ಸಿಇಟಿ ಪರೀಕ್ಷೆಗೆ ಜನಿವಾರ ತೆಗೆಸಿದ ಪ್ರಕರಣ; ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಪ್ರತಿವಾದಿಗಳಾದ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.;
ಕರ್ನಾಟಕ ಹೈಕೋರ್ಟ್
ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಅವಕಾಶ ಕಲ್ಪಿಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಬರೆಯುವ ಮುನ್ನ ವಿದ್ಯಾರ್ಥಿಗಳು ಧರಿಸಿದ್ದ ಜನಿವಾರವನ್ನು ಬಲವಂತವಾಗಿ ಕತ್ತರಿಸಿ ತೆಗೆಯಲಾಗಿದೆ ಎಂದು ಆಕ್ಷೇಪಿಸಲಾದ ಅರ್ಜಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ನೋಟಿಸ್ ಜಾರಿಗೊಳಿಸಲು ಹೈಕೋರ್ಟ್ ಶನಿವಾರ ಆದೇಶಿಸಿದೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ರಘುನಾಥ್ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ. ವಿ. ಅರವಿಂದ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿತು.
ಅರ್ಜಿದಾರರ ಪರ ವಕೀಲರ ವಾದ ಆಲಿಸಿದ ಪೀಠವು ಪ್ರತಿವಾದಿಗಳಾದ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಕಾರ್ಯ ನಿರ್ವಾಹಕ ಅಧಿಕಾರಿಗೆ ನೋಟಿಸ್ ಜಾರಿಗೊಳಿಸಲು ಆದೇಶಿಸಿತು.
ಪ್ರತಿವಾದಿಗಳು ಆಕ್ಷೇಪಣೆ ಸಲ್ಲಿಸುವಂತೆ ನಿರ್ದೇಶಿಸಿದ ಪೀಠ ವಿಚಾರಣೆಯನ್ನು ಜೂನ್ 9ಕ್ಕೆ ಮುಂದೂಡಿದೆ.
ರಾಜ್ಯದಲ್ಲಿ ವೃತ್ತಿಪರ ಶಿಕ್ಷಣದ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಏಪ್ರಿಲ್ 16 ಮತ್ತು 17ರಂದು ರಾಜ್ಯದ ವಿವಿಧೆಡೆ ಪರೀಕ್ಷೆಗಳನ್ನು ನಡೆಸಲಾಯಿತು. ಈ ಸಂದರ್ಭದಲ್ಲಿ ಪರೀಕ್ಷಾ ಕೊಠಡಿ ಪ್ರವೇಶಿಸುವ ಮುನ್ನ ವಿದ್ಯಾರ್ಥಿಗಳನ್ನು ತಪಾಸಣೆಗೆ ಒಳಪಡಿಸಲಾಗಿತ್ತು. ಈ ವೇಳೆ ಪವಿತ್ರ ಜನಿವಾರ ಧರಿಸಿದ್ದ ವಿದ್ಯಾರ್ಥಿಗಳ ಜನಿವಾರವನ್ನು ಅವರ ಪ್ರತಿರೋಧದ ನಡುವೆಯೂ ಬಲವಂತದಿಂದ ಕತ್ತರಿಸಿ ತೆಗೆಯಲಾಗಿದೆ. ತೆಗೆಯದೇ ಹೋದವರಿಗೆ ಪರೀಕ್ಷೆ ಬರೆಯುವ ಅವಕಾಶ ನಿರಾಕರಿಸಲಾಗಿದೆ ಎಂದು ಅರ್ಜಿದಾರರು ದೂರಿದ್ದಾರೆ.
ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಪ್ರಕರಣಗಳು ಬೀದರ್, ಶಿವಮೊಗ್ಗ ಧಾರವಾಡ ಜಿಲ್ಲೆಯಲ್ಲಿ ನಡೆದಿವೆ ಎಂದು ವಿವರಿಸಲಾಗಿದೆ. ಧಾರ್ಮಿಕ ವಿಧಿ ವಿಧಾನಗಳ ಮೂಲಕ ಶ್ರದ್ಧೆ ಮತ್ತು ಭಕ್ತಿಯಿಂದ ಬ್ರಾಹ್ಮಣರು, ಕ್ಷತ್ರಿಯರು ಮತ್ತು ವೈಶ್ಯರು ಧರಿಸುವ ಜನಿವಾರವನ್ನು ಬಲವಂತವಾಗಿ ತೆಗೆಸಿರುವುದು ಅವರ ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ಉಂಟುಮಾಡಿದೆ. ಈ ಕೃತ್ಯವು ಸಂವಿಧಾನದ 21ಎ, 25 ಮತ್ತು 29(2)ರ ಸ್ಪಷ್ಟ ಉಲ್ಲಂಘನೆಯಾಗಿದೆ. ಇಂತಹ ಸಂವಿಧಾನ ವಿರೋಧಿ ಕ್ರಮಕ್ಕೆ ಕೈಹಾಕಿದ ಅಧಿಕಾರಿಗಳ ವಿರುದ್ಧ ಸರ್ಕಾರ ಈತನಕ ಯಾವುದೇ ಕ್ರಮ ಕೈಗೊಂಡಿಲ್ಲ. ಅಂತೆಯೇ, ಇದರಿಂದ ವಿದ್ಯಾರ್ಥಿಗಳ ಶಿಕ್ಷಣದ ಹಕ್ಕಿಗೆ ವಂಚನೆಯಾಗಿದೆ ಎಂದು ಆಕ್ಷೇಪಿಸಲಾಗಿದೆ.
ಯಾರು ಪರೀಕ್ಷೆಯಿಂದ ವಂಚಿತರಾಗಿದ್ದಾರೋ ಅಂತಹ ವಿದ್ಯಾರ್ಥಿಗಳಿಗಾಗಿ ಮತ್ತೊಮ್ಮೆ ಸಿಇಟಿ ಪರೀಕ್ಷೆ ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸೂಕ್ತ ನಿರ್ದೇಶನ ನೀಡಬೇಕು. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳ ತಪಾಸಣೆಗೆ ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವಂತೆಯೂ ನಿರ್ದೇಶಿಸಬೇಕು. ಜನಿವಾರ ಧರಿಸಿದ್ದ ವಿದ್ಯಾರ್ಥಿಗಳಿಗೆ ಪರೀಕ್ಷೆ ನಿರಾಕರಿಸಿದ ಕ್ರಮವನ್ನು ಅಸಾಂವಿಧಾನಿಕ, ಏಕಪಕ್ಷೀಯ ಮತ್ತು ಅಕ್ರಮ ಎಂದು ಸಾರಬೇಕು. ಜನಿವಾರ ಧರಿಸುವ ವಿದ್ಯಾರ್ಥಿಗಳಿಗೆ ತಾರತಮ್ಯ ಮಾಡಬಾರದು ಮತ್ತು ಅವರ ಧಾರ್ಮಿಕ ಆಚರಣೆಯ ಹಕ್ಕಿನಲ್ಲಿ ಮಧ್ಯಪ್ರವೇಶ ಮಾಡದಂತೆ ಸೂಕ್ತ ಆದೇಶ ಹೊರಡಿಸಬೇಕು ಎಂದು ಅರ್ಜಿದಾರರು ಕೋರಿದ್ದಾರೆ.