ಕನ್ನಡ ಕಡ್ಡಾಯ| ನಾಮಫಲಕದಲ್ಲಿ ಶೇ.60ರಷ್ಟು ಕನ್ನಡ ಕಡ್ಡಾಯಕ್ಕೆ ಜಿಲ್ಲಾಧಿಕಾರಿಗಳಿಗೆ ಸೂಚನೆ

ಸುವರ್ಣ ವಿಧಾನಸೌಧದಲ್ಲಿ ವಿಧಾನ ಪರಿಷತ್ತಿನ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ 2022ರನ್ವಯ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

Update: 2025-12-12 11:01 GMT

ಶಿವರಾಜ ತಂಗಡಗಿ 

Click the Play button to listen to article

ರಾಜ್ಯಾದ್ಯಂತ ವಾಣಿಜ್ಯ ಮಳಿಗೆಗಳು ಸೇರಿದಂತೆ ಎಲ್ಲಾ ರೀತಿಯ ಉದ್ದಿಮೆಗಳು ತಮ್ಮ ನಾಮಫಲಕಗಳಲ್ಲಿ ಶೇಕಡಾ 60 ರಷ್ಟು ಕನ್ನಡವನ್ನು ಕಡ್ಡಾಯವಾಗಿ ಬಳಸಬೇಕು. ಈ ನಿಯಮವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲು ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಕಡಕ್ ಸೂಚನೆ ನೀಡಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ತಿಳಿಸಿದ್ದಾರೆ.

ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಪರಿಷತ್ ಕಲಾಪದಲ್ಲಿ ಸದಸ್ಯೆ ಉಮಾಶ್ರೀ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022' ರ ಅನ್ವಯ ರಾಜ್ಯ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಸಮಗ್ರ ಮಾಹಿತಿ ನೀಡಿದರು.

ಮೇಲ್ಭಾಗದಲ್ಲಿ ಕನ್ನಡ ಇರಲೇಬೇಕು

ಕಾಯ್ದೆಯ 17ನೇ ಪ್ರಕರಣದ 6ನೇ ಉಪಪ್ರಕರಣದ ಪ್ರಕಾರ, ಸರ್ಕಾರ ಅಥವಾ ಸ್ಥಳೀಯ ಪ್ರಾಧಿಕಾರಗಳಿಂದ ಅನುಮತಿ ಪಡೆದು ನಡೆಯುತ್ತಿರುವ ಪ್ರತಿಯೊಂದು ಸಂಸ್ಥೆಯೂ ಈ ನಿಯಮವನ್ನು ಪಾಲಿಸಬೇಕಿದೆ. ವಾಣಿಜ್ಯ ಮಳಿಗೆಗಳು, ಕೈಗಾರಿಕೆಗಳು, ವ್ಯಾಪಾರ ಕೇಂದ್ರಗಳು, ಟ್ರಸ್ಟ್‌ಗಳು, ಆಸ್ಪತ್ರೆಗಳು, ಲ್ಯಾಬ್‌ಗಳು, ಹೋಟೆಲ್‌ಗಳು ಸೇರಿದಂತೆ ಎಲ್ಲಾ ಸಂಸ್ಥೆಗಳು ತಮ್ಮ ನಾಮಫಲಕದ ಮೇಲ್ಭಾಗದಲ್ಲಿ ಕನ್ನಡವನ್ನೇ ಪ್ರದರ್ಶಿಸಬೇಕು. ಒಟ್ಟು ನಾಮಫಲಕದ ವಿಸ್ತೀರ್ಣದಲ್ಲಿ ಶೇ. 60 ರಷ್ಟು ಜಾಗವನ್ನು ಕನ್ನಡ ಭಾಷೆಗೆ ಮೀಸಲಿಡುವುದು ಕಡ್ಡಾಯವಾಗಿದೆ ಎಂದು ಸಚಿವರು ಸ್ಪಷ್ಟಪಡಿಸಿದರು.

ಜಿಲ್ಲಾಧಿಕಾರಿಗಳೇ ನೇರ ಹೊಣೆ

ಈ ಕಾಯ್ದೆಯ ಅನುಷ್ಠಾನದ ಸಂಪೂರ್ಣ ಜವಾಬ್ದಾರಿಯನ್ನು ಆಯಾ ಜಿಲ್ಲಾಧಿಕಾರಿಗಳಿಗೆ ವಹಿಸಲಾಗಿದೆ. ನಾಮಫಲಕ ಬದಲಾವಣೆ ಎಂಬುದು ಒಂದು ನಿರಂತರ ಪ್ರಕ್ರಿಯೆಯಾಗಿದ್ದು, ಜಿಲ್ಲಾಧಿಕಾರಿಗಳು ತಮ್ಮ ವ್ಯಾಪ್ತಿಯಲ್ಲಿ ನಿಯಮಿತವಾಗಿ ಪರಿಶೀಲನೆ ನಡೆಸಿ, ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸರ್ಕಾರ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ನಿಯಮ ಮೀರಿದರೆ ದಂಡ ಮತ್ತು ಲೈಸೆನ್ಸ್ ರದ್ದು

ನಿಯಮ ಉಲ್ಲಂಘಿಸುವವರ ವಿರುದ್ಧ 'ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ-2022' ರ ನಿಯಮ 23ರ ಅಡಿಯಲ್ಲಿ ಕಠಿಣ ಕ್ರಮ ಕೈಗೊಳ್ಳಲು ಅವಕಾಶವಿದೆ. ಮೊದಲನೇ ಬಾರಿ ನಿಯಮ ಉಲ್ಲಂಘನೆಗೆ 5,000 ರೂ. ದಂಡ. ಎರಡನೇ ಬಾರಿ ಉಲ್ಲಂಘನೆಗೆ 10,000 ರೂ. ದಂಡ. ನಂತರದ ಪ್ರತಿ ತಪ್ಪುಗಳಿಗೆ: 20,000 ರೂ. ವರೆಗೆ ದಂಡ ವಿಧಿಸಲಾಗುವುದಾಗಿ ಅವರು ಹೇಳಿದ್ದಾರೆ.

ಕೇವಲ ದಂಡ ಮಾತ್ರವಲ್ಲದೆ, ಪದೇ ಪದೇ ನಿಯಮ ಉಲ್ಲಂಘಿಸುವ ಸಂಸ್ಥೆಗಳ ಪರವಾನಗಿಯನ್ನು (Trade License) ರದ್ದುಗೊಳಿಸುವ ಅಧಿಕಾರವೂ ಅಧಿಕಾರಿಗಳಿಗಿದೆ ಎಂದು ಸಚಿವ ತಂಗಡಗಿ ಎಚ್ಚರಿಕೆ ನೀಡಿದ್ದಾರೆ.

Tags:    

Similar News