ಮತಗಳ್ಳತನ ಆರೋಪ |ರಾಜಾಜಿನಗರದಲ್ಲೂ ಅಕ್ರಮ ನಡೆದಿದೆ ಎಂದ ಸಿಎಂ ಸಿದ್ದರಾಮಯ್ಯ
ಅಕ್ರಮಗಳಿಗೆ ಸಂಬಂಧಿಸಿದಂತೆ ಮಹತ್ವದ ಸಾಕ್ಷ್ಯಗಳು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.;
ಮುಖ್ಯಮಂತ್ರಿ ಸಿದ್ದರಾಮಯ್ಯ
ಲೋಕಸಭೆ ಚುನಾವಣೆ ವೇಳೆ ನಡೆದಿದೆ ಎನ್ನಲಾದ ಮತಗಳ್ಳತನದ ಆರೋಪ ಇದೀಗ ಹೊಸ ಸ್ವರೂಪ ಪಡೆದುಕೊಂಡಿದೆ. ಈ ಹಿಂದೆ ಮಹದೇವಪುರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎಂದು ಹೇಳಲಾಗಿದ್ದ ಅಕ್ರಮ ಈಗ ರಾಜಾಜಿನಗರ ಕ್ಷೇತ್ರಕ್ಕೂ ವಿಸ್ತರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗಂಭೀರ ಆರೋಪ ಮಾಡಿದ್ದಾರೆ.
ಈ ಅಕ್ರಮಗಳಿಗೆ ಸಂಬಂಧಿಸಿದಂತೆ ಮಹತ್ವದ ಸಾಕ್ಷ್ಯಗಳು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಳಿ ಇವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಸಿದ್ದರಾಮಯ್ಯ ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ. ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ಹಿನ್ನಡೆಯಾಗಲು ಜನರ ಅಭಿಪ್ರಾಯ ಕಾರಣವಲ್ಲ, ಬದಲಿಗೆ ಚುನಾವಣಾ ಪ್ರಕ್ರಿಯೆಯ ಅಕ್ರಮಗಳು ಕಾರಣ ಎಂದು ಅವರು ಹೇಳಿದ್ದಾರೆ.
ಆಗಸ್ಟ್ 5ಕ್ಕೆ ಕಾಂಗ್ರೆಸ್ ಬೃಹತ್ ಪ್ರತಿಭಟನೆ
ಮತಗಳ್ಳತನದ ಆರೋಪಗಳನ್ನು ಖಂಡಿಸಿ, ಕಾಂಗ್ರೆಸ್ ಪಕ್ಷವು ಆಗಸ್ಟ್ 5ರಂದು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ. ಈ ಪ್ರತಿಭಟನೆಯ ನೇತೃತ್ವವನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಹಿಸಲಿದ್ದಾರೆ.
ಪ್ರತಿಭಟನೆ ನಂತರ, ಚುನಾವಣಾ ಅಕ್ರಮಗಳಿಗೆ ಸಂಬಂಧಿಸಿದ ಸಾಕ್ಷ್ಯಗಳನ್ನು ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ ಸಲ್ಲಿಸಲು ಕಾಂಗ್ರೆಸ್ ನಾಯಕರು ನಿರ್ಧರಿಸಿದ್ದಾರೆ. ಪ್ರಜಾಪ್ರಭುತ್ವವನ್ನು ಉಳಿಸುವ ಉದ್ದೇಶದಿಂದ ಈ ಹೋರಾಟವನ್ನು ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.