ಕಲಬುರಗಿ ಕ್ಯಾಬಿನೆಟ್ ಸಭೆ | ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ನಾವು ಬದ್ಧ: ಸಿಎಂ ಸಿದ್ದರಾಮಯ್ಯ
ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ನಾಳೆ(ಸೆ.17) ಸಚಿವ ಸಂಪುಟ ಸಭೆ ನಡೆಯಲಿದೆ. ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.;
ಕಲ್ಯಾಣ ಕರ್ನಾಟಕದ ಕಲಬುರಗಿಯಲ್ಲಿ ನಾಳೆ(ಸೆ.17) ಸಚಿವ ಸಂಪುಟ ಸಭೆ ನಡೆಯಲಿದೆ. ಈ ಭಾಗದ ಅಭಿವೃದ್ಧಿಗಾಗಿ ಪೂರಕ ಚರ್ಚೆ ಹಾಗೂ ತೀರ್ಮಾನಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
ಸಂಪುಟ ಸಭೆಯಲ್ಲಿ ಭಾಗವಹಿಸಲು ಕಲಬುರಗಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ಅವರು ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, ಈ ಭಾಗದ ಎಲ್ಲಾ ನಿರೀಕ್ಷೆಗಳನ್ನು ಒಮ್ಮೆಲೇ ನಿಜ ಮಾಡುವುದಕ್ಕೆ ಆಗುವುದಿಲ್ಲ. ನಾಳೆ ಕೆಲವು ಮಹತ್ವದ ನಿರ್ಣಯಗಳನ್ನು ಕೈಗೊಳ್ಳುತ್ತೇವೆ ಎಂದು ಭರವಸೆ ನೀಡಿದರು.
ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ದಿಗಾಗಿ ಆಯವ್ಯಯದಲ್ಲಿ ರೂಪಿಸಲಾಗಿರುವ ಯೋಜನೆಗಳು ಹಾಗೂ ಇನ್ನಿತರ ಪ್ರಮುಖ ವಿಷಯಗಳ ಬಗ್ಗೆ ಚರ್ಚಿಸಲಾಗುವುದು. ಕಲ್ಯಾಣ ಕರ್ನಾಟಕದ ಜನರಿಗೆ ಉದ್ಯೋಗಾವಕಾಶಗಳ ಬಗ್ಗೆ ಹಾಗೂ ಪ್ರತ್ಯೇಕ ಸಚಿವಾಲಯ ರಚನೆ ಬಗ್ಗೆಯೂ ಚರ್ಚಿಸಲಾಗುವುದು. ಕಾಂಗ್ರೆಸ್ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿಯ ಪರವಾಗಿದೆ ಎಂದು ಅವರು ಹೇಳಿದ್ದಾರೆ.
5000 ಕೋಟಿ ರೂ. ಅನುದಾನ
ಕಲ್ಯಾಣ ಕರ್ನಾಟಕ ಭಾಗದ ಜನರ ನಿರೀಕ್ಷೆಗಳಿಗೆ ಸ್ಪಂದಿಸುತ್ತಿದ್ದು, ಬಡವರ ಪರವಾದ ಸರ್ಕಾರ ನಮ್ಮದು. ಆದ್ದರಿಂದ ಈ ಭಾಗದ ಅಭಿವೃದ್ಧಿಗಾಗಿ 5000 ಕೋಟಿ ರೂ.ಗಳನ್ನು ನೀಡಲಾಗಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
371 ಜೆ ಜಾರಿಗೆ ತಂದಿದ್ದು ಕಾಂಗ್ರೆಸ್
ಮನಮೋಹನ್ ಸಿಂಗ್ ನೇತೃತ್ವದ ಕೇಂದ್ರ ಸರ್ಕಾರದ ಅವಧಿಯಲ್ಲಿ 371 ಜೆ ಕಾನೂನು ತರಲಾಗಿದ್ದು, ಅದಕ್ಕಾಗಿ ನಾಯಕರಾದ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಮುಖ್ಯಮಂತ್ರಿ ಧರಂಸಿಂಗ್ ಅವರು ಸಾಕಷ್ಟು ಶ್ರಮವಹಿಸಿದ್ದರು. 2013 ರಲ್ಲಿ ಈ ಕಾನೂನನ್ನು ಕರ್ನಾಟಕದಲ್ಲಿ ಜಾರಿಗೆ ತರಲು ಕಾಂಗ್ರೆಸ್ ಸರ್ಕಾರ ಪ್ರಯತ್ನಿಸಿತೇ ಹೊರತು ಬಿಜೆಪಿಯವರಲ್ಲ. ವಾಜಪೇಯಿ ಪ್ರಧಾನಿಯಾಗಿದ್ದ ಸಂದರ್ಭದಲ್ಲಿ ಅವರ ಕೇಂದ್ರ ಸರ್ಕಾರ, ಈ ಕಾನೂನು ಜಾರಿಗೆ ತರಲು ತಿರಸ್ಕರಿಸಿದ್ದರು ಎಂದೂ ಸಿದ್ದರಾಮಯ್ಯ ಹೇಳಿದ್ದಾರೆ.
ಬರೋಬ್ಬರಿ ಹತ್ತು ವರ್ಷಗಳ ಬಳಿಕ ಗುರುವಾರ(ಸೆ.17) ಕಲ್ಯಾಣ ಕರ್ನಾಟಕದ ಸಮಸ್ಯೆಗಳ ಕುರಿತು ಚರ್ಚಿಸಲು ಕಲಬುರಗಿಯಲ್ಲಿ ವಿಶೇಷ ಸಂಪುಟ ಸಭೆ ನಡೆಯಲಿದೆ. ಒಂದು ದಶಕದ ಹಿಂದೆ 2014ರಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕಲಬುರಗಿಯಲ್ಲಿ ಸಚಿವ ಸಂಪುಟ ಸಭೆ ನಡೆದಿತ್ತು. ಅದಾದ ಬಳಿಕ ಇದೀಗ ಮತ್ತೆ ಸಿದ್ದರಾಮಯ್ಯ ನೇತೃತ್ವದಲ್ಲಿಯೇ ಮತ್ತೊಂದು ಸಂಪುಟ ಸಭೆ ನಡೆಯುತ್ತಿದೆ.