ಕರ್ನಾಟಕದಲ್ಲಿ ಮುಂದುವರಿದ ಮಳೆ ಆರ್ಭಟ: ಕರಾವಳಿಗೆ 'ರೆಡ್ ಅಲರ್ಟ್' ಘೋಷಣೆ!

ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್​ ಇರಬಹುದೆಂದು ಅಂದಾಜಿಸಲಾಗಿದೆ.;

Update: 2025-07-20 04:15 GMT

ಸಾಂದರ್ಭಿಕ ಚಿತ್ರ

ನೈರುತ್ಯ ಮಾನ್ಸೂನ್ ರಾಜ್ಯದಲ್ಲಿ ತನ್ನ ಪ್ರಭಾವವನ್ನು ಮುಂದುವರಿಸಿದ್ದು, ಕರ್ನಾಟಕದಾದ್ಯಂತ ಮುಂದಿನ ಒಂದು ವಾರ ಧಾರಾಕಾರ ಮಳೆಯಾಗುವ ಮುನ್ಸೂಚನೆ ಇದೆ. ಅದರಲ್ಲೂ ವಿಶೇಷವಾಗಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆಯಿದ್ದು, ಜುಲೈ 20ರಂದು 'ರೆಡ್ ಅಲರ್ಟ್' ಘೋಷಿಸಲಾಗಿದೆ.

ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಇಂದು ಅಬ್ಬರದ ಮಳೆಯಾಗಲಿದೆ. ಇದರ ಜೊತೆಗೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಿಗೆ 'ಆರೆಂಜ್ ಅಲರ್ಟ್' ನೀಡಲಾಗಿದ್ದು, ಇಲ್ಲಿಯೂ ಭಾರಿ ಮಳೆಯ ಸಾಧ್ಯತೆ ಇದೆ. ಗದಗ, ಕೊಪ್ಪಳ, ಧಾರವಾಡ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿಯೂ ಉತ್ತಮ ಮಳೆಯಾಗುವ ನಿರೀಕ್ಷೆಯಿದೆ. ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಬೆಂಗಳೂರು ನಗರದಲ್ಲಿ ಮುಂದಿನ 24 ಗಂಟೆಗಳ ಕಾಲ ಮೋಡ ಕವಿದ ವಾತಾವರಣ ಇರಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 28 ಡಿಗ್ರಿ ಮತ್ತು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್​ ಇರಬಹುದೆಂದು ಅಂದಾಜಿಸಲಾಗಿದೆ.

ಮುಂದಿನ ದಿನಗಳ ಮುನ್ಸೂಚನೆ

ಜುಲೈ 21: ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ನಿರಂತರ ಗಾಳಿ ಸಹಿತ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ರಾಯಚೂರು, ಯಾದಗಿರಿ, ಕಲಬುರಗಿ, ಬೀದರ್ ಹಾಗೂ ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜುಲೈ 22: ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ ಮುಂದುವರಿಯಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯ ನಿರೀಕ್ಷೆಯಿದೆ.

ಜುಲೈ 23: ಕರಾವಳಿ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಮತ್ತಷ್ಟು ಹೆಚ್ಚಾಗಲಿದೆ. ಬೆಳಗಾವಿ, ಧಾರವಾಡ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ.

ಜುಲೈ 24 ಮತ್ತು 25: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ, ಧಾರವಾಡ, ಬೀದರ್, ಕಲಬುರಗಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ದಾವಣಗೆರೆ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ.

Tags:    

Similar News