ಚಿಕ್ಕಮಗಳೂರಿನಲ್ಲಿ ಅಮಾನವೀಯ ಕೃತ್ಯ: ಶಿಕ್ಷಕಿಯನ್ನು ವಿವಸ್ತ್ರಗೊಳಿಸಿ, ಮರಕ್ಕೆ ಕಟ್ಟಿಹಾಕಿ ಹಲ್ಲೆ

ಕೊಪ್ಪ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸಂತ್ರಸ್ತೆಯು ಮಂಗಳವಾರ ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ, ಮಾರ್ಗಮಧ್ಯೆ ಹೊಂಚುಹಾಕಿದ್ದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ, ಏಕಾಏಕಿ ಹಲ್ಲೆ ನಡೆಸಿದ್ದಾರೆ.

Update: 2025-10-29 05:12 GMT
ಅತಿಥಿ ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ್ದ ಆರೋಪಿ ಬಂಧನ
Click the Play button to listen to article

ಕಾಫಿನಾಡು ಚಿಕ್ಕಮಗಳೂರಿನಲ್ಲಿ ನಾಗರಿಕ ಸಮಾಜವೇ ತಲೆತಗ್ಗಿಸುವಂತಹ ಅಮಾನವೀಯ ಘಟನೆಯೊಂದು ನಡೆದಿದೆ. ಸರ್ಕಾರಿ ಶಾಲೆಯ ಅತಿಥಿ ಶಿಕ್ಷಕಿಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿ, ಅವರನ್ನು ವಿವಸ್ತ್ರಗೊಳಿಸಿ ಮರಕ್ಕೆ ಕಟ್ಟಿಹಾಕಿ ವಿಕೃತಿ ಮೆರೆದಿದ್ದಾರೆ. ಈ ಘಟನೆ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು, ರಾಜ್ಯಾದ್ಯಂತ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಕೊಪ್ಪ ತಾಲೂಕಿನ ಸರ್ಕಾರಿ ಶಾಲೆಯೊಂದರಲ್ಲಿ ಅತಿಥಿ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿರುವ ಸಂತ್ರಸ್ತೆಯು ಮಂಗಳವಾರ ಶಾಲೆ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದರು. ಈ ಸಂದರ್ಭದಲ್ಲಿ, ಮಾರ್ಗಮಧ್ಯೆ ಹೊಂಚುಹಾಕಿದ್ದ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ, ಏಕಾಏಕಿ ಹಲ್ಲೆ ನಡೆಸಿದ್ದಾರೆ. ಅಷ್ಟಕ್ಕೇ ನಿಲ್ಲಿಸದೆ, ಆಕೆಯನ್ನು ನಗ್ನಗೊಳಿಸಿ ಮರಕ್ಕೆ ಕಟ್ಟಿಹಾಕಿ ದೌರ್ಜನ್ಯ ಎಸಗಿದ್ದಾರೆ.

ಶಿಕ್ಷಕಿಯ ಚೀರಾಟವನ್ನು ಕೇಳಿದ ಸ್ಥಳೀಯರು ಮತ್ತು ಕುಟುಂಬಸ್ಥರು ತಕ್ಷಣವೇ ಸ್ಥಳಕ್ಕೆ ಧಾವಿಸಿ, ಅವರನ್ನು ರಕ್ಷಿಸಿದ್ದಾರೆ. ತೀವ್ರವಾಗಿ ಗಾಯಗೊಂಡಿದ್ದ ಶಿಕ್ಷಕಿಯನ್ನು ಮೊದಲು ಕೊಪ್ಪದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ನಂತರ, ಹೆಚ್ಚಿನ ಚಿಕಿತ್ಸೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ತನಿಖೆಗೆ ಮೂರು ವಿಶೇಷ ತಂಡ ರಚನೆ

ಈ ಘಟನೆಯು ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆ, ಚಿಕ್ಕಮಗಳೂರು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದಾರೆ. ಆರೋಪಿಗಳ ಪತ್ತೆಗಾಗಿ ಕೊಪ್ಪ ಡಿವೈಎಸ್‌ಪಿ ನೇತೃತ್ವದಲ್ಲಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ.

ಪ್ರಾಥಮಿಕ ತನಿಖೆಯ ಪ್ರಕಾರ, ಶಿಕ್ಷಕಿಯ ಸಂಬಂಧಿಕನೊಬ್ಬನೇ ಈ ಕೃತ್ಯ ಎಸಗಿರುವ ಶಂಕೆ ವ್ಯಕ್ತವಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದು, ಜಯಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳನ್ನು ಶೀಘ್ರವೇ ಬಂಧಿಸಿ, ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಮತ್ತು ಸಾರ್ವಜನಿಕರು ಬಲವಾಗಿ ಆಗ್ರಹಿಸಿದ್ದಾರೆ.

ಆರೋಪಿ ಬಂಧನ

ಶಿಕ್ಷಕಿ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಬಂಧಿಸಲು ಮೂರು ಪೊಲೀಸ್‌ ತಂಡಗಳನ್ನು ರಚಿಸಲಾಗಿತ್ತು. ಘಟನೆ ನಡೆದ 24 ಗಂಟೆಯಲ್ಲಿ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ಹೆಚ್ಚಿನ ವಿಚಾರಣೆ ನಡೆಸಲು ವಶಕ್ಕೆ ಪಡೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.  

Tags:    

Similar News