ರಾಜ್ಯಾದ್ಯಂತ ವರುಣನ ಆರ್ಭಟ: ಶೃಂಗೇರಿ-ಮಂಗಳೂರು ಹೆದ್ದಾರಿ ಬಂದ್

ಶೃಂಗೇರಿಯಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರುವ ಆತಂಕವಿದ್ದು, ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಹಾಗೂ ಗಾಂಧಿ ಮೈದಾನ ಈಗಾಗಲೇ ಜಲಾವೃತವಾಗಿದೆ.;

Update: 2025-07-27 05:33 GMT

ರಾಜ್ಯಾದ್ಯಂತ, ವಿಶೇಷವಾಗಿ ಮಲೆನಾಡು ಮತ್ತು ಕರಾವಳಿ ಭಾಗಗಳಲ್ಲಿ ಮುಂಗಾರು ಚುರುಕುಗೊಂಡಿದ್ದು, ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಹಲವೆಡೆ ಮರಗಳು ಧರೆಗುರುಳಿದರೆ, ಶೃಂಗೇರಿ-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.

ಮಲೆನಾಡಿನಲ್ಲಿ ಮಳೆ ಅವಾಂತರ

ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಗಾಳಿ ಸಹಿತ ಭಾರೀ ಮಳೆ ಸುರಿಯುತ್ತಿದೆ. ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿ ಮೂರು ಕಡೆ ಬೃಹತ್ ಮರಗಳು ಉರುಳಿಬಿದ್ದ ಪರಿಣಾಮ, ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಇನಾಂ ದತ್ತಾತ್ರೇಯ ಬಾಬಾ ಬುಡನ್ ಸ್ವಾಮಿ ದರ್ಗಾ ಹಾಗೂ ಝರಿ ಫಾಲ್ಸ್‌ಗೆ ಸಂಪರ್ಕ ಕಲ್ಪಿಸುವ ರಸ್ತೆ ಸಂಪೂರ್ಣ ಬಂದ್ ಆಗಿದೆ. ಚಿಕ್ಕಮಗಳೂರು-ಶೃಂಗೇರಿ ರಾಜ್ಯ ಹೆದ್ದಾರಿಯಲ್ಲೂ ಮರಗಳು ಬಿದ್ದು ಸಂಚಾರಕ್ಕೆ ಅಡ್ಡಿಯಾಗಿದೆ. ಕೊಪ್ಪ, ಮೂಡಿಗೆರೆ, ಶೃಂಗೇರಿ, ಕಳಸ ಮತ್ತು ಎನ್.ಆರ್. ಪುರ ತಾಲೂಕುಗಳಲ್ಲಿ ವರುಣನ ಅಬ್ಬರ ಮುಂದುವರಿದಿದೆ.

ಪಶ್ಚಿಮ ಘಟ್ಟಗಳ ಭಾಗದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದಾಗಿ ತುಂಗಾ ಮತ್ತು ಭದ್ರಾ ನದಿಗಳು ಉಕ್ಕಿ ಹರಿಯುತ್ತಿವೆ. ಶೃಂಗೇರಿಯಲ್ಲಿ ತುಂಗಾ ನದಿ ಅಪಾಯದ ಮಟ್ಟ ಮೀರುವ ಆತಂಕವಿದ್ದು, ಶಾರದಾ ಮಠಕ್ಕೆ ಸಂಪರ್ಕಿಸುವ ಪರ್ಯಾಯ ಮಾರ್ಗ ಹಾಗೂ ಗಾಂಧಿ ಮೈದಾನ ಈಗಾಗಲೇ ಜಲಾವೃತವಾಗಿದೆ. ಕೆರೆಕಟ್ಟೆ ಸಮೀಪ ರಾಷ್ಟ್ರೀಯ ಹೆದ್ದಾರಿ 169ರ ಮೇಲೆ ಗುಡ್ಡ ಕುಸಿದ ಪರಿಣಾಮ ಶೃಂಗೇರಿ-ಮಂಗಳೂರು ನಡುವಿನ ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ.

ಕರಾವಳಿ, ಉತ್ತರ ಕನ್ನಡದಲ್ಲೂ ಪ್ರವಾಹದ ಭೀತಿ

ಉತ್ತರ ಕನ್ನಡ ಜಿಲ್ಲೆಯಲ್ಲೂ ಮಳೆ ಆರ್ಭಟಿಸುತ್ತಿದ್ದು, ಕುಮಟಾ, ಹೊನ್ನಾವರ ಭಾಗದಲ್ಲಿ 120 ಮಿ.ಮೀ.ಗೂ ಹೆಚ್ಚು ಮಳೆ ದಾಖಲಾಗಿದೆ. ಶರಾವತಿ, ಅಘನಾಶಿನಿ, ಗುಂಡ್ಲಬಾಳ ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ಪಾತ್ರದ ಅನೇಕ ಗ್ರಾಮಗಳು ಜಲಾವೃತವಾಗಿವೆ. ಹಲವು ಮನೆಗಳು ಮತ್ತು ತೋಟಗಳಿಗೆ ನೀರು ನುಗ್ಗಿ ಅಪಾರ ಹಾನಿ ಸಂಭವಿಸಿದೆ.

ಜುಲೈ 31ರವರೆಗೆ ಭಾರೀ ಮಳೆ ಮುನ್ಸೂಚನೆ

ಹವಾಮಾನ ಇಲಾಖೆಯು ರಾಜ್ಯಾದ್ಯಂತ ಜುಲೈ 31ರವರೆಗೆ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ಕರಾವಳಿ ಭಾಗದಲ್ಲಿ ಮುಂದಿನ ಐದು ದಿನಗಳ ಕಾಲ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

Tags:    

Similar News