IPL 2024 | CSK ವಿರುದ್ಧದ ಪಂದ್ಯದಲ್ಲಿ ದಾಖಲೆಗಳ ಸುರಿಮಳೆ ಸುರಿಸಿದ ವಿರಾಟ್ ಕೊಹ್ಲಿ
ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಆರ್‌ಸಿಬಿ ಹಾಗೂ ಸಿಎಸ್ಕೆ ನಡುವಿನ ರಣರೋಚಕ ಪಂದ್ಯದಲ್ಲಿ ರುತುರಾಜ್ ಗಾಯಕ್ವಾಡ್ ಪಡೆಯನ್ನು 27 ರನ್‌ಗಳಿಂದ ಮಣಿಸಿದ ಫಾಫ್ ಪಡೆ ಪ್ಲೇಆಫ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದೆ.
ಲೀಗ್‌ನಲ್ಲಿ ಸತತ 6 ಪಂದ್ಯಗಳನ್ನು ಸೋತು ಪ್ಲೇಆಫ್‌ನಿಂದ ಹೊರಗುಳಿಯುವ ಆತಂಕದಲ್ಲಿದ್ದ ಆರ್‌ಸಿಬಿ, ಆ ಬಳಿಕ ಅದ್ಭುತ ಪುನರಾಗಮನ ಮಾಡಿ ಸತತ 6 ಪಂದ್ಯಗಳನ್ನು ಗೆದ್ದು ಪಾಯಿಂಟ್ ಪಟ್ಟಿಯಲ್ಲಿ 4ನೇ ಸ್ಥಾನಕ್ಕೇರಿದೆ. ಇದರೊಂದಿಗೆ ಅಧಿಕೃತವಾಗಿ ಪ್ಲೇಆಫ್‌ಗೆ ಅರ್ಹತೆ ಗಿಟ್ಟಿಸಿಕೊಂಡಿದ್ದು, ಇದೀಗ ಎಲಿಮಿನೇಟರ್ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಎದುರಿಸಲಿದೆ.
ಟಾಸ್ ಗೆದ್ದ ಚೆನ್ನೈ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಮೊದಲು ಬ್ಯಾಟ್ ಮಾಡಿದ ಆರ್‌ಸಿಬಿ ತಂಡ ನಿಗದಿತ 20 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 218 ರನ್ ಕಲೆಹಾಕಿತು. ಗೆಲುವಿಗೆ 219 ರನ್ ಹಾಗೂ ಪ್ಲೇಆಫ್‌ಗೆ ಅರ್ಹತೆ ಪಡೆಯಲು 201 ರನ್ ಗುರಿ ಪಡೆದು ಇನ್ನಿಂಗ್ಸ್ ಆರಂಭಿಸಿದ ಚೆನ್ನೈ 20 ಓವರ್‌ಗಳಲ್ಲಿ ಏಳು ವಿಕೆಟ್ ಕಳೆದುಕೊಂಡು 191 ರನ್ ಗಳಿಸಲಷ್ಟೇ ಶಕ್ತವಾಯಿತು.
ಐಪಿಎಲ್‌ನ 68ನೇ ಪಂದ್ಯದಲ್ಲಿ ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಆರಂಭಿಕನಾಗಿ ಕಣಕ್ಕಿಳಿದ ಕೊಹ್ಲಿ 29 ಎಸೆತಗಳಲ್ಲಿ 4 ಭರ್ಜರಿ ಸಿಕ್ಸ್ ಹಾಗೂ 3 ಫೋರ್‌ಗಳೊಂದಿಗೆ 47 ರನ್ ಬಾರಿಸಿದರು.
ವಿರಾಟ್ ದಾಖಲೆಗಳು
ಈ ಪಂದ್ಯದಲ್ಲಿ 47 ರನ್ ಬಾರಿಸುವುದರೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ 3000 ರನ್ ಕಲೆಹಾಕಿದ ವಿಶೇಷ ದಾಖಲೆಯೊಂದು ವಿರಾಟ್ ಕೊಹ್ಲಿ ಹೆಸರಿಗೆ ಸೇರ್ಪಡೆಯಾಯಿತು. ಅಲ್ಲದೆ ಐಪಿಲ್‌ನಲ್ಲಿ ಒಂದೇ ಸ್ಟೇಡಿಯಂನಲ್ಲಿ ಅತ್ಯಧಿಕ ರನ್ ಬಾರಿಸಿದ ಬ್ಯಾಟರ್ ಎನಿಸಿಕೊಂಡರು.
ಈ ಪಂದ್ಯದಲ್ಲಿ ಎರಡಂಕಿ ಮೊತ್ತ ಕಲೆಹಾಕುವುದರೊಂದಿಗೆ ವಿರಾಟ್ ಕೊಹ್ಲಿ ಈ ಬಾರಿಯ ಐಪಿಎಲ್‌ನಲ್ಲಿ 700+ ರನ್ ಕಲೆಹಾಕಿದ ಮೊದಲ ಬ್ಯಾಟರ್ ಎನಿಸಿಕೊಂಡರು. ಅಲ್ಲದೆ ಐಪಿಎಲ್ ಇತಿಹಾಸದಲ್ಲಿ ಎರಡು ಬಾರಿ 700+ ರನ್ ಕಲೆಹಾಕಿದ ಮೊದಲ ಭಾರತೀಯ ಬ್ಯಾಟರ್ ಎಂಬ ದಾಖಲೆಯನ್ನೂ ಕೂಡ ತಮ್ಮದಾಗಿಸಿಕೊಂಡರು. ಇದಕ್ಕೂ ಮುನ್ನ ಕೊಹ್ಲಿ 2016 ರಲ್ಲಿ 973 ರನ್ ಬಾರಿಸಿದ್ದರು.
ಈ ಪಂದ್ಯದಲ್ಲಿ ಬಾರಿಸಿದ 4 ಭರ್ಜರಿ ಸಿಕ್ಸರ್‌ಗಳೊಂದಿಗೆ ವಿರಾಟ್ ಕೊಹ್ಲಿ ತಮ್ಮದೇ ದಾಖಲೆ ಮುರಿಯುವ ಹೊಸ್ತಿಲಿಗೆ ತಲುಪಿದ್ದಾರೆ. ಅಂದರೆ ಐಪಿಎಲ್ ಇತಿಹಾಸದಲ್ಲೇ ಸೀಸನ್‌ವೊಂದರಲ್ಲಿ ಅತೀ ಹೆಚ್ಚು ಸಿಕ್ಸ್ ಬಾರಿಸಿದ ಭಾರತೀಯ ಬ್ಯಾಟರ್‌ನ ದಾಖಲೆ ವಿರಾಟ್ ಕೊಹ್ಲಿ ಹೆಸರಿನಲ್ಲಿದೆ. ಕಿಂಗ್ ಕೊಹ್ಲಿ 2016 ರಲ್ಲಿ 38 ಸಿಕ್ಸ್ ಸಿಡಿಸಿ ಈ ದಾಖಲೆ ನಿರ್ಮಿಸಿದ್ದರು. ಇದೀಗ 2024 ರಲ್ಲಿ ವಿರಾಟ್ ಕೊಹ್ಲಿ 37 ಸಿಕ್ಸ್ರ್‌ಗಳನ್ನು ಬಾರಿಸಿದ್ದಾರೆ. ಈ ಮೂಲಕ ಐಪಿಎಲ್ ಸೀಸನ್‌ವೊಂದರಲ್ಲಿ ಅತ್ಯಧಿಕ ಸಿಕ್ಸ್‌ಗಳನ್ನು ಸಿಡಿಸಿದ ಭಾರತೀಯ ಬ್ಯಾಟರ್‌ಗಳ ಪಟ್ಟಿಯಲ್ಲಿ ಕೊಹ್ಲಿ ಮೊದಲೆರಡು ಸ್ಥಾನಗಳನ್ನು ಅಲಂಕರಿಸಿದ್ದಾರೆ.
ಈ ಬಾರಿಯ ಐಪಿಎಲ್‌ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ವಿರಾಟ್ ಕೊಹ್ಲಿ 14 ಇನಿಂಗ್ಸಗಳಲ್ಲಿ ಒಟ್ಟು 708 ರನ್ ಕಲೆಹಾಕಿದ್ದಾರೆ. ಈ ವೇಳೆ 5 ಅರ್ಧಶತಕಗಳು ಹಾಗೂ 1 ಭರ್ಜರಿ ಶತಕ ಸಿಡಿಸಿದ್ದಾರೆ. ಈ ಮೂಲಕ ಆರೆಂಜ್ ಕ್ಯಾಪ್ ರೇಸ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ.