ಬಿಜೆಪಿ ವಕ್ಫ್ ವಿಷಯವನ್ನು ಧಾರ್ಮಿಕ ಸಾಮರಸ್ಯ ಕದಡಲು ಬಳಸುತ್ತಿದೆ: ಪರಮೇಶ್ವರ್‌ ಕಿಡಿ

ಪ್ರತಿಪಕ್ಷ ಬಿಜೆಪಿ ವಕ್ಫ್ ವಿಷಯವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ ಗೃಹ ಸಚಿವ ಜಿ ಪರಮೇಶ್ವರ ಅವರು ರಾಜ್ಯದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಎಚ್ಚರಿಕೆ ನೀಡಿದ್ದಾರೆ.

Update: 2024-11-17 12:00 GMT
ಗೃಹ ಸಚಿವ ಜಿ ಪರಮೇಶ್ವರ
Click the Play button to listen to article

ಪ್ರತಿಪಕ್ಷ ಬಿಜೆಪಿ ವಕ್ಫ್ ವಿಷಯವನ್ನು ರಾಜಕೀಯ ಅಸ್ತ್ರವಾಗಿ ಬಳಸುತ್ತಿದೆ ಎಂದು ಆರೋಪಿಸಿರುವ  ಗೃಹ ಸಚಿವ ಜಿ ಪರಮೇಶ್ವರ ಅವರು ರಾಜ್ಯದಲ್ಲಿ ಶಾಂತಿ ಕದಡುವ ಯಾವುದೇ ಪ್ರಯತ್ನಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಭಾನುವಾರ ಎಚ್ಚರಿಕೆ ನೀಡಿದ್ದಾರೆ.

ಕಾಂಗ್ರೆಸ್‌ ಸರ್ಕಾರದ ವಿರುದ್ದ ಬಿಜೆಪಿ ತೀವ್ರ ಹೋರಾಟ ನಡೆಸಲು ಮುಂದಾಗಿದ್ದು, ಬಿಜೆಪಿ ರಾಜ್ಯಾಧ್ಯಕ್ಷ  ವಿಜಯೇಂದ್ರ ನೇತೃತ್ವದಲ್ಲಿ ಎರಡು ಹಂತದ ಹೋರಾಟಕ್ಕೆ ನಿರ್ಧರಿಸಲಾಗಿದೆ. ಈ ಮಧ್ಯೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ್‌ ಬಣ ಪ್ರತ್ಯೇಕವಾಗಿ ನ.25ರಿಂದ ಜನಜಾಗೃತಿ ಅಭಿಯಾನಕ್ಕೆ ನಿರ್ಧರಿಸಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ''ಶಾಂತಿ ಭಂಗ ಮಾಡೋಕೆ ಬಿಜೆಪಿ ಪ್ರಯತ್ನಪಟ್ಟರೆ ಅವರ ವಿರುದ್ಧ ಮುಲಾಜಿಲ್ಲದೆ ಸೂಕ್ತ ಕಠಿಣ ಕ್ರಮ ಜರುಗಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಿಜೆಪಿಯವರು ವಕ್ಫ್ ವಿಷಯವನ್ನುರಾಜಕೀಯ ಅಸ್ತ್ರವಾಗಿ ಬಳಸುತ್ತಿದ್ದಾರೆ. ಕೋಮು ಸಾಮರಸ್ಯ ಕದಡಲು ವಿವಿಧ ಅಭಿಯಾನಗಳನ್ನು ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು. 

ರಾಜ್ಯದಲ್ಲಿ ಕಾನೂನು ಅವ್ಯವಸ್ಥೆ ಸೃಷ್ಟಿಸಲು ಮತ್ತು ರಾಷ್ಟ್ರಪತಿ ಆಳ್ವಿಕೆಗೆ ದಾರಿ ಮಾಡಿಕೊಡಲು ಬಿಜೆಪಿ ಪ್ರಯತ್ನಿಸುತ್ತದೆ ಎಂಬ ಭಯ ಆಡಳಿತಾರೂಢ ಕಾಂಗ್ರೆಸ್‌ಗೆ ಇದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, “ಅದು ಸಾಧ್ಯವಿಲ್ಲ. ಪೊಲೀಸ್ ಇಲಾಖೆ ರಾಜ್ಯದಲ್ಲಿ ಶಾಂತಿ ಕಾಪಾಡುತ್ತಿದೆ. ಕೆಲವು ಘಟನೆಗಳು ನಡೆದಿರಬಹುದು. ಆದರೆ ಒಟ್ಟಾರೆಯಾಗಿ ನಾವು ಶಾಂತಿಯನ್ನು ಕಾಪಾಡುವಲ್ಲಿ ಯಶಸ್ವಿಯಾಗಿದ್ದೇವೆ. ರಾಜ್ಯದ ಕೆಲವು ಭಾಗಗಳಲ್ಲಿ ರೈತರು ಮತ್ತು ಇತರರು ತಮ್ಮ ಜಮೀನುಗಳನ್ನು ʼವಕ್ಫ್ ಆಸ್ತಿʼ ಎಂದು ಗುರುತಿಸಲಾಗಿದೆ ಎಂಬುದಾಗಿ ಆರೋಪಿಸಿದ್ದಾರೆ. ಗಲಾಟೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ನೀಡಿರುವ ಎಲ್ಲಾ ನೋಟಿಸ್‌ಗಳನ್ನು ಹಿಂಪಡೆಯುವಂತೆ  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಭೂ ದಾಖಲೆಗಳಲ್ಲಿ ಅನಧಿಕೃತ ತಿದ್ದುಪಡಿಗಳನ್ನು ಸಹ ರದ್ದುಗೊಳಿಸಲಾಗುವುದು ಎಂದು ಅವರು ತಿಳಿಸಿದರು. 

ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಹೊರಿಸಿರುವ ಶೇಕಡಾ 40ರಷ್ಟು ಕಮಿಷನ್ ಆರೋಪ ಸಂಪೂರ್ಣ ಸುಳ್ಳು ಎಂದು ಲೋಕಾಯುಕ್ತ ತನಿಖೆಯಿಂದ ಸಾಬೀತಾಗಿದೆ ಎಂಬ ಬಿಜೆಪಿ ಹೇಳಿಕೆಗೆ ಪ್ರತಿಕ್ರಿಯಿಸಿದ ಪರಮೇಶ್ವರ, ಅಂತಹ ಆಧಾರದ ಬಗ್ಗೆ ನನಗೆ ತಿಳಿದಿಲ್ಲ ಎಂದು ಹೇಳಿದರು.

ಬಿಜೆಪಿ ವಿರುದ್ಧ ವಾಗ್ದಾಳಿ ಮುಂದುವರಿಸಿದ ಸಚಿವರು, ಬಿಜೆಪಿ ವಿರುದ್ಧ 40 ಪರ್ಸೆಂಟ್ ಕಮಿಷನ್ ಪ್ರಚಾರದಿಂದಲೇ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂದು ಹೇಳುವುದು ತಪ್ಪು, ಗೆಲುವಿಗೆ ಗ್ಯಾರಂಟಿ ಯೋಜನೆಗಳೂ ಕಾರಣ  ಎಂದರು,

“ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ನಿರಂತರವಾಗಿ 40 ಪರ್ಸೆಂಟ್ ಕಮಿಷನ್ ಆರೋಪ ಹೊರಿಸುವ ಮೂಲಕ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ ಎಂಬುದು ಬಿಜೆಪಿಯ ಹೇಳಿಕೆಯಾಗಿರಬಹುದು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಭ್ರಷ್ಟಾಚಾರ ಮತ್ತು 40 ಪರ್ಸೆಂಟ್ ಕಮಿಷನ್ ವಸೂಲಿ ಮಾಡಲಾಗುತ್ತಿದೆ ಎಂದು ಆರೋಪಿಸಿ ಆಗಿನ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಪ್ರಧಾನಿಗೆ ಪತ್ರ ಬರೆದಿದ್ದರು. ಅದನ್ನು ನಾವು ಚುನಾವಣೆಯಲ್ಲಿ ಬಳಸಿಕೊಂಡಿದ್ದೆವೇ ಹೊರತು, ಆರೋಪ ಮಾಡುತ್ತಲೇ ಅಧಿಕಾರಕ್ಕೆ ಬಂದಿಲ್ಲ ಎಂದು ನುಡಿದರು. ನಮ್ಮ ಹೋರಾಟ ಹಾಗೂ ಜನಪ್ರಿಯ ಯೋಜನೆ ಘೋಷಣೆಯಿಂದ ಸರ್ಕಾರ ಅಧಿಕಾರಕ್ಕೆ ಬಂದಿದೆ. ಯಶಸ್ವಿಯಾಗಿ ಆಡಳಿತ ನೀಡುತ್ತಿದ್ದೇವೆ ಎಂದು ಅವರು ತಿಳಿಸಿದರು. 

Tags:    

Similar News