ಪ್ರಜ್ವಲ್ ಪೆನ್‌ಡ್ರೈವ್ ಪ್ರಕರಣ | ಹುಬ್ಬಳ್ಳಿಯಲ್ಲಿ ಜೆಡಿಎಸ್- ಕಾಂಗ್ರೆಸ್ ಕಾರ್ಯಕರ್ತರ ಸಂಘರ್ಷ
ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಮಂಗಳವಾರ ಮಧ್ಯಾಹ್ನ ಇಲ್ಲಿನ ಗೋಕುಲ ರಸ್ತೆಯ ಹೋಟೆಲ್ ಒಂದರ ಆವರಣದಲ್ಲಿ ನಡೆದಿದೆ;
ಹುಬ್ಬಳ್ಳಿ: ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದ ಘಟನೆ ಮಂಗಳವಾರ ಮಧ್ಯಾಹ್ನ ಇಲ್ಲಿನ ಗೋಕುಲ ರಸ್ತೆ ಬಳಿಯಿರುವ ಹೋಟೆಲ್ ಒಂದರ ಆವರಣದಲ್ಲಿ ನಡೆದಿದೆ.
ಜೆಡಿಎಸ್ ನಿಂದ ಇಲ್ಲಿನ ಖಾಸಗಿ ಹೊಟೇಲ್ ನಲ್ಲಿ ಉತ್ತರ ಕರ್ನಾಟಕದ 14 ಲೋಕಸಭಾ ಕ್ಷೇತ್ರದ ಪ್ರಮುಖರ ಸಭೆ ಹಾಗೂ ಕೋರ್ ಕಮಿಟಿ ಸಭೆ ಕರೆಯಲಾಗಿತ್ತು.
ಕೋರ್ ಕಮಿಟಿ ಮುಗಿಸಿ ಕುಮಾರಸ್ವಾಮಿ ಹೊರ ಬಂದು ಸಭೆಗೆ ಹೋಗುವ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅನೀಲ ಕುಮಾರ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರಜ್ವಲ್ ರೇವಣ್ಣ ವಿರುದ್ಧ ಘೋಷಣೆ ಕೂಗಿದರು.
ಈ ವೇಳೆ ತೋಳೇರಿಸಿದ ರೀತಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರತ್ತ ಆಗಮಿಸಿದ ಕುಮಾರಸ್ವಾಮಿ ಅವರನ್ನು ಮುಖಂಡರು ತಡೆದಿದ್ದಾರೆ. ನಂತರ ಸಭೆಯಲ್ಲಿದ್ದ ಜೆಡಿಎಸ್ ಮುಖಂಡರು, ಕಾರ್ಯಕರ್ತರು ಹೊರ ಬರುತ್ತಿದ್ದಂತೆಯೇ ಎರಡೂ ಕಡೆಯವರ ನಡುವೆ ತೀವ್ರ ವಾಗ್ವಾದ ನಡೆದಿದೆ.
ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಹರಸಾಹಸ ಪಟ್ಟರು. 'ಗೋ ಬ್ಯಾಕ್ ಕುಮಾರಸ್ವಾಮಿ' ಎಂದು ಕಾಂಗ್ರೆಸ್‌ನವರು ಘೋಷಣೆ ಕೂಗಿದರೆ, ರಾಜ್ಯ ಸರ್ಕಾರದ ವಿರುದ್ಧ ಜೆಡಿಎಸ್ ಮುಖಂಡರು ಫೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಕೊನೆಗೆ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ವಶಕ್ಕೆ ತೆಗೆದುಕೊಂಡ ಪೊಲೀಸರು, ವಾಹನದಲ್ಲಿ ಕರೆದೊಯ್ದರು. ಘಟನೆ ಹಿನ್ನೆಲೆಯಲ್ಲಿ ಹೋಟೆಲ್ ಆವರಣದಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಮಾಡಲಾಗಿದೆ.