ಇಂದು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಮಂಡಳಿಯ ಮಹತ್ವದ ಸಭೆ

ಹಿಂದುಳಿದ ವರ್ಗಗಳ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ಸೇರಿದಂತೆ ಹಲವು ವಿಚಾರಗಳ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ.;

Update: 2025-07-16 04:27 GMT

ಮುಖ್ಯಮಂತ್ರಿ ಸಿದ್ದರಾಮಯ್ಯ

ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಹಿಂದುಳಿದ ವರ್ಗಗಳ (ಒಬಿಸಿ) ಸಲಹಾ ಮಂಡಳಿಯ ಮಹತ್ವದ ಪರಿಶೀಲನಾ ಸಭೆಯು ಬುಧವಾರ ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಈ ಸಭೆಯಲ್ಲಿ ಮೂರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ನಿರೀಕ್ಷಿಸಲಾಗಿದೆ.

ಹಿಂದುಳಿದ ವರ್ಗಗಳ ಸಮಸ್ಯೆಗಳ ಪರಿಹಾರಕ್ಕಾಗಿ ಹೋರಾಟ ಸೇರಿದಂತೆ ಹಲವು ವಿಚಾರಗಳ ಕುರಿತು ಸಭೆಯಲ್ಲಿ ಮಹತ್ವದ ಚರ್ಚೆ ನಡೆಯಲಿದೆ. ದೇಶಾದ್ಯಂತ ಹಿಂದುಳಿದ ವರ್ಗಗಳನ್ನು ಒಗ್ಗೂಡಿಸಿ ಒಂದೇ ವೇದಿಕೆಗೆ ತಂದು ಅವರ ಸಮಸ್ಯೆಗಳನ್ನು ಪರಿಹರಿಸುವ ಬಗ್ಗೆ ಸಮಾಲೋಚನೆ ನಡೆಸುವ ಸಾಧ್ಯತೆ ಇದೆ. 

ಅಲ್ಲದೆ, ಆಯಾ ರಾಜ್ಯಗಳಲ್ಲಿನ ಹಿಂದುಳಿದ ವರ್ಗಗಳ ವಿಭಿನ್ನ ಪರಿಸ್ಥಿತಿ ಕುರಿತು ಚರ್ಚೆ ನಡೆಯಲಿದೆ. ಪ್ರತಿ ರಾಜ್ಯದಲ್ಲಿ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿಗಳು, ಪರಿಶಿಷ್ಟ ಪಂಗಡಗಳು, ಹಾಗೂ ಮೇಲ್ಜಾತಿಯಲ್ಲಿ ಆರ್ಥಿಕವಾಗಿ ಹಿಂದುಳಿದವರ ಪರಿಸ್ಥಿತಿ ಭಿನ್ನವಾಗಿದೆ. ಉದಾಹರಣೆಗೆ, ಕರ್ನಾಟಕದ ಸಮುದಾಯದ ಸಮಸ್ಯೆಗಳು ಒಂದು ರೀತಿಯಿದ್ದರೆ, ಬಿಹಾರದ ಸಮಸ್ಯೆಗಳು ಮತ್ತೊಂದು ರೀತಿಯಾಗಿವೆ.

ಕರ್ನಾಟಕದಲ್ಲಿ ಒಕ್ಕಲಿಗ, ಲಿಂಗಾಯತ ಸಮುದಾಯದ ಚರ್ಚೆ

ಕೇಂದ್ರದ ಒಬಿಸಿ ಪಟ್ಟಿಯಲ್ಲಿ ಬರಲಿರುವ ಕರ್ನಾಟಕದ ಒಕ್ಕಲಿಗ ಮತ್ತು ಲಿಂಗಾಯತ ಸಮುದಾಯಗಳ ಕುರಿತು ಮಹತ್ವದ ಚರ್ಚೆ ನಡೆಯುವ ಸಾಧ್ಯತೆಯಿದೆ. ಆರ್ಥಿಕವಾಗಿ ಪ್ರಬಲರಾಗಿರುವ ಈ ಸಮುದಾಯಗಳನ್ನು ರಾಜ್ಯದಲ್ಲಿ ಹಿಂದುಳಿದ ವರ್ಗಗಳ ವ್ಯಾಪ್ತಿಯಲ್ಲಿ ಸೇರಿಸಿಕೊಳ್ಳುವುದು ಕಷ್ಟಸಾಧ್ಯ ಎಂಬ ಅಭಿಪ್ರಾಯವಿದೆ. ಹೀಗಾಗಿ, ಪ್ರತಿ ರಾಜ್ಯದ ಸಮಸ್ಯೆಗಳನ್ನು ಅರಿತು, ಅದಕ್ಕೆ ಪರಿಹಾರವನ್ನು ಕಂಡುಕೊಳ್ಳಲು ಏನು ಮಾಡಬಹುದು ಎಂಬ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಲಿದೆ. ಆಯಾ ರಾಜ್ಯಗಳ ಪರಿಸ್ಥಿತಿಗೆ ಅನುಗುಣವಾಗಿ ತೀರ್ಮಾನ ಕೈಗೊಳ್ಳುವ ಕುರಿತು ಚರ್ಚೆ ನಡೆಯುವ ಸಾಧ್ಯತೆ ಇದೆ. 

ಸಂವಿಧಾನದ 164 (1) ನೇ ಆರ್ಟಿಕಲ್‌ ಕುರಿತು ಸಭೆಯಲ್ಲಿ ವಿಸ್ತೃತ ಚರ್ಚೆ ನಡೆಯಲಿದೆ. ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್, ಮಾಜಿ ಕೇಂದ್ರ ಸಚಿವ ವೀರಪ್ಪ ಮೊಯ್ಲಿ, ಅನಿಲ್ ಜೈಹಿಂದ್ ಸೇರಿದಂತೆ ಒಟ್ಟು 24 ಮಂದಿ ಸಲಹಾ ಮಂಡಳಿ ಸದಸ್ಯರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ.

Tags:    

Similar News