Chitradurga| ಲಾರಿಗೆ ಇನ್ನೋವಾ ಕಾರು ಡಿಕ್ಕಿ ; ಬೆಂಗಳೂರಿನ ಐವರು ದುರ್ಮರಣ

ಸವದತ್ತಿಯ ರೇಣುಕಾ ಯಲ್ಲಮ್ಮ ದೇವಾಲಯಕ್ಕೆ ತೆರಳಿ ದರ್ಶನ ಪಡೆದು ವಾಪಸಾಗುತ್ತಿದ್ದ ಬೆಂಗಳೂರು ಮೂಲದ ಐವರು ಭಾನುವಾರ ನಡೆದ ಲಾರಿ- ಇನ್ನೋವಾ ಕಾರು ಅಪಘಾತದಲ್ಲಿ ಮೃತಪಟ್ಟಿದ್ದಾರೆ.;

Update: 2025-03-09 10:44 GMT

ಲಾರಿಗೆ ಇನ್ನೊವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ಮತಪಟ್ಟಿದ್ದು, ಮತ್ತೊಬ್ಬರು ಗಾಯಗೊಂಡಿರುವ ಘಟನೆ ಚಿತ್ರದುರ್ಗ ತಾಲ್ಲೂಕಿನ ತಮಟಗಲ್ಲು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಭಾನುವಾರ ನಡೆದಿದೆ.

ಬೆಂಗಳೂರಿನ ಬಿಎಂಟಿಸಿ ನಿವೃತ್ತ ನೌಕರ ಶಾಂತಮೂರ್ತಿ (60), ರುದ್ರಸ್ವಾಮಿ (52), ಮಲ್ಲಿಕಾರ್ಜುನ (50), ಚಿದಂಬರಾಚಾರ್ (50) ಮೃತಪಟ್ಟವರು. ಮತ್ತೊಬ್ಬರ ಗುರುತು ಪತ್ತೆಯಾಗಿಲ್ಲ. ತೀವ್ರ ಗಾಯಗೊಂಡಿರುವ ಇನ್ನೊಬ್ಬರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಈ ಎಲ್ಲರೂ ಸವದತ್ತಿಯ ರೇಣುಕಾ ಯಲ್ಲಮ್ಮ ದೇವಾಲಯಕ್ಕೆ ತೆರಳಿ ದರ್ಶನ ಪಡೆದು ವಾಪಸಾಗುತ್ತಿದ್ದರು.

ಬೆಂಗಳೂರು ಕಡೆಗೆ ಸಾಗುವ ಮಾರ್ಗದಲ್ಲಿ ತಮಿಳುನಾಡು ಮೂಲದ ಲಾರಿ ತಮಟಗಲ್ಲು ಬಳಿ ರಸ್ತೆ ಬದಿ ನಿಂತಿತ್ತು. ಈ ವೇಳೆ ವೇಗವಾಗಿ ಬಂದ ಇನ್ನೋವಾ ಕಾರು ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದಿದೆ.

ಅಪಘಾತದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ. ಕಾರು ಚಾಲಕನ ಅಜಾಗರುಕ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಮೃತದೇಹಗಳನ್ನು ಜಿಲ್ಲಾಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ರಂಜಿತ್‌ಕುಮಾರ್ ಬಂಡಾರು, ಡಿವೈಎಸ್‌ಪಿ ದಿನಕ‌ರ್ ಭೇಟಿ ನೀಡಿ ಪರಿಶೀಲಿಸಿದ್ದು, ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Similar News