ಕಲ್ಯಾಣ ಕರ್ನಾಟಕ ಪ್ರವಾಹ: ಕೇಂದ್ರದಿಂದ ಸಂಪೂರ್ಣ ಸಹಕಾರ ಕೊಡಿಸುವೆ ಎಂದ ಹೆಚ್.ಡಿ. ಕುಮಾರಸ್ವಾಮಿ
ರಕ್ಷಣಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಬಳಸಿಕೊಂಡು, ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ವಿಶೇಷ ಗಮನ ಹರಿಸಬೇಕು ಎಂದು ಎಚ್ಡಿ ಕುಮಾರಸ್ವಾಮಿ ಹೇಳಿದ್ದಾರೆ.
ಕಲ್ಯಾಣ ಕರ್ನಾಟಕದ ಕಲಬುರಗಿ, ವಿಜಯಪುರ, ಬೀದರ್, ರಾಯಚೂರು, ಮತ್ತು ಕೊಪ್ಪಳ ಜಿಲ್ಲೆಗಳಲ್ಲಿ ಉಂಟಾಗಿರುವ ತೀವ್ರ ಪ್ರವಾಹ ಪರಿಸ್ಥಿತಿಯ ಬಗ್ಗೆ ಕೇಂದ್ರ ಸಚಿವ ಮತ್ತು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ. ಕುಮಾರಸ್ವಾಮಿ ಅವರು ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ. ಸಂತ್ರಸ್ತರ ರಕ್ಷಣೆಗೆ ರಾಜ್ಯ ಸರ್ಕಾರವು ಆದ್ಯತೆ ನೀಡಿ, ತುರ್ತು ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ.
"ಈ ಸಂಕಷ್ಟದ ಸಮಯದಲ್ಲಿ ಪ್ರತಿಯೊಬ್ಬರ ಜೀವ ರಕ್ಷಣೆ ಮತ್ತು ಅವರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸುವುದು ರಾಜ್ಯ ಸರ್ಕಾರದ ಆದ್ಯ ಕರ್ತವ್ಯ. ನೆರೆಪೀಡಿತ ಪ್ರತಿ ತಾಲೂಕಿನಲ್ಲಿ ತಕ್ಷಣವೇ ಕಾಳಜಿ ಕೇಂದ್ರಗಳನ್ನು ತೆರೆಯಬೇಕು," ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ. ಆಹಾರ, ಕುಡಿಯುವ ನೀರು, ಹೊದಿಕೆ ಮತ್ತು ತುರ್ತು ಔಷಧಿಗಳನ್ನು ವಿಳಂಬವಿಲ್ಲದೆ ತಲುಪಿಸಬೇಕು ಎಂದು ಅವರು ಸೂಚಿಸಿದ್ದಾರೆ.
ರಕ್ಷಣಾ ಕಾರ್ಯಾಚರಣೆಗಳನ್ನು ತೀವ್ರಗೊಳಿಸಲು ಎನ್‌ಡಿಆರ್‌ಎಫ್ ಮತ್ತು ಎಸ್‌ಡಿಆರ್‌ಎಫ್ ತಂಡಗಳನ್ನು ಬಳಸಿಕೊಂಡು, ವೃದ್ಧರು, ಮಕ್ಕಳು ಮತ್ತು ಮಹಿಳೆಯರ ರಕ್ಷಣೆಗೆ ವಿಶೇಷ ಗಮನ ಹರಿಸಬೇಕು ಎಂದು ಅವರು ಹೇಳಿದ್ದಾರೆ. ವಿದ್ಯಾರ್ಥಿಗಳ ಸುರಕ್ಷತೆಗಾಗಿ ಶಾಲೆ ಮತ್ತು ಹಾಸ್ಟೆಲ್‌ಗಳನ್ನು ತಾತ್ಕಾಲಿಕ ಪರಿಹಾರ ಕೇಂದ್ರಗಳನ್ನಾಗಿ ಪರಿವರ್ತಿಸಿ, ಸಂತ್ರಸ್ತ ಕುಟುಂಬಗಳಿಗೆ ಆಶ್ರಯ ಒದಗಿಸಲು ವ್ಯವಸ್ಥೆ ಮಾಡುವಂತೆ ಅವರು ಸಲಹೆ ನೀಡಿದ್ದಾರೆ.
ಪ್ರವಾಹದಿಂದ ಉಂಟಾಗಿರುವ ಬೆಳೆನಷ್ಟ ಮತ್ತು ಜಾನುವಾರುಗಳ ಸಂಕಷ್ಟದ ಬಗ್ಗೆಯೂ ಮಾತನಾಡಿದ ಅವರು, ರೈತರಿಗೆ ಸೂಕ್ತ ಪರಿಹಾರ ಹಾಗೂ ಜಾನುವಾರುಗಳಿಗೆ ಮೇವು, ಆಶ್ರಯ ಮತ್ತು ವೈದ್ಯಕೀಯ ಆರೈಕೆ ಒದಗಿಸಲು ತುರ್ತು ಕ್ರಮಗಳನ್ನು ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.
ಈ ಕುರಿತು ತಾವೇ ಖುದ್ದಾಗಿ ಪ್ರವಾಹಪೀಡಿತ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿ, ಪರಿಸ್ಥಿತಿಯ ಅವಲೋಕನ ನಡೆಸಿರುವುದಾಗಿ ತಿಳಿಸಿದ ಕುಮಾರಸ್ವಾಮಿ, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಕೇಂದ್ರ ಸರ್ಕಾರವು ಕರ್ನಾಟಕಕ್ಕೆ ಸಾಧ್ಯವಿರುವ ಎಲ್ಲಾ ಸಹಕಾರವನ್ನು ನೀಡಲಿದೆ ಎಂದು ಭರವಸೆ ನೀಡಿದ್ದಾರೆ.