ಬೋರ್ಡ್ ಪರೀಕ್ಷೆ: ವಿಸ್ತೃತ ಪೀಠಕ್ಕೆ ಪ್ರಕರಣ ವರ್ಗಾಯಿಸಲು ಹೈಕೋರ್ಟ್ ನಕಾರ

ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಕುರಿತು ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಕೋರಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.;

Update: 2024-03-15 07:58 GMT

ಬೆಂಗಳೂರು: 5,8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಕುರಿತ ಮೇಲ್ಮನವಿ ಅರ್ಜಿಯ ವಿಚಾರಣೆಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕೆಂದು ಕೋರಿದ್ದ ರಾಜ್ಯ ಸರ್ಕಾರದ ಅರ್ಜಿಯನ್ನು ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ಅನುದಾನ ರಹಿತ ಶಾಲೆಗಳ ಒಕ್ಕೂಟದ ವಕೀಲರ ಮನವಿಯನ್ನು ಆಲಿಸಿದ ನ್ಯಾಯಮೂರ್ತಿ ಕೆ ಸೋಮಶೇಖರ್‌ ನೇತೃತ್ವದ ವಿಭಾಗೀಯ ಪೀಠವು, “ಈ ಮೇಲ್ಮನವಿಯನ್ನು ವಿಚಾರಣೆ ನಡೆಸಿ ಶೀಘ್ರ ನಿರ್ಧಾರ ಪ್ರಕಟಿಸುವಂತೆ ಸುಪ್ರೀಂ ಕೋರ್ಟ್‌ ನಿರ್ದೇಶಿಸಿದೆ. ಹಾಗಾಗಿ, ಮೇಲ್ಮನವಿಯನ್ನು ವಿಸ್ಕೃತ ಪೀಠಕ್ಕೆ ವರ್ಗಾಯಿಸಲು ಸಾಧ್ಯವಿಲ್ಲ” ಎಂದು ಹೇಳಿದರು.

ರಾಜ್ಯ ಪಠ್ಯಕ್ರಮ ಅಳವಡಿಸಿಕೊಂಡಿರುವ 5, 8 ಮತ್ತು 9ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆಗಳನ್ನು ನಡೆಸುವ ಕುರಿತು ರಾಜ್ಯ ಸರಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ್ದ ಏಕಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿಯನ್ನು ನ್ಯಾಯಪೀಠವು ರದ್ದುಗೊಳಿಸಿದೆ.

“ಸರ್ಕಾರ ಹೊರಡಿಸಿರುವ ಸುತ್ತೋಲೆಯಲ್ಲಿ ದೊಡ್ಡ ಮಟ್ಟದ ಸಾರ್ವಜನಿಕ ಹಿತಾಸಕ್ತಿ ಅಡಗಿದೆ. ಆದ್ದರಿಂದ ಅರ್ಜಿಯನ್ನು ವಿಸ್ತೃತ ಪೀಠಕ್ಕೆ ವರ್ಗಾವಣೆ ಮಾಡಬೇಕು” ಎಂದು ಅರ್ಜಿದಾರರು ಮನವಿ ಮಾಡಿದ್ದರು.

ಬೋರ್ಡ್ ಮಟ್ಟದ ಪರೀಕ್ಷೆಗಳನ್ನು ನಡೆಸಲು ಅವಕಾಶ ನೀಡಬೇಕು ಮತ್ತು ಅವಕಾಶ ನೀಡಬಾರದು ಎಂದು ಕೋರಿ ಸಲ್ಲಿಸಲಾದ ಎರಡು ಪ್ರತ್ಯೇಕ ಅರ್ಜಿಗಳ ವಿಚಾರಣೆ ಇನ್ನಷ್ಟೇ ನಡೆಯಬೇಕಿದೆ.

Tags:    

Similar News