Honey Trap | ಸುಪ್ರೀಂಕೋರ್ಟ್‌ ಮೆಟ್ಟಿಲೇರಿದ ಹನಿಟ್ರ್ಯಾಪ್‌ ಪ್ರಕರಣ: ಪಿಐಎಲ್‌ ಸಲ್ಲಿಕೆ

ಪ್ರಕರಣದಲ್ಲಿ ನ್ಯಾಯಮೂರ್ತಿಯೊಬ್ಬರ ಹೆಸರೂ ಕೇಳಿಬಂದಿರುವುದರಿಂದ ಪ್ರಕರಣವನ್ನು ತುರ್ತಾಗಿ ಪರಿಗಣಿಸಿ ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.;

Update: 2025-03-24 08:00 GMT

ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಸಚಿವರು ಮತ್ತು ಶಾಸಕರ ಹನಿಟ್ರ್ಯಾಪ್ ಪ್ರಕರಣ ಇದೀಗ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಎದುರು ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕೋರಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ(ಪಿಐಎಲ್) ಸಲ್ಲಿಕೆಯಾಗಿದೆ. ಪ್ರಕರಣದಲ್ಲಿ ನ್ಯಾಯಮೂರ್ತಿಯೊಬ್ಬರ ಹೆಸರೂ ಕೇಳಿಬಂದಿರುವುದರಿಂದ ಪ್ರಕರಣವನ್ನು ತುರ್ತಾಗಿ ಪರಿಗಣಿಸಿ ವಿಚಾರಣೆ ನಡೆಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ. ಅರ್ಜಿಯನ್ನು ಸ್ವೀಕರಿಸಿರುವ ಸುಪ್ರೀಂಕೋರ್ಟ್ ಅರ್ಜಿಯನ್ನು ವಿಚಾರಣೆಯನ್ನು ಕೈಗೆತ್ತಿಕೊಳ್ಳುವುದಾಗಿಯೂ ಹೇಳಿದೆ.

ರಾಜ್ಯದ ಆಡಳಿತರೂಢ ಕಾಂಗ್ರೆಸ್ನ ಹಿರಿಯ ಸಚಿವರು, ಶಾಸಕರು ಸೇರಿದಂತೆ ಆಡಳಿತ ಪಕ್ಷ ಮತ್ತು ಪ್ರತಿಪಕ್ಷಗಳ ಒಟ್ಟು 48 ಶಾಸಕರು ಮತ್ತು ಸಚಿವರನ್ನು ಹನಿಟ್ರ್ಯಾಪ್ ಮಾಡಲಾಗಿದೆ ಎಂದು ಕಳೆದ ವಾರ ಹಿರಿಯ ಸಚಿವ ಕೆ ಎನ್ ರಾಜಣ್ಣ ಅವರು ವಿಧಾನಸಭೆಯಲ್ಲಿ ಅಧಿಕೃತವಾಗಿ ಆರೋಪಿಸಿದ್ದರು. ಪ್ರಕರಣ ಉಭಯ ಸದನಗಳಲ್ಲಿ ಕೋಲಾಹಲಕ್ಕೆ ಕಾರಣವಾಗಿತ್ತು. ಗೃಹ ಸಚಿವ ಡಾ ಜಿ ಪರಮೇಶ್ವರ್ ಅವರು ಈ ಕುರಿತು ಸಚಿವರು ದೂರು ನೀಡಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಸದನದಲ್ಲೇ ಹೇಳಿದ್ದರು. ಅದಾದ ಬಳಿಕ ಸಿಎಂ ಸಿದ್ದರಾಮಯ್ಯ ಅವರು ಸದನದಲ್ಲಿ ಪ್ರತಿಕ್ರಿಯಿಸಿ, ಪ್ರಕರಣದಲ್ಲಿ ಯಾರನ್ನೂ ರಕ್ಷಿಸುವ ಪ್ರಶ್ನೆಯೇ ಇಲ್ಲ, ಆ ಬಗ್ಗೆ ವಿಚಾರಣೆಗೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು ಎಂದು ಘೋಷಿಸಿದ್ದರು.

ಈ ನಡುವೆ ಶನಿವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿದ್ದ ಸಚಿವ ರಾಜಣ್ಣ ಅವರ ಪುತ್ರ ರಾಜೇಂದ್ರ ಅವರು, ಪ್ರಕರಣಕ್ಕೆ ಸಂಬಂಧಿಸಿದ ಸಾಕ್ಷ್ಯಾಧಾರಗಳನ್ನೊಳಗೊಂಡ ಮಾಹಿತಿಯನ್ನು ನೀಡಿದ್ದರು. ಬಳಿಕ ಸಿಎಂ ಸೂಚನೆ ಮೇರೆಗೆ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಇನ್ನೆರಡು ದಿನಗಳಲ್ಲಿ ದೂರು ಸಲ್ಲಿಸುವುದಾಗಿಯೂ ಅವರು ಹೇಳಿದ್ದರು.

ಆದರೆ, ಈ ನಡುವೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ಬೆಳಿಗ್ಗೆ ಮಹತ್ವದ ಬೆಳವಣಿಗೆಯಾಗಿದ್ದು, ಸುಪ್ರೀಂಕೋರ್ಟಿಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಕೆಯಾಗಿದೆ. ಪ್ರಮುಖವಾಗಿ ಹನಿಟ್ರ್ಯಾಪ್ ಗೆ ಒಳಗಾಗಿರುವ 48 ಮಂದಿಯಲ್ಲಿ ರಾಜ್ಯ ಹೈಕೋರ್ಟಿನ ನ್ಯಾಯಮೂರ್ತಿಗಳೊಬ್ಬರೂ ಇದ್ದಾರೆ ಎಂಬ ಸಚಿವರ ಹೇಳಿಕೆಯ ಹಿನ್ನೆಲೆಯಲ್ಲಿ ಈ ಪಿಐಎಲ್ ಸಲ್ಲಿಕೆಯಾಗಿದ್ದು, ಸುಪ್ರೀಂಕೋರ್ಟ್ ಪ್ರಕರಣವನ್ನು ವಿಚಾರಣೆಗೆ ಕೈಗೆತ್ತಿಕೊಳ್ಳುವುದೇ? ಎಂಬ ವಿಷಯ ಈಗ ಕುತೂಹಲಕ್ಕೆ ಕಾರಣವಾಗಿದೆ.

Tags:    

Similar News