳಗಾವಿ ಮತ್ತು ಧಾರವಾಡ ಜಿಲ್ಲೆಗಳಲ್ಲಿಯೂ ಗಾಳಿ ಸಹಿತ ಭಾರಿ ಮಳೆಯಾಗುವ ಸಂಭವವಿದೆ. ಬಾಗಲಕೋಟೆ, ಬೀದರ್, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.
ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ
ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳ ಕೆಲವು ಕಡೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಇನ್ನುಳಿದಂತೆ ಬಳ್ಳಾರಿ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
ಬೆಂಗಳೂರಿನ ವಾತಾವರಣ
ರಾಜಧಾನಿ ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶಃ ಮೋಡ ಕವಿದ ವಾತಾವರಣವಿರಲಿದೆ. ಹಗುರ ಮಳೆಯಾಗುವ ಸಾಧ್ಯತೆಯಿದ್ದು, ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗುವ ನಿರೀಕ್ಷೆಯಿದೆ.
ಮೀನುಗಾರರಿಗೆ ವಿಶೇಷ ಎಚ್ಚರಿಕೆ
ಕರಾವಳಿ ತೀರದಲ್ಲಿ ಗಂಟೆಗೆ 40 ರಿಂದ 60 ಕಿ.ಮೀ. ವೇಗದಲ್ಲಿ ಬಿರುಗಾಳಿ ಸಹಿತ ಬಲವಾದ ಗಾಳಿ ಬೀಸುವ ಸಾಧ್ಯತೆಯಿದೆ. ಸಮುದ್ರ ಪ್ರಕ್ಷುಬ್ಧಗೊಳ್ಳುವುದರಿಂದ ಮುಂದಿನ ಆದೇಶದವರೆಗೆ ಮೀನುಗಾರರು ಸಮುದ್ರಕ್ಕೆ ಇಳಿಯಬಾರದು ಎಂದು ಹವಾಮಾನ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ. ನಾಳೆಯೂ (ಅ. 28) ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರೆಯುವ ಸಾಧ್ಯತೆಯಿದೆ.