ರಾಜ್ಯಾದ್ಯಂತ ಅ.29ರವರೆಗೂ ಭಾರೀ ಮಳೆ; ನಗರದಲ್ಲಿ ಧರೆಗುರುಳಿದ ಮರ
6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಅ.29ರವರೆಗೂ ಮಳೆ ಮುಂದುವರೆಯಲಿದೆ.
6 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ 11 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ದಾವಣಗೆರೆ, ಚಿತ್ರದುರ್ಗ, ಬಳ್ಳಾರಿ, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರು ಗ್ರಾಮಾಂತರ, ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು ಸಾರ್ವಜನಿಕರು ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು ನಗರದಲ್ಲಿ ಕಳೆದ ರಾತ್ರಿ ಭಾರೀ ಮಳೆ ಸುರಿದಿದ್ದು, ಪರಿಣಾಮ ಕೆಲವು ಅವಾಂತರಗಳು ಸಂಭವಿಸಿವೆ. ಏಕಾಏಕಿ ಬೃಹತ್ ಮರದ ಕೊಂಬೆ ರಸ್ತೆಗೆ ಉರುಳಿ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಮೂವರು ಪಾರಾಗಿದ್ದಾರೆ.
ರಾತ್ರಿ ಸುರಿದ ಮಳೆಗೆ ಅಲಿ ಆಸ್ಗರ್ ರಸ್ತೆಯ ಪೊಲೀಸ್ ಕಮಿಷನರ್ ಕಚೇರಿ ಹಿಂದಿನ ಗೇಟ್ ಬಳಿ ಬೆಳಿಗ್ಗೆ 7.30ರ ವೇಳೆಗೆ ಬೃಹತ್ ಮರದ ಕೊಂಬೆ ಏಕಾಏಕಿ ರಸ್ತೆಗೆ ಉರುಳಿ ಬಿದ್ದ ಘಟನೆ ನಡೆದಿದೆ. ಟ್ರಾಫಿಕ್ ಪೊಲೀಸ್, ಸೆಕ್ಯೂರಿಟಿ ಗಾರ್ಡ್ ಮತ್ತು ಬಿಬಿಎಂಪಿ ಸಿಬ್ಬಂದಿ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ. ಆ ಮೂಲಕ ಅದೃಷ್ಟವಶಾತ್ ಭಾರೀ ಅನಾಹುತವೊಂದು ತಪ್ಪಿದೆ.
ರಸ್ತೆ ತಾತ್ಕಾಲಿಕ ಬಂದ್
ಇನ್ನು ಈ ಬಗ್ಗೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್ ಮಾಡಿದ್ದು, ಅಲಿ ಅಸ್ಕರ್ ರಸ್ತೆಯಲ್ಲಿ ಮರ ಬಿದ್ದ ಪರಿಣಾಮ ಕನ್ನಿಂಗ್ಹ್ಯಾಮ್ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಇನ್ಫೆಂಟ್ರಿ ರಸ್ತೆಯನ್ನು ಬಳಸುವಂತೆ ಸೂಚಿಸಿದ್ದಾರೆ. ಅದೇ ರೀತಿಯಾಗಿ ಆರ್‌ಸಿ ಪುರದಲ್ಲಿ ಕೂಡ ಮರ ಧರೆಗುರುಳಿ ಬಿದ್ದಿದೆ. ಪರಿಣಾಮ ರಾಮಚಂದ್ರಾಪುರ ರಸ್ತೆಯನ್ನು ತಾತ್ಕಾಲಿಕವಾಗಿ ಮುಚ್ಚಲಾಗಿದೆ. ಪ್ರಯಾಣಿಕರು ಪರ್ಯಾಯ ಮಾರ್ಗವಾಗಿ ಭೂಪಸಂದ್ರ ರಸ್ತೆಯನ್ನು ಬಳಸುವಂತೆ ಬೆಂಗಳೂರು ಸಂಚಾರಿ ಪೊಲೀಸರು ಟ್ವೀಟ್ ಮೂಲಕ ಮಾಹಿತಿ ನೀಡಿದ್ದಾರೆ.