ಸೆಪ್ಟೆಂಬರ್ 24ರವರೆಗೆ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

Update: 2025-09-19 04:52 GMT
ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. 
Click the Play button to listen to article

ಬೆಂಗಳೂರಿನಾದ್ಯಂತ ವರುಣನ ಆರ್ಭಟ ಮುಂದುವರೆದಿದ್ದು, ರಾಜಧಾನಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 24ರವರೆಗೆ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಗುರುವಾರ ರಾತ್ರಿಯಿಂದ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ಬೆಂಗಳೂರಿನ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಮುಂದಿನ ಒಂದು ವಾರ ಮಳೆ ಮುಂದುವರೆಯುವ ನಿರೀಕ್ಷೆಯಿದೆ.

ರಾಜ್ಯಾದ್ಯಂತ ಆರೆಂಜ್ ಅಲರ್ಟ್

ಹವಾಮಾನ ಇಲಾಖೆಯು ಬೆಂಗಳೂರು ಗ್ರಾಮಾಂತರ, ಬಾಗಲಕೋಟೆ, ಬಳ್ಳಾರಿ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿರುವುದರಿಂದ ‘ಆರೆಂಜ್ ಅಲರ್ಟ್’ ಘೋಷಿಸಿದೆ. ರಾಜ್ಯದ ಉತ್ತರ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಪ್ರದೇಶಗಳಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ವಿಶೇಷವಾಗಿ ಬಾಗಲಕೋಟೆ, ವಿಜಯಪುರ ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಕಳೆದ ಕೆಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದೆ. ಉತ್ತರ ಕರ್ನಾಟಕದ ಇತರೆ ಜಿಲ್ಲೆಗಳಲ್ಲಿಯೂ ಭಾರೀ ಮಳೆ ಸುರಿಯಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಮಳೆ ಅವಾಂತರ

ಗುರುವಾರ ಸುರಿದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ವ್ಯಾಪಕ ಅವಾಂತರ ಸೃಷ್ಟಿಯಾಗಿದೆ. ನಗರದ ದಕ್ಷಿಣ ಮತ್ತು ಪಶ್ಚಿಮ ವಲಯಗಳಲ್ಲಿ 41ಕ್ಕೂ ಹೆಚ್ಚು ಮರಗಳು ಧರೆಗುರುಳಿದ್ದು, ಪ್ರಮುಖ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ (BBMP) ನಿಯಂತ್ರಣ ಕೊಠಡಿಗೆ ಒಂದೇ ದಿನದಲ್ಲಿ 103 ಮಳೆ ಸಂಬಂಧಿತ ದೂರುಗಳು ಬಂದಿದ್ದು, ಅವುಗಳಲ್ಲಿ ಹೆಚ್ಚಿನವು ಮರ ಬಿದ್ದಿರುವ ಕುರಿತಾಗಿಯೇ ಇವೆ.

ಜಯನಗರ, ಜೆಪಿ ನಗರ, ಬಿಟಿಎಂ ಲೇಔಟ್ ಮತ್ತು ಬಸವನಗುಡಿ ಪ್ರದೇಶಗಳಲ್ಲಿ ಸುಮಾರು 15 ಮರಗಳು ಉರುಳಿಬಿದ್ದಿವೆ. ಜೆಪಿ ನಗರ 6ನೇ ಹಂತ ಮತ್ತು ಬನಶಂಕರಿಯಲ್ಲಿ ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದ ಪರಿಣಾಮ ಗಂಟೆಗಟ್ಟಲೆ ಸಂಚಾರ ಸ್ಥಗಿತಗೊಂಡಿತ್ತು. ಇನ್ನು, ಬೆಂಗಳೂರು ಉತ್ತರ ಭಾಗದ ಹೆಬ್ಬಾಳ, ಯಲಹಂಕ ಮತ್ತು ಆರ್.ಟಿ. ನಗರದಲ್ಲಿ 9 ಮರಗಳು ಹಾಗೂ 12 ಮರದ ಕೊಂಬೆಗಳು ಮುರಿದುಬಿದ್ದಿವೆ. ಆರ್.ಟಿ. ನಗರದಲ್ಲಿ ಚರಂಡಿಗಳು ಕಟ್ಟಿಕೊಂಡಿದ್ದರಿಂದ ಹಲವು ರಸ್ತೆಗಳು ಜಲಾವೃತಗೊಂಡು ಸವಾರರು ಪರದಾಡುವಂತಾಯಿತು.

Tags:    

Similar News