ಚುನಾವಣೋತ್ತರ ಸಮೀಕ್ಷೆಗಳ ಮೇಲೆ ನನಗೆ ವಿಶ್ವಾಸವಿಲ್ಲ: ಡಿ ಕೆ ಶಿವಕುಮಾರ್
ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ.;
ಲೋಕಸಭಾ ಚುನಾವಣೆಯ ಮತಗಟ್ಟೆ ಸಮೀಕ್ಷೆಗಳು ರಾಜ್ಯದಲ್ಲಿ ಆಡಳಿತರೂಢ ಕಾಂಗ್ರೆಸ್ ಸ್ಥಾನ ಗಳಿಕೆಯಲ್ಲಿ ಎರಡಂಕಿ ತಲುಪುವುದಿಲ್ಲ ಎಂದು ಭವಿಷ್ಯ ನುಡಿದಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್, "ನನಗೆ ಚುನಾವಣೋತ್ತರ ಸಮೀಕ್ಷೆ ಮೇಲೆ ವಿಶ್ವಾಸವಿಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ" ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು "ಚುನಾವಣೋತ್ತರ ಸಮೀಕ್ಷೆ ನಡೆಸುವವರು ಅಲ್ಪಪ್ರಮಾಣದ ಮಾದರಿಗಳನ್ನು ಸಂಗ್ರಹಿಸಿರುತ್ತಾರೆ. ಆಳವಾದ ಸಮೀಕ್ಷೆ ನಡೆಯುವುದಿಲ್ಲ. ಹೀಗಾಗಿ ಈ ಸಮೀಕ್ಷೆಗಳಿಂದ ನಿಖರ ಮಾಹಿತಿ ಬರುವುದಿಲ್ಲ. ಹೀಗಾಗಿ ನನಗೆ ಎಕ್ಸಿಟ್ ಪೋಲ್ ಮೇಲೆ ವಿಶ್ವಾಸವಿಲ್ಲ" ಎಂದರು.
"ರಾಜ್ಯದಲ್ಲಿ ಕಾಂಗ್ರೆಸ್ 3-4 ಸ್ಥಾನ ಪಡೆಯಲಿದೆ ಎಂದು ಎಕ್ಸಿಟ್ ಪೋಲ್ ಮಾಹಿತಿ ತೋರಿಸುತಿದ್ದಾರೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಎರಡಂಕಿ ಸ್ಥಾನಗಳನ್ನು ಗೆಲ್ಲಲಿದೆ. ದೇಶದ ಅಧಿಕಾರವನ್ನು ಇಂಡಿಯಾ ಮೈತ್ರಿಕೂಟ ಪಡೆಯಲಿದೆ" ಎಂದೂ ಅವರು ಹೇಳಿದ್ದಾರೆ.
ಇನ್ನು ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕೇಂದ್ರದಲ್ಲಿ ಎನ್‌ಡಿಎ ಮತ್ತೊಮ್ಮೆ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಎಂಬ ಸುಳಿವನ್ನು ನೀಡಿದ್ದು, ಕರ್ನಾಟಕದಲ್ಲಿ ಬಿಜೆಪಿ 20ರ ಗಟಿ ದಾಟುವ ಸೂಚನೆ ನೀಡಿದೆ.
ರಾಜ್ಯದಲ್ಲಿ 15-20 ಸ್ಥಾನಗಳನ್ನು ಗೆಲ್ಲುವುದಾಗಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದರು. ಆದರೆ ಸಮೀಕ್ಷೆಗಳು ಕಾಂಗ್ರೆಸ್ ಅನ್ನು ಒಂದಂಕಿಯಲ್ಲೇ ನಿಲ್ಲಿಸಿವೆ. ಆದರೆ ಮತಗಟ್ಟೆ ಸಮೀಕ್ಷೆಗಳ ಲೆಕ್ಕಾಚಾರವನ್ನು ಕಾಂಗ್ರೆಸ್ ಸಾರಾಸಗಟಾಗಿ ತಳ್ಳಿಹಾಕಿದೆ.