ರಾಜ್ಯದಲ್ಲಿ ವರುಣಾರ್ಭಟ: ಕರಾವಳಿಗೆ ರೆಡ್ ಅಲರ್ಟ್, ಮಲೆನಾಡಿಗೆ ಆರೆಂಜ್ ಅಲರ್ಟ್, ಶಾಲಾ-ಕಾಲೇಜುಗಳಿಗೆ ರಜೆ
ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ.;
ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ಕರಾವಳಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಮತ್ತು ಮಲೆನಾಡು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ.
ಹವಾಮಾನ ಇಲಾಖೆಯ ವರದಿ ಪ್ರಕಾರ, ರಾಜ್ಯದ ಮೂರು ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡದಲ್ಲಿ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ.
ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಆರೆಂಜ್ ಅಲರ್ಟ್ ನೀಡಲಾಗಿದೆ. ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಜೊತೆಗೆ ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿರುವುದರಿಂದ, ಮೀನುಗಾರರಿಗೆ ಮುಂದಿನ ಸೂಚನೆ ಬರುವವರೆಗೂ ಸಮುದ್ರಕ್ಕೆ ಇಳಿಯದಂತೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಲಾಗಿದೆ.
ಇತರೆ ಜಿಲ್ಲೆಗಳಲ್ಲಿಯೂ ಮಳೆ
ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬಾಗಲಕೋಟೆ, ವಿಜಯಪುರ, ಗದಗ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ, ರಾಮನಗರ, ಕೋಲಾರ, ಮತ್ತು ತುಮಕೂರು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ (64.5 ರಿಂದ 115.5 ಮಿ.ಮೀ.) ಸಾಧ್ಯತೆಯಿದ್ದು, ಗುಡುಗು, ಮಿಂಚು ಸಹಿತ ಗಾಳಿ ಬೀಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ
ಭಾರೀ ಮಳೆಯ ಹಿನ್ನೆಲೆಯಲ್ಲಿ, ಮುನ್ನೆಚ್ಚರಿಕಾ ಕ್ರಮವಾಗಿ ದಕ್ಷಿಣ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಶಾಲಾ-ಕಾಲೇಜುಗಳಿಗೆ ಶುಕ್ರವಾರ (ಜುಲೈ 25) ರಜೆ ಘೋಷಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು, ಮೂಡಬಿದಿರೆ, ಮುಲ್ಕಿ ಸೇರಿದಂತೆ ಹಲವು ತಾಲೂಕುಗಳಲ್ಲಿ ರಜೆ ಘೋಷಿಸಿ ಜಿಲ್ಲಾಡಳಿತಗಳು ಆದೇಶ ಹೊರಡಿಸಿವೆ.