Honey Trap | ಕೆ.ಎನ್.ರಾಜಣ್ಣ ಮೇಲೆ ಹನಿಟ್ರ್ಯಾಪ್ ಯತ್ನ: ಪುರಾವೆ ಸಿಗದೇ ತನಿಖೆ ಮುಕ್ತಾಯಗೊಳಿಸಿದ ಸಿಐಡಿ
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದರು.;
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರನ್ನು ಹನಿಟ್ರ್ಯಾಪ್ ಸಿಲುಕಿಸಲು ಯತ್ನಿಸಿದ ಪ್ರಕರಣದಲ್ಲಿ ಯಾವುದೇ ಪುರಾವೆ ಇಲ್ಲ ಎಂದು ಸಿಐಡಿ ಅಧಿಕಾರಿಗಳ ತನಿಖೆಯಿಂದ ಬಹಿರಂಗವಾಗಿದ್ದು, ಪ್ರಕರಣ ಮುಕ್ತಾಯಗೊಳಿಸಿ ರಾಜ್ಯ ಸರ್ಕಾರಕ್ಕೆ ವರದಿ ಸಲ್ಲಿಸಲಾಗಿದೆ.
ಹನಿಟ್ರಾಪ್ ಆರೋಪ ಸಂಬಂಧಿಸಿದಂತೆ ತನಿಖೆ ನಡೆಸಲು ರಾಜ್ಯ ಸರ್ಕಾರ ಸಿಐಡಿ ನೇಮಕ ಮಾಡಿತ್ತು. ವಿಚಾರಣೆ ನಡೆಸಿದ್ದ ಸಿಐಡಿ ಅಧಿಕಾರಿಗಳು, ರಾಜ್ಯ ಪೊಲೀಸ್ ಮಹಾ ನಿದೇರ್ಶಕರಿಗೆ ಅಂತಿಮ ವರದಿ ಸಲ್ಲಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಸಚಿವ ಕೆ.ಎನ್. ರಾಜಣ್ಣ ಆರೋಪಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳು ದೊರೆತಿಲ್ಲ. ಆರೋಪ ಮಾಡಿದ ರಾಜಣ್ಣ ಅವರು ಸಹಾ ಯಾವುದೇ ಸಾಕ್ಷ್ಯ ನೀಡಿಲ್ಲ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಇನ್ನು ಹನಿಟ್ರಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಣ್ಣ ಅವರ ಭದ್ರತಾ ಸಿಬ್ಬಂದಿ ಹಾಗೂ ಆಪ್ತ ಸಹಾಯಕರನ್ನು ವಿಚಾರಣೆ ನಡೆಸಲಾಗಿತ್ತು. ಅಲ್ಲಿಯೂ ಘಟನೆಯ ಬಗ್ಗೆ ಮಾಹಿತಿ ಹಾಗೂ ಸಾಕ್ಷ್ಯಗಳು ಲಭ್ಯವಾಗದ ಕಾರಣ ಪ್ರಕರಣದ ಮುಕ್ತಾಯ ವರದಿ ಸಲ್ಲಿಸಲಾಗಿದೆ ಎಂದು ಸಿಐಡಿ ಅಧಿಕಾರಿಗಳು ವರದಿಯಲ್ಲಿ ತಿಳಿಸಿದ್ದಾರೆ.
ಸಹಕಾರ ಸಚಿವ ಕೆ.ಎನ್.ರಾಜಣ್ಣ ಅವರು ಗೃಹ ಸಚಿವ ಡಾ. ಜಿ. ಪರಮೇಶ್ವರ ಅವರಿಗೆ ನೀಡಿದ್ದ ದೂರಿನ ಆಧಾರದ ಮೇಲೆ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ಅವರು ಸಿಐಡಿ ತನಿಖೆಗೆ ಆದೇಶಿಸಿದ್ದರು.
ಮಾರ್ಚ್ 20 ರಂದು ವಿಧಾನಸಭೆ ಅಧಿವೇಶನದಲ್ಲಿ ತಮ್ಮ ಮೇಲೆ ಹನಿ ಟ್ರ್ಯಾಪ್ ಯತ್ನ ನಡೆದಿತ್ತು . ಜತೆಗೆ ಜೊತೆಗೆ 48 ಕ್ಕೂ ಹೆಚ್ಚು ರಾಜಕಾರಣಿಗಳ ಮೇಲೆ ಹನಿಟ್ರ್ಯಾಪ್ ನಡೆದಿದೆ ಎಂದು ಕೆ.ಎನ್. ರಾಜಣ್ಣ ಅವರು ನೀಡಿದ್ದ ಹೇಳಿಕೆ ರಾಜ್ಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿತ್ತು.
ನೀಲಿ ಬಣ್ಣದ ಜಿನ್ಸ್ ಪ್ಯಾಂಟ್ ಧರಿಸಿದ್ದ ಯುವತಿ ಹಾಗೂ ಆಕೆಯ ಸಹಚರರು ತಮ್ಮನ್ನು ಹನಿಟ್ರ್ಯಾಪ್ ಬಲೆಗೆ ಬೀಳಿಸಲು ಯತ್ನಿಸಿದ್ದರು. ಅನುಮಾನ ಬಂದು ಅವರನ್ನು ಹಿಡಿದು ವಿಚಾರಿಸಿದಾಗ ನಮ್ಮ ಪಕ್ಷದ ನಾಯಕರೇ ಇದನ್ನು ಮಾಡಿಸಿದ್ದ ಸಂಗತಿ ತಿಳಿಯಿತು. ಹೈಕಮಾಂಡ್ ನಾಯಕರನ್ನೂ ಹನಿಟ್ರ್ಯಾಪ್ ಬಲೆಗೆ ಕೆಡವಲಾಗಿದೆ ಎಂಬ ಮಾಹಿತಿ ದೊರೆಯಿತು ಎಂದು ಕೆಎನ್.ರಾಜಣ್ಣ ಹೇಳಿದ್ದರು. ಅಲ್ಲದೇ ಪ್ರಕರಣ ಸಂಬಂಧ ಮೂರು ಪುಟಗಳ ದೂರನ್ನು ಗೃಹ ಸಚಿವ ಜಿ. ಪರಮೇಶ್ವರ ಅವರಿಗೆ ಸಲ್ಲಿಸಿದ್ದರು. ಈಗ ಸಾಕ್ಷ್ಯ ನೀಡದಿರುವುದು ಟೀಕೆಗೆ ಗುರಿಯಾಗಿದೆ.