ಕಮಲ್ ಹಾಸನ್ ಹೇಳಿಕೆ: ಕರ್ನಾಟಕದ ರಾಜಕೀಯ ವಲಯದಿಂದ ತೀವ್ರ ಖಂಡನೆ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಮಲ್ ಹಾಸನ್ ಅವರ ಹೇಳಿಕೆಯನ್ನು "ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿ" ಎಂದು ಟೀಕಿಸಿದ್ದಾರೆ.;

Update: 2025-05-28 05:28 GMT

ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ" ಎಂಬ ನಟ ಕಮಲ್ ಹಾಸನ್ ಅವರ ಹೇಳಿಕೆಯನ್ನು ಕರ್ನಾಟಕದ ರಾಜಕೀಯ ನಾಯಕರು ತೀವ್ರವಾಗಿ ಖಂಡಿಸಿದ್ದಾರೆ. ವಿರೋಧ ಪಕ್ಷದ ನಾಯಕರು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಗಳು ಈ ವಿಷಯದಲ್ಲಿ ಮಧ್ಯಪ್ರವೇಶಿಸುವಂತೆ ಆಗ್ರಹಿಸಿದ್ದಾರೆ.

ವಿಧಾನಸಭೆ ವಿರೋಧಪಕ್ಷದ ನಾಯಕ ಆರ್. ಅಶೋಕ ಅವರು ಕಮಲ್ ಹಾಸನ್ ಹೇಳಿಕೆಯನ್ನು ಖಂಡಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. "ಕನ್ನಡ ಹುಟ್ಟಿದ್ದು ತಮಿಳು ಭಾಷೆಯಿಂದ ಎನ್ನುವ ನಿರರ್ಥಕ ಮಾತುಗಳಿಂದ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಧಕ್ಕೆ ಉಂಟು ಮಾಡಿರುವ ಕಮಲ್ ಹಾಸನ್ ಅವರು ರಾಹುಲ್ ಗಾಂಧಿ ಅವರಿಗೆ ಮತ್ತು ಅವರ ಮಿತ್ರ ತಮಿಳುನಾಡಿನ ಮುಖ್ಯಮಂತ್ರಿ ಸ್ಟಾಲಿನ್ ಅವರಿಗೆ ಪರಮಾಪ್ತರು" ಎಂದು ಅಶೋಕ ಹೇಳಿದ್ದಾರೆ.

ಅಲ್ಲದೆ, "ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಹುಲ್ ಗಾಂಧಿ ಹಾಗೂ ಸ್ಟಾಲಿನ್ ಅವರ ಮೂಲಕ ಕಮಲ್ ಹಾಸನ್ ಅವರ ಕಿವಿ ಹಿಂಡಿಸಿ ಇನ್ನೆಂದೂ ಕನ್ನಡ ನಾಡು-ನುಡಿಯ ತಂಟೆಗೆ ಬರದಂತೆ ಎಚ್ಚರಿಕೆ ಕೊಡಿಸಬಹುದೇ? ಅಥವಾ ಕಾಂಗ್ರೆಸ್ ಪಕ್ಷಕ್ಕೆ ಕನ್ನಡಕ್ಕಿಂತ ಹೈಕಮಾಂಡ್ ಭಕ್ತಿ ಹಾಗು ರಾಜಕೀಯ ಮೈತ್ರಿಯೇ ದೊಡ್ಡದೇ?" ಎಂದು ಪ್ರಶ್ನಿಸಿದ್ದಾರೆ.

ದುರಹಂಕಾರದ ಪರಮಾವಧಿ: ಬಿ.ವೈ. ವಿಜಯೇಂದ್ರ

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಕಮಲ್ ಹಾಸನ್ ಅವರ ಹೇಳಿಕೆಯನ್ನು "ಉದ್ಧಟತನ ಹಾಗೂ ದುರಹಂಕಾರದ ಪರಮಾವಧಿ" ಎಂದು ಟೀಕಿಸಿದ್ದಾರೆ. "ಮಾತೃಭಾಷೆಯನ್ನು ಪ್ರೀತಿಸಬೇಕು, ಆದರೆ ಅದರ ಹೆಸರಿನಲ್ಲಿ ದುರಭಿಮಾನ ಮೆರೆಯುವುದು ಸಂಸ್ಕೃತಿಹೀನ ನಡವಳಿಕೆಯಾಗುತ್ತದೆ. ಅದರಲ್ಲೂ ಕಲಾವಿದರಿಗೆ ಪ್ರತಿಯೊಂದು ಭಾಷೆಯನ್ನೂ ಗೌರವಿಸುವ ಸಂಸ್ಕಾರ ಇರಬೇಕು" ಎಂದು ವಿಜಯೇಂದ್ರ ಹೇಳಿದ್ದಾರೆ.

ಕನ್ನಡ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ನಟಿಸಿರುವ ಕಮಲ್ ಹಾಸನ್ ಅವರು ತಮ್ಮ ತಮಿಳು ಭಾಷೆಯನ್ನು ವೈಭವೀಕರಿಸುವ ಮತ್ತಿನಲ್ಲಿ ನಟ ಶಿವರಾಜ್ ಕುಮಾರ್ ಅವರನ್ನೂ ಕುಳ್ಳಿರಿಸಿಕೊಂಡು ಕನ್ನಡವನ್ನು ಅವಮಾನಿಸಿರುವುದು ಅಕ್ಷಮ್ಯ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. "ಕನ್ನಡವನ್ನು ಅವಹೇಳನ ಮಾಡುವ ಮುನ್ನ ಕನ್ನಡ ಚಿತ್ರಗಳಲ್ಲೂ ನಟಿಸಿರುವ ಕಮಲ್ ಹಾಸನ್ ಕನ್ನಡ, ಕನ್ನಡಿಗರ ಋಣ ತಮ್ಮ ಮೇಲಿದೆ ಎಂಬ ಔದಾರ್ಯತೆಯನ್ನು ಮರೆತಿದ್ದು ಅವರ ಉಪಕಾರ ಸ್ಮರಣೆಯಿಲ್ಲದ ವ್ಯಕ್ತಿತ್ವವನ್ನು ಅನಾವರಣಗೊಳಿಸಿದೆ" ಎಂದು ವಿಜಯೇಂದ್ರ ಹೇಳಿದ್ದಾರೆ.

ಇದಲ್ಲದೆ, ಕಮಲ್ ಹಾಸನ್ ಅವರು ಕಳೆದ ಕೆಲವು ವರ್ಷಗಳಿಂದ ನಿರಂತರವಾಗಿ ಹಿಂದೂ ಧರ್ಮವನ್ನು ಅವಹೇಳನ ಮಾಡುತ್ತಾ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುತ್ತಿದ್ದರು ಎಂದು ವಿಜಯೇಂದ್ರ ಆರೋಪಿಸಿದ್ದಾರೆ. "ಇದೀಗ ಆರೂವರೆ ಕೋಟಿ ಕನ್ನಡಿಗರ ಸ್ವಾಭಿಮಾನಕ್ಕೆ ಕೊಳ್ಳಿಯಿಟ್ಟು ಕನ್ನಡವನ್ನು ಅಪಮಾನಿಸಿದ್ದಾರೆ. ಈ ಕೂಡಲೇ ಕಮಲ್ ಹಾಸನ್ ಅವರು ಬೇಷರತ್ ಕನ್ನಡಿಗರ ಕ್ಷಮೆ ಕೇಳಬೇಕು" ಎಂದು ಅವರು ಆಗ್ರಹಿಸಿದ್ದಾರೆ. 

Similar News