ಕೇತಗಾನಹಳ್ಳಿ ಪ್ರಕರಣ | ಎಚ್‌ಡಿಕೆಗೆ ಹೈಕೋರ್ಟ್‌ ಶಾಕ್‌; ತಡೆಯಾಜ್ಞೆ ತೆರವು, ಎಸ್‌ಐಟಿ ತನಿಖೆಗೆ ಗ್ನೀನ್‌ ಸಿಗ್ನಲ್‌

ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡಿ ಮುಖ್ಯ ನ್ಯಾಯಮೂರ್ತಿ ವಿಭು ಜಬ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಆದೇಶಿಸಿದೆ.;

Update: 2025-09-09 06:25 GMT

ರಾಮನಗರ ಜಿಲ್ಲೆ ಬಿಡದಿ ಸಮೀಪದ ಕೇತಗಾನಹಳ್ಳಿ ಗ್ರಾಮದಲ್ಲಿ ಸರ್ಕಾರಿ ಜಮೀನು ಒತ್ತುವರಿ ಪ್ರಕರಣದಲ್ಲಿ ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಹೈಕೋರ್ಟ್ ದೊಡ್ಡ ಶಾಕ್‌ ನೀಡಿದೆ.

ಹೈಕೋರ್ಟ್ ಏಕಸದಸ್ಯ ಪೀಠದ ಮಧ್ಯಂತರ ಆದೇಶಕ್ಕೆ ತಡೆಯಾಜ್ಞೆ ನೀಡಿ ಮುಖ್ಯ ನ್ಯಾಯಮೂರ್ತಿ ವಿಭು ಜಬ್ರು ಹಾಗೂ ನ್ಯಾಯಮೂರ್ತಿ ಸಿ.ಎಂ. ಜೋಶಿ ನೇತೃತ್ವದ ವಿಭಾಗೀಯ ಪೀಠ ಮಂಗಳವಾರ ಆದೇಶಿಸಿದೆ. ಆ ಮೂಲಕ ರಾಜ್ಯ ಸರ್ಕಾರದ ಎಸ್‌ಐಟಿ ತನಿಖೆ ಎದುರಾಗಿದ್ದ ಅಡ್ಡಿ ನಿವಾರಣೆಯಾದಂತಾಗಿದೆ.

ರಾಮನಗರ ಜಿಲ್ಲೆಯ ಬಿಡದಿ ಹೋಬಳಿಯ ಕೇತಗಾನಹಳ್ಳಿಯ ಸರ್ವೇ ನಂ. 8, 9, 10, 16, 17 ಮತ್ತು 79ರಲ್ಲಿ 14 ಎಕರೆ ಸರ್ಕಾರಿ ಜಮೀನು ಒತ್ತುವರಿ ಆರೋಪದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು.

ಕುಮಾರಸ್ವಾಮಿ ಮತ್ತು ಅವರ ಸಂಬಂಧಿಕರ ವಿರುದ್ಧ ತನಿಖೆಗೆ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ಏಕಸದಸ್ಯ ಪೀಠ ತಡೆಯಾಜ್ಞೆ ನೀಡಿ ಮಧ್ಯಂತರ ಆದೇಶ ನೀಡಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿತ್ತು.

ವಾದ-ವಿವಾದ ಏನು?

ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅವರು, ಸರ್ಕಾರಿ ಜಮೀನುಗಳ ರಕ್ಷಣೆಗಾಗಿ ಎಸ್‌ಐಟಿ ತನಿಖೆ ಅಗತ್ಯವಾಗಿದೆ ಎಂದು ಪೀಠದ ಗಮನ ಸೆಳೆದು, ತಡೆಯಾಜ್ಞೆ ತೆರವಿಗೆ ಮನವಿ ಮಾಡಿದರು.

ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕುಮಾರಸ್ವಾಮಿ ಪರ ವಕೀಲ ಎ.ವಿ. ನಿಶಾಂತ್ ಅವರು, “ಸುಪ್ರೀಂಕೋರ್ಟ್ ಈಗಾಗಲೇ ಕೇತಗಾನಹಳ್ಳಿ ಪ್ರಕರಣಕ್ಕೆ ಸಂಬಂಧಿಸಿದ ವಿಚಾರಣೆ ಕೈಗೆತ್ತಿಕೊಂಡಿದೆ. ಅಲ್ಲದೇ ಕರ್ನಾಟಕ ಭೂ ಕಂದಾಯ ಕಾಯ್ದೆಯಡಿ ಎಸ್ಐಟಿ ರಚನೆಗೆ ಅವಕಾಶವಿಲ್ಲ. ಪ್ರಕರಣದಲ್ಲಿ ಕುಮಾರಸ್ವಾಮಿ ಸಂಬಂಧಿಕರ ವಿರುದ್ಧ ಆರೋಪವಿದೆ. ಆದರೆ, ಕುಮಾರಸ್ವಾಮಿ ನೇರ ಪಕ್ಷಕಾರರಲ್ಲ,” ಎಂದು ವಾದಿಸಿದರು.

ವಾದ ಪ್ರತಿವಾದ ಆಲಿಸಿದ ನ್ಯಾಯಪೀಠವು ಕುಮಾರಸ್ವಾಮಿ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆಯನ್ನು ನ.26ಕ್ಕೆ ಮುಂದೂಡಿತು. ಅಲ್ಲದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗತ್ಯ ದಾಖಲೆ ಹಾಜರುಪಡಿಸುವಂತೆ ಸರ್ಕಾರಕ್ಕೆ ಕಾಲಾವಕಾಶ ನೀಡಿತು. ತಡೆಯಾಜ್ಞೆ ತೆರವಾದ ಹಿನ್ನೆಲೆಯಲ್ಲಿ ಇದೀಗ ಎಸ್ಐಟಿ ತನಿಖೆ ಮರು ಆರಂಭವಾಗಲಿದೆ.

ಪ್ರಕರಣದ ಹಿನ್ನೆಲೆ ಏನು?

ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಮತ್ತು ಸಂಬಂಧಿ ಡಿ.ಸಿ.ತಮ್ಮಣ್ಣ ಮತ್ತಿತರರು ಕೇತಗಾನಹಳ್ಳಿಯಲ್ಲಿ14 ಎಕರೆ ಭೂಮಿ ಒತ್ತುವರಿ ಮಾಡಿದ ಆರೋಪದ ಮೇಲೆ ಸಮಾಜ ಪರಿವರ್ತನಾ ಸಮುದಾಯದ ಎಸ್‌.ಆರ್.‌ ಹಿರೇಮಠ್‌ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಸಂಬಂಧ ತನಿಖೆ ನಡೆಸಿದ್ದ ಲೋಕಾಯುಕ್ತರು ಸರ್ಕಾರಕ್ಕೆ ವರದಿ ಸಲ್ಲಿಸಿದ್ದರು. ವರದಿ ಜಾರಿಗೊಳಿಸುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಅದನ್ನು ಸರ್ಕಾರ ಪಾಲನೆ ಮಾಡಿಲ್ಲ ಎಂದು ಆರೋಪಿಸಿ ಮತ್ತೆ ಎಸ್.ಆರ್.ಹಿರೇಮಠ್ ಅವರು ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ಪರಿಶೀಲಿಸಿದ್ದ ಹೈಕೋರ್ಟ್ ವಿಭಾಗೀಯ ಪೀಠ, ಭೂಮಿ ಒತ್ತುವರಿ ತೆರವಿಗೆ ಕ್ರಮ ಕೈಗೊಳ್ಳದ ಅಧಿಕಾರಿಗಳನ್ನು ಜೈಲಿಗೆ ಕಳುಹಿಸುವುದಾಗಿ ಎಚ್ಚರಿಕೆ ನೀಡಿತ್ತು. ಆ ನಂತರ ಜಮೀನಿನ ಸರ್ವೆ ಕಾರ್ಯ ನಡೆಸಿದ ಸ್ಥಳೀಯ ತಹಶೀಲ್ದಾರ್ ಅವರು, ಕುಮಾರಸ್ವಾಮಿ ಹಾಗೂ ಮತ್ತಿತರರಿಗೆ ನೋಟಿಸ್ ಜಾರಿಗೊಳಿಸಿದ್ದರು. ನೋಟಿಸ್ ಪ್ರಶ್ನಿಸಿ ಕುಮಾರಸ್ವಾಮಿ ಅವರು ಕೋರ್ಟ್ ಮೆಟ್ಟಿಲೇರಿದ್ದರು.

ಈ ಬೆಳವಣಿಗೆಗಳ ಬೆನ್ನಲ್ಲೇ ಸರ್ಕಾರಿ ಭೂಮಿ ಒತ್ತುವರಿ ತೆರವಿಗೆ ಕ್ರಮ ಜರುಗಿಸಲು ರಾಜ್ಯ ಸರ್ಕಾರ ಹಿರಿಯ ಐಎಎಸ್ ಅಧಿಕಾರಿ ಅಮ್ಲಾನ್ ಆದಿತ್ಯ ಬಿಸ್ವಾಸ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ (ಎಸ್ಐಟಿ) ರಚಿಸಿತ್ತು. ಅದನ್ನು ಪ್ರಶ್ನಿಸಿ ಎಚ್ಡಿಕೆ ಮತ್ತಿತರರು ಏಕಸದಸ್ಯ ಪೀಠದ ಮುಂದೆ ಅರ್ಜಿ ಸಲ್ಲಿಸಿದ್ದಾಗ, ನ್ಯಾಯಾಲಯ ಎಸ್ಐಟಿ ರಚನೆ ಆದೇಶಕ್ಕೆ ತಡೆ ನೀಡಿತ್ತು.

Tags:    

Similar News