ಭಾರತ-ಪಾಕ್ ಉದ್ವಿಗ್ನತೆ: ರಾಜ್ಯದಲ್ಲಿ ಕಟ್ಟೆಚ್ಚರ, ಪೊಲೀಸರ ರಜೆ ರದ್ದುಗೊಳಿಸಿದ ಸರ್ಕಾರ
ರಾಜ್ಯದಲ್ಲೆಡೆ ಸೂಕ್ಷ್ಮ ಪ್ರದೇಶಗಳಿಗೆ ಹೆಚ್ಚಿನ ಭದ್ರತೆ ಒದಗಿಸುವ ಉದ್ದೇಶದಿಂದ ಪೊಲೀಸರಿಗೆ ಯಾವುದೇ ಹೆಚ್ಚುವರಿ ರಜೆ ಇರುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.;
ರಾಜ್ಯಪೊಲೀಸ್ ಸಿಬ್ಬಂದಿ
ಭಾರತ ಹಾಗೂ ಪಾಕಿಸ್ತಾನದ ನಡುವೆ ಉದ್ವಿಗ್ನತೆ ಹೆಚ್ಚುತ್ತಿರುವ ಕಾರಣದಿಂದ ಎಲ್ಲಾ ರಾಜ್ಯಗಳಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸುವಂತೆ ಇತ್ತೀಚೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಸೂಚನೆ ನೀಡಿದ ಬೆನ್ನಲ್ಲೆ ರಾಜ್ಯದಲ್ಲಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಹೀಗಾಗಿ ಪೊಲೀಸ್ ಇಲಾಖೆ ತನ್ನ ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ನೀಡಿದ್ದ ರಜೆ ರದ್ದುಗೊಳಿಸಿದೆ.
ಇದು ಸೂಕ್ಷ್ಮ ಸಮಯವಾದ್ದರಿಂದ ಯಾವ ಸಂದರ್ಭದಲ್ಲಿ ಏನಾಗಬಹುದು ಎಂಬುದು ಅನಿರೀಕ್ಷಿತ. ಸೂಕ್ಷ್ಮ ಪ್ರದೇಶಗಳಿಗೆ ಭದ್ರತೆ ಒದಗಿಸುವ ಉದ್ದೇಶದಿಂದ ಪೊಲೀಸರಿಗೆ ಹೆಚ್ಚುವರಿ ರಜೆ ಇರುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಅಧ್ಯಕ್ಷತೆಯಲ್ಲಿ ಶನಿವಾರ (ಮೇ10)ರಂದು ಉನ್ನತಮಟ್ಟದ ಸಭೆ ನಡೆದಿದೆ. ಸಭೆಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳು, ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪೊಲೀಸ್‌ವರಿಷ್ಠಾಧಿಕಾರಿಗಳು ಭಾಗವಹಿಸಿದ್ದಾರೆ.
ರೈಲ್ವೆ ನಿಲ್ದಾಣ, ಅಣೆಕಟ್ಟುಗಳಿಗೆ ಭದ್ರತೆ
ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳು ಹಾಗೂ ಜಲಸಂಪನ್ಮೂಲ ಇಲಾಖೆ ವ್ಯಾಪ್ತಿಯ ಬೃಹತ್ ಅಣೆಕಟ್ಟುಗಳಿಗೆ ವ್ಯಾಪಕ ಭದ್ರತೆ ಒದಗಿಸಲಾಗಿದೆ. ಬೆಂಗಳೂರು, ಹುಬ್ಬಳ್ಳಿ ಹಾಗೂ ದಾವಣಗೆರೆ ರೈಲ್ವೆ ನಿಲ್ದಾಣಗಳಲ್ಲಿ ಹೈ ಅಲರ್ಟ್ ಫೋಷಿಸಲಾಗಿದ್ದು ಬಾಂಬ್ ನಿಷ್ಕ್ರಿಯ ದಳ, ಶ್ವಾನದಳ ಹಾಗೂ ಪೊಲೀಸ್ ಇಲಾಖೆಯ ಸಹಯೋಗದೊಂದಿಗೆ ಪ್ರಯಾಣಿಕರನ್ನು ತಪಾಸಣೆ ಮಾಡಲಾಗುತ್ತಿದೆ. ರಸ್ತೆ ಬದಿಯಲ್ಲಿರುವ ಅನಾಮಧೇಯ ವಸ್ತುಗಳು ಮತ್ತು ಬೈಕ್‌ಗಳನ್ನು ಬಾಂಬ್ ನಿಷ್ಕ್ರಿಯ ದಳದ ಸಿಬ್ಬಂದಿ ತಪಾಸಣೆ ಮಾಡುತ್ತಿದ್ದು, ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದಾರೆ.
ಕೆಪಿಸಿಎಲ್ ವ್ಯಾಪ್ತಿಯ ಜಲಾಶಯಗಳು ಮತ್ತು ಪವರ್ ಹೌಸ್‌ಗಳಿಗೆ ಎಂಜಿನಿಯರಿಂಗ್ ವಿದ್ಯಾರ್ಥಿಗಳು, ಗಣ್ಯರು ಸೇರಿದಂತೆ ಸಾರ್ವಜನಿಕರಿಗೆ ಪ್ರವೇಶ ನಿರ್ಬಂಧಿಸಿ ಆದೇಶ ಹೊರಡಿಸಲಾಗಿದೆ. ಎಂಜಿನಿಯರಿಂಗ್ ವಿದ್ಯಾರ್ಥಿಗಳು ಅಧ್ಯಯನ ದೃಷ್ಟಿಯಿಂದ ಜಲಾಶಯಗಳು ಹಾಗೂ ಪವರ್ ಹೌಸ್‌ಗಳಿಗೆ ಭೇಟಿ ನೀಡುತ್ತಾರೆ. ಪ್ರಸ್ತುತ ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸುವಂತೆ ಕೇಂದ್ರ ಸರ್ಕಾರ ಸೂಚನೆ ನೀಡಿರುವುದರಿಂದ ಸಾರ್ವಜನಿಕರಿಗೆ ಪ್ರವೇಶ ನಿಷೇಧಿಸಲಾಗಿದೆ.